ಧಾರವಾಡ

ಮಹಿಳಾ ಕಾನೂನು ಬಲಗೊಳ್ಳಲಿ: ಡಾ. ಸುಬ್ರಹ್ಮಣ್ಯ

Published On :

ಧಾರವಾಡ: ಮಹಿಳಾ ದೌರ್ಜನ್ಯ ವಿರುದ್ಧದ ಕಾನೂನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿದಾಗ ಮಾತ್ರ ಮಹಿಳೆಯರ ಸ್ಥಿತಿ ಸುಧಾರಿಸಲು ಸಾಧ್ಯ ಎಂದು ಹುಬ್ಬಳ್ಳಿಯ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಕುಲಪತಿ ಡಾ. ಟಿ.ಆರ್. ಸುಬ್ರಹ್ಮಣ್ಯ ಪ್ರತಿಪಾದಿಸಿದರು.
ನಗರದ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ (ಎಐಎಂಎಸ್‌ಎಸ್), ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂತ್ ಆರ್ಗನೈಸೇಷನ್ (ಎಐಡಿವೈಓ) ಹಾಗೂ ಆಲ್ ಇಂಡಿಯಾ ಡೆಮಾಕ್ರೆಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್ (ಎಐಡಿಎಸ್‌ಓ)ಗಳ ಜಿಲ್ಲಾ ಘಟಕಗಳ ಸಹಯೋಗದಲ್ಲಿ ಮಹಿಳೆಯರ ಮೇಲಿನ ಅಪರಾಧಗಳ ವಿರುದ್ಧ ಶುಕ್ರವಾರ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಮಹಿಳಾ, ವಿದ್ಯಾರ್ಥಿ, ಯುವಜನ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.
ಎಐಎಂಎಸ್‌ಎಸ್ ಮಹಿಳಾ ಸಂಘಟನೆಯ ರಾಜ್ಯ ಉಪಾಧ್ಯಕ್ಷೆ ಎಂ.ಎನ್. ಮಂಜುಳಾ ಮಾತನಾಡಿ, ಪುರುಷ ಪ್ರಧಾನ ಧೋರಣೆಗಳು ಸಮಾಜದಲ್ಲಿ ಆಳವಾಗಿ ಬೇರೂರಿವೆ. ನಿರ್ಭಯಾ ಪ್ರಕರಣದ ಬಳಿಕ ದೇಶದಾದ್ಯಂತ ಮಹಿಳಾ ದೌರ್ಜನ್ಯ ಖಂಡಿಸಿ ಲಕ್ಷಾಂತರ ಜನರು ಬೀದಿಗಿಳಿದಿದ್ದಾರೆ. ಇಷ್ಟಾದ ಬಳಿಕವೂ ಸಿಬಿಐ ನಿರ್ದೇಶಕರು ಹಾಗೂ ಸುಪ್ರೀಂಕೋರ್ಟ್ ನ್ಯಾಯಮೂರ್ತಿಯೊಬ್ಬರು ಮಹಿಳೆಗೆ ಅಪಮಾನವಾಗುವ ರೀತಿಯ ಹೇಳಿಕೆ ನೀಡಿದ್ದಾರೆ. ಹಾಗಾಗಿ ಈ ಹೋರಾಟ ವಿಸ್ತೃತ ನೆಲೆಯಲ್ಲಿ ನಡೆಯಬೇಕು ಎಂದು ಸಲಹೆ ನೀಡಿದರು.
ಲೇಖಕಿ ಡಾ. ಹೇಮಾ ಪಟ್ಟಣಶೆಟ್ಟಿ ಮಾತನಾಡಿ, ಇಂದಿಗೂ ಮಾಧ್ಯಮಗಳಲ್ಲಿ ಮಹಿಳೆಯನ್ನು ಹಳೆಯ ಊಳಿಗಮಾನ್ಯ ಧೋರಣೆಗಳೊಂದಿಗೇ ತೋರಿಸಲಾಗುತ್ತಿದೆ. ಮಹಿಳೆಯರು ಅಂಥ ಪ್ರಭಾವಗಳಿಗೆ ಒಳಗಾಗದೇ ಸ್ವತಂತ್ರ ಚಿಂತನೆ ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು.
ಅಂಜುಮನ್ ಪದವಿ ಕಾಲೇಜಿನ ಪ್ರಾಚಾರ್ಯ ಡಾ. ಸೋಫಿಯಾ ಬೇಗಂ ಪಠಾಣ ಮಾತನಾಡಿ, ಜಾತಿ, ಧರ್ಮ, ಬಡವ-ಶ್ರೀಮಂತಿಕೆಯ ಭೇದವಿಲ್ಲದೆ ಎಲ್ಲ ಸ್ತರದ ಮಹಿಳೆಯರು ಶೋಷಣೆಯನ್ನು ಮಾತ್ರ ಸಮಾನವಾಗಿ ಅನುಭವಿಸುತ್ತಿದ್ದಾರೆ. ಮಹಿಳಾ ದೌರ್ಜನ್ಯ ಪ್ರಕರಣಗಳಲ್ಲಿ ಶೀಘ್ರ ನ್ಯಾಯದಾನ ಜಾರಿಗೆ ತರಬೇಕು ಎಂದು ಆಗ್ರಹಿಸಿದರು.
ಎಐಡಿವೈಒ ಯುವಜನ ಸಂಘಟನೆಯ ರಾಜ್ಯ ಅಧ್ಯಕ್ಷರಾದ ರಾಮಾಂಜನಪ್ಪ ಆಲ್ದಳ್ಳಿ ಮಾತನಾಡಿದರು.
ಇತ್ತೀಚೆಗೆ ಬೆಂಗಳೂರಿನಲ್ಲಿ ನಿಧನರಾದ ಎಐಎಂಎಸ್‌ಎಸ್ ಮಹಿಳಾ ಸಂಘಟನೆಯ ರಾಜ್ಯ ಅಧ್ಯಕ್ಷೆ ಬಿ.ಎಸ್.ಪ್ರತಿಭಾಕುಮಾರಿಯವರ ಸ್ಮರಣಾರ್ಥ ಸಂತಾಪ ಸೂಚಕ ಗೊತ್ತುವಳಿಯನ್ನು ಎಐಎಂಎಸ್‌ಎಸ್ ಜಿಲ್ಲಾ ನಾಯಕಿ ಭುವನಾ ಬಳ್ಳಾರಿ ಮಂಡಿಸಿದರು.
ಜಿಲ್ಲಾ ಮಟ್ಟದಲ್ಲಿ ಮಹಿಳಾ ಸಂರಕ್ಷಣೆಗೆ ಅಗತ್ಯವಾದ ಕ್ರಮಗಳನ್ನು ಜಿಲ್ಲಾಡಳಿತ ಈಡೇರಿಸಬೇಕು ಎಂಬ ಗೊತ್ತುವಳಿಗಳನ್ನು ಎಐಎಂಎಸ್‌ಎಸ್ ಜಿಲ್ಲಾ ಸಂಚಾಲಕಿ ಪ್ರಭಾವತಿ ಗೂಗಲ್ ಮಂಡಿಸಿದರು. ಎಐಡಿಎಸ್‌ಓ ಜಿಲ್ಲಾ ಅಧ್ಯಕ್ಷ ಶರಣು ಗೋನವಾರ ಅನುಮೋದಿಸಿದರು. ಎಐಡಿವೈಓ ಜಿಲ್ಲಾ ಅಧ್ಯಕ್ಷ ಲಕ್ಷ್ಮಣ ಜಡಗನ್ನವರ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಸಂಘಟನಾಕಾರರಾದ ಭವಾನಿಶಂಕರ್, ದೀಪಾ, ರಮೇಶ, ನಿರ್ಮಲಾ ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.