ಧಾರವಾಡ

ಆಯುಷ್ ವೈದ್ಯರಿಗೆ ಅಲೋಪಥಿ ಬಳಕೆ ಅವಕಾಶ ನೀಡಿ: ಮಗ್ದುಮ್

Published On :

ಕನ್ನಡಪ್ರಭ ವಾರ್ತೆ, ಹುಬ್ಬಳ್ಳಿ, ನ. 24
ದೇಶದ 12 ರಾಜ್ಯಗಳಲ್ಲಿ ಆಯುಷ್ ವೈದ್ಯರಿಗೆ ತುರ್ತು ಸಂದರ್ಭಗಳಲ್ಲಿ ಅಲೋಪಥಿ ವೈದ್ಯ ಪದ್ಧತಿ ಬಳಕೆಗೆ ಅನುಕೂಲ ಕಲ್ಪಿಸಿದಂತೆ ರಾಜ್ಯದ ಆಯುಷ್ ವೈದ್ಯರಿಗೂ ಅವಕಾಶ ಕಲ್ಪಿಸಬೇಕು ಎಂದು ಆಯುಷ್ ಫೆಡರೇಷನ್ ಆಫ್ ಇಂಡಿಯಾ ರಾಜ್ಯ ಘಟಕದ ಅಧ್ಯಕ್ಷ ಎನ್.ಎ. ಮಗ್ದುಮ್ ಹೇಳಿದರು.
ಭಾನುವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಪ್ರೀಂಕೋರ್ಟ್ ಕೂಡ ಆಯುಷ್ ವೈದ್ಯರಿಗೆ ಅಲೋಪಥಿ ಪದ್ಧತಿಗೆ ಬಳಕೆಗೆ ಅವಕಾಶ ನೀಡಬೇಕು ಎಂದು ಹೇಳಿದ್ದು, ಬೇಡಿಕೆಗೆ ಈಡೇರಿಕೆಗಾಗಿ ಕಳೆದ ಒಂದು ವರ್ಷದಿಂದ ಹೋರಾಟ ಮಾಡುತ್ತಿದ್ದರೂ ಸರ್ಕಾರ ಕಣ್ತೆರೆದಿಲ್ಲ ಎಂದು ಹೇಳಿದರು.
ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಲ್ಲಿ ಆಯುಷ್ ವೈದ್ಯ ಪದ್ಧತಿ ವ್ಯಾಸಂಗ ಮಾಡುವ ಸಂದರ್ಭದಲ್ಲಿ ಅಲೋಪಥಿಗೆ ಸಂಬಂಧಿಸಿದ ಪಠ್ಯಕ್ರಮವನ್ನು ಅಧ್ಯಯನ ಮಾಡಿದ್ದಾರೆ. ಆಯುಷ್ ವೈದ್ಯ ಪದ್ಧತಿ ಪಠ್ಯಕ್ರಮ ರಾಷ್ಟ್ರಾದ್ಯಂತ ಒಂದೇ ತೆರನಾಗಿದ್ದು, 12 ರಾಜ್ಯಗಳು ತುರ್ತು ಸಂದರ್ಭಗಳಲ್ಲಿ ಅಲೋಪಥಿ ಔಷಧಗಳ ಬಳಕೆಗೆ ಅನುಮತಿ ನೀಡಲಾಗಿದೆ.
ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಆಯುಷ್ ವೈದ್ಯರನ್ನು ರಾಷ್ಟ್ರೀಯ ಆರೋಗ್ಯ ಯೋಜನೆಗಳಾದ ಕ್ಷಯರೋಗ, ಮಲೇರಿಯಾ ನಿರ್ಮೂಲನೆ ಕಾರ್ಯಕ್ರಮದಲ್ಲಿ ಬಳಸಿಕೊಳ್ಳಲಾಗುತ್ತಿದೆ. ಎಂಬಿಬಿಎಸ್ ವೈದ್ಯರು ಇಲ್ಲದ ಆಸ್ಪತ್ರೆಗಳಲ್ಲಿ ಆಯುಷ್ ವೈದ್ಯರು ಅಲೋಪಥಿ ಔಷಧಿ ನೀಡಿ ಚಿಕಿತ್ಸೆ ನೀಡುತ್ತಿದ್ದಾರೆ. ಆದರೆ ಖಾಸಗಿಯಾಗಿ ಸೇವೆ ಸಲ್ಲಿಸುತ್ತಿರುವ ಆಯುಷ್ ವೈದ್ಯರಿಗೆ ಅಲೋಪಥಿ ಬಳಕೆಗೆ ಅವಕಾಶ ನೀಡದೇ ಸರ್ಕಾರ ತಾರತಮ್ಯ ಮಾಡುತ್ತಿದೆ ಎಂದು ಅಸಮಾಧಾನ ವ್ಯಕ್ತ ಪಡಿಸಿದರು.
ಗ್ರಾಮೀಣ ಪ್ರದೇಶದಲ್ಲಿ 40 ಸಾವಿರ ಅಲೋಪಥಿ ವೈದ್ಯರ ಕೊರತೆ ಇದೆ. ಈ ಕೊರತೆಯನ್ನು ಆಯುಷ್ ವೈದ್ಯರು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುವ ಮೂಲಕ ನೀಗಿಸಿದ್ದಾರೆ. ತುರ್ತು ಸಂದರ್ಭಗಳಲ್ಲಿ ಅಲೋಪಥಿ ಔಷಧಿ ಬಳಕೆ ಅನಿವಾರ್ಯ ಎನ್ನುವ ವಾದವನ್ನು ವಿಧಾನಸಭೆ ಮತ್ತು ವಿಧಾನಪರಿಷತ್ ಸದಸ್ಯರು ಮತ್ತು ಪ್ರತಿಪಕ್ಷ ನಾಯಕರು ಒಪ್ಪಿಕೊಂಡು ಆರೋಗ್ಯ ಸಚಿವರಿಗೆ ಪತ್ರ ಬರೆದು ಅಲೋಪಥಿ ಬಳಕೆಗೆ ಅವಕಾಶ ನೀಡಬೇಕು ಎಂದು ಸಮ್ಮತಿ ಪತ್ರ ನೀಡಿದ್ದಾರೆ.
ಸರ್ವೋಚ್ಚ ನ್ಯಾಯಾಲಯದ ನಿರ್ದೇಶನದಂತೆ ಸರ್ಕಾರ ಚಳಿಗಾಲ ಅಧಿವೇಶನದಲ್ಲಿ ಅಲೋಪಥಿ ಔಷಧಗಳ ಬಳಕೆಗೆ ಸಂಬಂಧಿಸಿದಂತೆ ಜಾರಿಯಲ್ಲಿರುವ ಕಾನೂನಿಗೆ ತಿದ್ದುಪಡಿ ತಂದು ಆಯುಷ್ ವೈದ್ಯರಿಗೆ ಅನುಕೂಲ ಮಾಡಿಕೊಡಬೇಕು. ಕಾನೂನು ತಿದ್ದುಪಡಿಯಿಂದ ಸರ್ಕಾರದ ಮೇಲೆ ಯಾವುದೇ ಹಣಕಾಸು ಭಾರ ಬೀಳುವುದಿಲ್ಲ. ಅಲೋಪಥಿ ಔಷಧ ಬಳಕೆಗೆ ಸಂಬಂಧಿಸಿದಂತೆ ಜಿಲ್ಲಾಸ್ಪತ್ರೆಗಳಲ್ಲಿ ಆರು ತಿಂಗಳು ಆಯುಷ್ ವೈದ್ಯರಿಗೆ ತರಬೇತಿ ನೀಡುವುದಕ್ಕೆ ಕ್ರಮ ತೆಗೆದುಕೊಳ್ಳುವುದರಿಂದ ಜಿಲ್ಲಾಸ್ಪತ್ರೆಗಳಲ್ಲಿ ವೈದ್ಯರ ಕೊರತೆ ಕೂಡ ನೀಗಿಸಬಹುದು ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಕಾರ್ಯದರ್ಶಿ ಡಾ. ಮಹಾವೀರ ಹಾವೇರಿ, ಸಂಘಟನಾ ಕಾರ್ಯದರ್ಶಿ ಡಾ. ಸೋಮಶೇಖರ ಹುದ್ದಾರ, ಎನ್.ಎಚ್. ಬಿರಾದಾರ, ಆನಂದ ಕಿರಸಾಳ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.