ಮತ್ತೆ ಯುಪಿಎ ಅಧಿಕಾರಕ್ಕೆ
ಹುಬ್ಬಳ್ಳಿ: ಲೋಕಸಭೆ ಚುನಾವಣೆ ಸನ್ನಿಹಿತವಾಗುತ್ತಿದ್ದು, ಕೇಂದ್ರದಲ್ಲಿ ಮತ್ತೊಮ್ಮೆ ಯುಪಿಎ ಸರ್ಕಾರ ಅಧಿಕಾರಕ್ಕೆ ತರಲು ಪಕ್ಷದ ಕಾರ್ಯಕರ್ತರು ಶ್ರಮಿಸಬೇಕು. ಪಕ್ಷ ನಿರ್ಣಯಿಸುವ ಅಭ್ಯರ್ಥಿ ಗೆಲುವಿಗೆ ಯಾರೂ ಅಪಸ್ವರ ಎತ್ತಬಾರದು ಎಂದು ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ ಸೂಚಿಸಿದ್ದಾರೆ.
ನಗರದ ಸ್ವಾತಿ ಹೊಟೇಲ್ನಲ್ಲಿ ಬುಧವಾರ ನಡೆದ ಧಾರವಾಡ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಸಮಿತಿ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದರು. ಕೇಂದ್ರ ಸರ್ಕಾರದ ಜನಪರ ಯೋಜನೆಗಳನ್ನು ಜನರಿಗೆ ತಿಳಿಸಿಕೊಡುವ ಕೆಲಸ ಕಾರ್ಯಕರ್ತರಿಂದಾಗಬೇಕು. ರಾಜ್ಯದಲ್ಲಿ ಅಧಿಕಾರದಲ್ಲಿದ್ದೇವೆ ಎಂಬ ಮಾತ್ರಕ್ಕೆ ಮೈಮರೆಯುವುದು ಸರಿಯಲ್ಲ ಎಂದರು.
ಕೇಂದ್ರದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುವುದು ನಿಶ್ಚಿತ. ಬಿಜೆಪಿಗರು ಎಷ್ಟೇ ಮೋದಿಯವರ ಹೆಸರು ಹೇಳಿಕೊಂಡು ಓಡಾಡಿದರೂ ಅದು ಮತವಾಗಿ ಪರಿವರ್ತನೆಯಾಗುವುದಿಲ್ಲ. ಮೋದಿ ಬಗ್ಗೆ ಮಾತನಾಡುತ್ತಿರುವುದು ಬಿಜೆಪಿಗರೇ ವಿನಃ ಜನರಲ್ಲ ಎಂದು ಹೇಳಿದರು.
ಅರ್ಹ ಅಭ್ಯರ್ಥಿಗಳ ಆಯ್ಕೆ: ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಾಕಾಂಕ್ಷಿಯಾಗಿ ಅನೇಕರು ಅರ್ಜಿ ಸಲ್ಲಿಸಿದ್ದಾರೆ. ಹಾಗೆಂದ ಮಾತ್ರಕ್ಕೆ ಎಲ್ಲರಿಗೂ ಆಸ್ಪದ ನೀಡಲು ಸಾಧ್ಯವಿಲ್ಲ. ಎಐಸಿಸಿ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಿದೆ. ಪಕ್ಷ ಆಯ್ಕೆ ಮಾಡಿದ ಅಭ್ಯರ್ಥಿಯನ್ನು ಎಲ್ಲರೂ ಒಪ್ಪಿಕೊಂಡು ಬೆಂಬಲಿಸಿ, ಗೆಲ್ಲಿಸಬೇಕು ಎಂದರು. ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಜಿಲ್ಲೆಗೆ ಭೇಟಿ ನೀಡುತ್ತಿಲ್ಲ ಎಂಬ ಬಗ್ಗೆ ನನಗೆ ದೂರು ಬಂದಿದೆ. ಲಾಡ್ ಏಕೆ ಜಿಲ್ಲೆಗೆ ಬರುತ್ತಿಲ್ಲ ಎಂಬ ಸಂಗತಿ ನಿಮಗೂ ತಿಳಿದಿದೆ. ನಾನು ಲಾಡ್ ಅವರೊಂದಿಗೆ ಈ ಬಗ್ಗೆ ಚರ್ಚಿಸಿದ್ದೇನೆ. ಇನ್ನು ಮುಂದೆ ಅವರು ಜಿಲ್ಲೆಯ ಪ್ರಗತಿಯ ಬಗ್ಗೆ ನಿಗಾ ವಹಿಸಲಿದ್ದಾರೆ ಎಂದರು.
ಸಚಿವ ಸಂತೋಷ ಲಾಡ್ ಮಾತನಾಡಿ, ಕೇಂದ್ರದಲ್ಲಿ ಕಾಂಗ್ರೆಸ್ನ್ನು ಮತ್ತೊಮ್ಮೆ ಅಧಿಕಾರಕ್ಕೆ ತರಲು ಒಟ್ಟಾಗಿ ಕೆಲಸ ಮಾಡೋಣ. ತಾವು ವೈಯಕ್ತಿಕ ಸಮಸ್ಯೆಯಿಂದಾಗಿ ಜಿಲ್ಲೆಗೆ ಪದೇ ಪದೇ ಬರಲಾಗುತ್ತಿಲ್ಲ ಎಂಬುದು ನಿಜ. ಈ ಬಗ್ಗೆ ಕಾರ್ಯಕರ್ತರು ಬೇಸರ ಪಟ್ಟುಕೊಳ್ಳಬೇಕಿಲ್ಲ. ಮುಂದೆ ಈ ರೀತಿಯ ಸಮಸ್ಯೆ ಪುನರಾವರ್ತನೆಯಾಗದು ಎಂದರು.
ಯೋಜನೆ ಮನೆ ಬಾಗಿಲಿಗೆ ತಲುಪಿಸಿ: ರಾಜ್ಯ ಕಾಂಗ್ರೆಸ್ ಸರ್ಕಾರ ಬಡವರಿಗೆ ಅನುಕೂಲವಾಗುವ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದೆ. ಈ ಯೋಜನೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಹಾಗೂ ಈ ಬಗ್ಗೆ ಪ್ರಚಾರ ಕೈಗೊಳ್ಳುವ ಕೆಲಸ ಕಾರ್ಯಕರ್ತರು ಮಾಡಬೇಕು ಎಂದು ಲಾಡ್ ಕರೆ ನೀಡಿದರು.
ಧಾರವಾಡ ಜಿಲ್ಲಾ ಗ್ರಾಮೀಣ ಅಧ್ಯಕ್ಷ ಸಿ.ಎಸ್. ಶಿವಳ್ಳಿ ಮಾತನಾಡಿ, ಜಿಲ್ಲೆ ಕಾಂಗ್ರೆಸ್ ಭದ್ರಕೋಟೆಯಾಗಿದೆ. ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಲು ಎಲ್ಲರೂ ಶ್ರಮಿಸಬೇಕು ಎಂದರು.
ವಿಪ ಸದಸ್ಯ ವೀರಣ್ಣ ಮತ್ತಿಕಟ್ಟಿ, ನಾಗರಾಜ ಛಬ್ಬಿ, ಶಾಸಕ ಪ್ರಸಾದ ಅಬ್ಬಯ್ಯ, ಎ.ಎಂ. ಹಿಂಡಸಗೇರಿ, ಆರ್.ಬಿ. ತಿಮ್ಮಾಪುರ ಮತ್ತಿರರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

