ಧಾರವಾಡ

'ಅನುದಾನಿತ ಶಿಕ್ಷಕರಿಗೆ ಸೌಲಭ್ಯಕ್ಕಾಗಿ ನ.16ರಿಂದ ಹೋರಾಟ'

Published On :

ಹುಬ್ಬಳ್ಳಿ: ಅನುದಾನರಹಿತ ಸೇವಾವಧಿಯ ಎಲ್ಲ ಸೌಲಭ್ಯಗಳನ್ನು ಅನುದಾನಿತ ಶಾಲಾ ನೌಕರರಿಗೆ ನೀಡುವಂತೆ ಹೈಕೋರ್ಟ್ ನೀಡಿರುವ ಆದೇಶವನ್ನು ಸರ್ಕಾರ ತಕ್ಷಣ ಅನುಷ್ಠಾನಗೊಳಿಸದಿದ್ದರೆ ತೀವ್ರ ಸ್ವರೂಪದ ಹೋರಾಟ ಮಾಡುವುದಾಗಿ ಕರ್ನಾಟಕ ಮಾಧ್ಯಮಿಕ ಶಾಲಾ ನೌಕರರ ಸಂಘದ ಅಧ್ಯಕ್ಷರೂ ಆಗಿರುವ ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಎಚ್ಚರಿಕೆ ನೀಡಿದ್ದಾರೆ.
ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನ್ಯಾಯಾಲಯದ ಆದೇಶದಂತೆ ಎಲ್ಲ ಸೌಲಭ್ಯಗಳ ಈಡೇರಿಕೆಗೆ ಸುಮಾರು 1,600 ಕೋಟಿ ಅವಶ್ಯಕತೆ ಇದೆಯೆಂದು ಸರ್ಕಾರ ಹಾಕಿರುವ ಲೆಕ್ಕಾಚಾರ ತಪ್ಪಾಗಿದೆ. ಸರ್ಕಾರ ಶೀಘ್ರ ಸಭೆ ಕರೆದಲ್ಲಿ ಸೌಲಭ್ಯಕ್ಕೆ ತಗಲುವ ಆರ್ಥಿಕ ಹೊರೆಯ ಲೆಕ್ಕಾಚಾರ ಹಾಗೂ ಮತ್ತಿತರ ವಿಷಯಗಳ ಬಗ್ಗೆ ಚರ್ಚಿಸಬಹುದು ಎಂದರು.
ಸರ್ಕಾರ ಬೇಡಿಕೆ ಈಡೇರಿಕೆಗೆ ಸ್ಪಂದಿಸದೇ ಹೋದಲ್ಲಿ ವಿವಿಧ ರೀತಿಯ ಹೋರಾಟ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ. ವಿದ್ಯಾರ್ಥಿಗಳಿಗೆ ಆಗುವ ತೊಂದರೆ ತಪ್ಪಿಸಲು ಪ್ರತಿ ಶನಿವಾರ ಶಾಲೆಯ ಅವಧಿಯ ನಂತರ ಹೋರಾಟ ನಡೆಸಲು ತೀರ್ಮಾನಿಸಲಾಗಿದೆ. ಸರ್ಕಾರ ಈ ಹೋರಾಟಕ್ಕೆ ಪ್ರತಿಕ್ರಿಯಿಸದೇ ಇದ್ದಲ್ಲಿ ಕಳೆದ 2002ರಲ್ಲಿ ನಡೆಸಿದ ಹೋರಾಟದ ಮಾದರಿಯಲ್ಲಿ ಶಾಲಾ-ಕಾಲೇಜುಗಳನ್ನು ಬಂದ್ ಮಾಡಿ ಪ್ರತಿಭಟಿಸಲಾಗುವುದು ಎಂದು ಎಚ್ಚರಿಸಿದರು.  ನ.16ರಂದು ಎಲ್ಲ ಶಿಕ್ಷಕರು ತಮ್ಮ ಶಾಲೆಗಳಲ್ಲಿ ಕಪ್ಪು ಬಟ್ಟೆ ಧರಿಸಿ ಬೇಡಿಕೆಗಳ ಬಗ್ಗೆ ಪ್ರತಿಭಟನೆ ನಡೆಸುವರು. ನ.23ರಂದು ಆಯಾ ತಾಲೂಕಿನ ಕೇಂದ್ರ ಸ್ಥಾನದಲ್ಲಿ ಮಧ್ಯಾಹ್ನ 1 ಗಂಟೆಗೆ ಸೇರಿ, ತಹಸೀಲ್ದಾರ್ ಕಚೇರಿ ಎದುರು ಧರಣಿ ನಡೆಸಿ ಸರ್ಕಾರಕ್ಕೆ ಬೇಡಿಕೆಗಳ ಬಗ್ಗೆ ಮನವಿ ಸಲ್ಲಿಸುವರು. ನ.30ರಂದು ಆಯಾ ಜಿಲ್ಲೆಯ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಲಾಗುವುದು. ಈ ಹೋರಾಟಗಳಿಗೆ ಸರ್ಕಾರ ಸ್ಪಂದಿಸದೇ ಇದ್ದಲ್ಲಿ ಡಿ.29ರಂದು ಕರ್ನಾಟಕ ಮಾಧ್ಯಮಿಕ ಶಾಲಾ ನೌಕರರ ಸಂಘದ ಕೇಂದ್ರ ಸಮಿತಿಯ ಸಭೆ ಕರೆದು ಮುಂದಿನ ಹೋರಾಟದ ಮಾರ್ಗೋಪಾಯ ರೂಪಿಸಲಾಗುವುದು ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.