ಧಾರವಾಡ

ಅಕ್ರಮ ಮರಳು ಸಾಗಾಟ ತಡೆಗೆ ಕ್ರಮ

Published On :

ಗದಗ: ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಾಟ ನಡೆಯುತ್ತಿದ್ದು, ಇದನ್ನು ಜಿಲ್ಲಾಡಳಿತ ಸಹಿಸುವುದಿಲ್ಲ. ಇದಕ್ಕಾಗಿ ಅಗತ್ಯ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.
ಅವರು ಮಂಗಳವಾರ ಸಂಜೆ ನಗರದ ಜಿಲ್ಲಾಡಳಿತ ಭವನದಲ್ಲಿ ಜರುಗಿದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ತಿಳಿಸಿದರು.
ಗದಗ ಜಿಲ್ಲೆಯ ತುಂಗಭದ್ರಾ ಹಾಗೂ ಮಲಪ್ರಭಾ ನದಿಯಲ್ಲಿನ ಮರಳನ್ನು ಅಕ್ರಮವಾಗಿ ತೆಗೆದು ಪಕ್ಕದ ಹುಬ್ಬಳ್ಳಿ, ಧಾರವಾಡ, ಬೆಳಗಾವಿಯಲ್ಲಿ ಮಾರಾಟ ಮಾಡಲಾಗುತ್ತಿದೆ. ಇದನ್ನು ತಡೆಗಟ್ಟುವುದು ಅನಿವಾರ್ಯ. ಇದು ಸರ್ಕಾರದ ಆಸ್ತಿಯಾಗಿದ್ದು, ಆದಾಯ ಬರುವ ರೀತಿಯಲ್ಲಿ ಕಾರ್ಯನಿರ್ವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು. ಮಧ್ಯೆ ಪ್ರವೇಶಿಸಿ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಎಸ್.ಡಿ. ಶರಣಪ್ಪ ಅಕ್ರಮ ಮರಳು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲ ಚೆಕ್‌ಪೋಸ್ಟ್ ಹಾಗೂ ಮರಳು ಸಂಗ್ರಹಾಗಾರದಲ್ಲಿ ಸಿ.ಸಿ. ಕ್ಯಾಮೆರಾ ಅಳವಡಿಕೆಗೆ ಚಿಂತನೆ ನಡೆಸಲಾಗಿದೆ. ಇದಕ್ಕಾಗಿ ಜಿಲ್ಲೆಯ 42 ಸ್ಥಳಗಳನ್ನು ಗುರುತಿಸಲಾಗಿದೆ ಎಂದರು. ಲೋಕೋಪಯೋಗಿ ಇಲಾಖೆ ಅಧಿಕಾರಿ ಬಳ್ಳಾರಿ ಮಾತನಾಡಿ, 1-4-2013 ರಿಂದ ಇಲ್ಲಿಯವರೆಗೂ ರು. 22 ಕೋಟಿ ರಾಜಸ್ವವು ಮರಳು ಸಾಗಾಟದಿಂದ ಸಂಗ್ರಹವಾಗಿದ್ದು, ಇಲಾಖೆ ಸ್ಟಾಕ್ ಯಾರ್ಡ್‌ಗಳಲ್ಲಿ 2200 ಟ್ರಕ್ ಮರಳು ಸಂಗ್ರಹವಿದೆ ಎಂದು ಮಾಹಿತಿ ನೀಡಿದರು. ಇದಕ್ಕೆ ಸೂಚನೆ ನೀಡಿದ ಸಚಿವ ಪಾಟೀಲ ಪ್ರತಿ ಕ್ಯೂಬಿಕ್ ಮೀಟರ್‌ಗೆ ರು. 600 ದರ ನಿಗದಿಗೊಳಿಸಿ, ತಮ್ಮ ವಾಹನಕ್ಕೆ ಜಿಪಿಎಸ್ ಅಳವಡಿಸಿಕೊಂಡು ಬರುವ ಗ್ರಾಹಕರಿಗೆ ಮರಳು ಮಾರಾಟ ಮಾಡಿರಿ. ಈ ಮಾರಾಟದಲ್ಲಿ ಕೇವಲ ಗದಗ ಜಿಲ್ಲೆಯವರಿಗೆ ಮಾತ್ರ ಅವಕಾಶ ನೀಡಬೇಕು ಎಂದು ತಿಳಿಸಿದರು. ಜಿಲ್ಲೆಯಲ್ಲಿ 1 ಲಕ್ಷ 64 ಸಾವಿರ ರೈತರಿದ್ದು, ಈ ಪೈಕಿ 51863 ಜನರು ಪ್ರಸಕ್ತ ಸಾಲಿನಲ್ಲಿ ಬೆಳೆವಿಮೆ ಕಂತು ಭರಿಸಿದ್ದು, ಇವರಲ್ಲಿ ಸಾಲ ಪಡೆಯದ 21354 ರೈತರು ವಿಮೆ ಪಡೆದಿದ್ದಾರೆ ಎಂದು ಕೃಷಿ ಅಧಿಕಾರಿ ಮಾಹಿತಿ ನೀಡಿದರು. ಗದಗ, ಬೆಟಗೇರಿ ಅವಳಿ ನಗರ ಸೇರಿದಂತೆ ಜಿಲ್ಲೆಯಾದ್ಯಂತ ವಿದ್ಯುತ್ ಕೊರತೆಯ ನೆಪ ಹೇಳಿ ಕುಡಿವ ನೀರಿನ ಪೂರೈಕೆಯಲ್ಲಿ ಯಾವುದೇ ಅಡೆತಡೆಯಾಗದಂತೆ ಕಾರ್ಯ ನಿರ್ವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಡಿಸಿ ಎನ್.ಎಸ್. ಪ್ರಸನ್ನಕುಮಾರ, ಜಿಪಂ ಸಿಇಒ ವೀರಣ್ಣ ತುರಮರಿ, ಶಿರಹಟ್ಟಿ ಶಾಸಕ ರಾಮಕೃಷ್ಣ ದೊಡ್ಡಮನಿ, ಜಿಪಂ ಉಪಾಧ್ಯಕ್ಷ ರಮೇಶ ಮುಂದಿನಮನಿ, ಜಿಪಂ ಶಿಕ್ಷಣ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಎಸ್. ದೊಡ್ಡಗೌಡ್ರ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು. ಸಭೆಯನ್ನು ಡಿ. 20ಕ್ಕೆ ಮುಂದೂಡಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.