ನನಗೆ ಮುಖ್ಯಮಂತ್ರಿ ಸ್ಥಾನ ಬೇಕಾಗಿಲ್ಲ
ಕನ್ನಡಪ್ರಭ ವಾರ್ತೆ, ಹುಬ್ಬಳ್ಳಿ, ಅ. 17
'ನನಗೆ ಮುಖ್ಯಮಂತ್ರಿ ಸ್ಥಾನ ಬೇಕಾಗಿಲ್ಲ. ಬೇಕಾದರೆ ಈ ಬಗ್ಗೆ ರಕ್ತದಲ್ಲಿ ಬರೆದುಕೊಡಲೂ ಸಿದ್ಧ. ಖುರ್ಚಿಗಾಗಿ ಹೋರಾಡುವ ಜಾಯಮಾನವೂ ನನ್ನದಲ್ಲ.'
ಮಾಜಿ ಮುಖ್ಯಮಂತ್ರಿ ಹಾಗೂ ಕೆಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದ ಮಾತಿದು. ಹುಬ್ಬಳ್ಳಿಯಲ್ಲಿ ಗುರುವಾರ ಆಯೋಜಿಸಿದ್ದ ಕೆಜೆಪಿ ಜನಾಂದೋಲನ ಸಭೆಯಲ್ಲಿ ಮಾತನಾಡಿದ ಅವರು, ಮುಂದಿನ ಲೋಕಸಭೆ ಚುನಾವಣೆಯಲ್ಲಿ ಕೆಜೆಪಿ 10 ಹಾಗೂ ಬಿಜೆಪಿ 9 ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ಧೂಳಿಪಟವಾಗಲಿದೆ ಎಂದು ಭವಿಷ್ಯ ನುಡಿದರು.
ಕೇಂದ್ರದ ಯುಪಿಎ ಹಾಗೂ ರಾಜ್ಯದ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಯಡಿಯೂರಪ್ಪ, ಯುಪಿಎ ಸರ್ಕಾರ ಭ್ರಷ್ಟಾಚಾರಕ್ಕೆ ಕುಮ್ಮಕ್ಕು ನೀಡುತ್ತಿದೆ. ಹತ್ತು ವರ್ಷದ ಯುಪಿಎ ಸರ್ಕಾರದ ಆಡಳಿತ ಅವಧಿಯಲ್ಲಿ ದೇಶದ ಆರ್ಥಿಕ ಪರಿಸ್ಥಿತಿ ಅಧೋಗತಿಗೆ ಇಳಿದಿದೆ. ಆಂತರಿಕ ಹಾಗೂ ಬಾಹ್ಯ ಭದ್ರತೆಯೂ ಆತಂಕಕ್ಕೆ ಸಿಲುಕಿದೆ. ಈ ಅವಧಿಯಲ್ಲಿ ನಿತ್ಯೋಪಯೋಗಿ ವಸ್ತುಗಳ ಬೆಲೆ ಗಗನಕ್ಕೇರಿದ್ದರೂ ಬೆಂಬಲ ಬೆಲೆ ಇಲ್ಲದೇ ರೈತರು ಕಂಗಾಲಾಗಿದ್ದಾರೆ ಎಂದರು.
ಮನವೊಲಿಸುವ ಪ್ರಯತ್ನ: ತಾವು ಮುಖ್ಯಮಂತ್ರಿಯಾಗಿದ್ದಾಗ ರಾಜ್ಯದಲ್ಲಿ ಶೇ. 3 ಹಾಗೂ 1 ರ ಬಡ್ಡಿ ದರದಲ್ಲಿ ರೈತರಿಗೆ ಸಾಲ ನೀಡಲಾಯಿತು. ನರೇಂದ್ರ ಮೋದಿ ಪ್ರಧಾನಿಯಾದಲ್ಲಿ ಎಲ್ಲ ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ ರೈತರಿಗೆ ಶೇ. 3 ಹಾಗೂ 1ರ ಬಡ್ಡಿ ದರದಲ್ಲಿ ಸಾಲ ನೀಡುವಂತೆ ಅವರ ಮನವೊಲಿಸುವ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.
ಈ ಹಿಂದೆ ಬಿಜೆಪಿಯ ಇಬ್ಬರೇ ಶಾಸಕರು ವಿಧಾನಸಭೆಯಲ್ಲಿದ್ದರು. ನಂತರದ ಕೆಲವೇ ವರ್ಷಗಳಲ್ಲಿ ಬಿಜೆಪಿ ರಾಜ್ಯದ ಅಧಿಕಾರದ ಚುಕ್ಕಾಣಿ ಹಿಡಿಯಿತು. ಕೆಜೆಪಿ ಭವಿಷ್ಯವೂ ನಿಚ್ಚಳವಾಗಿದೆ. ಭವಿಷ್ಯದಲ್ಲಿ ಕೆಜೆಪಿ ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದು ಶತಸಿದ್ಧ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಕಾಂಗ್ರೆಸ್ ಸರ್ಕಾರದ ದುರಾಡಳಿತದಿಂದ ರೈತರು ಸ್ವಾಭಿಮಾನ ಕಳೆದುಕೊಂಡು ಜೀವನ ನಡೆಸುವಂತಾಗಿದೆ. ರೈತರು ಸಾಲದಲ್ಲಿ ಬದುಕು ಸಾಗಿಸಲು ಬಿಡುವುದಿಲ್ಲ ಎಂದು ಬಿಎಸ್ವೈ ಹೇಳಿದರು. ಇದಕ್ಕೂ ಮೊದಲು ಮಾತನಾಡಿದ ಮಾಜಿ ಸಚಿವ ಹಾಗೂ ಕೆಜೆಪಿ ಮುಖಂಡ ಸಿ.ಎಂ. ಉದಾಸಿ, ಬರಲಿರುವ ಲೋಕಸಭೆ ಚುನಾವಣೆಯಲ್ಲಿ ಮತದಾರ ಎಚ್ಚೆತ್ತುಕೊಳ್ಳದಿದ್ದರೆ ದೇಶದ ಭದ್ರತೆ ಅಪಾಯಕ್ಕೊಳಗಾಗುವುದು ಖಂಡಿತ ಎಂದು ಆತಂಕ ವ್ಯಕ್ತಪಡಿಸಿದರು.
ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸಮನ್ವಯದ ಕೊರತೆ ಇದೆ. ಮೂಲ ಕಾಂಗ್ರೆಸ್ಸಿಗರು ಹಾಗೂ ವಲಸೆ ಕಾಂಗ್ರೆಸ್ಸಿಗರ ಮಧ್ಯೆ ಭಿನ್ನಾಭಿಪ್ರಾಯವಿದೆ. ಇದರೊಂದಿಗೆ ಹಳಬ ಹಾಗೂ ಹೊಸ ಮುಖಂಡರ ಮಧ್ಯೆಯೂ ತಾಳಮೇಳ ಇಲ್ಲ. ಇದರ ನೇರ ಪರಿಣಾಮ ಸರ್ಕಾರದ ಮೇಲಾಗುತ್ತಿದ್ದು, ಆಡಳಿತ ಯಂತ್ರ ನಿಯಂತ್ರಣ ತಪ್ಪುತ್ತಿದೆ ಎಂದು ಆರೋಪಿಸಿದರು.
ಬೆಳೆಗೂ ಬೆಲೆ ನೀಡುತ್ತಿಲ್ಲ: ರಾಜ್ಯದಲ್ಲಿ ರೇಲ್ವೆ ಯೋಜನೆಗಳ ಅನುಷ್ಠಾನಕ್ಕೆ ಸರ್ಕಾರ ಹಣ ನೀಡುತ್ತಿಲ್ಲವೆಂದು ಕೇಂದ್ರ ರೇಲ್ವೆ ಸಚಿವ ಮಲ್ಲಿಕಾರ್ಜುನ ಖರ್ಗೆ ಅವರೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಭಿವೃದ್ಧಿ ಕಾರ್ಯಗಳನ್ನು ನಿರ್ಲಕ್ಷಿಸಿರುವ ಸರ್ಕಾರ, ರೈತರ ಬೆಳೆಗಳಿಗೂ ಬೆಲೆ ನೀಡುತ್ತಿಲ್ಲ ಎಂದು ದೂರಿದರು. ಮುಂದಿನ ದಿನಗಳಲ್ಲಿ ಕೆಜೆಪಿ ತನ್ನ ಅಸ್ತಿತ್ವ ಉಳಿಸಿಕೊಳ್ಳಲಿದೆ ಎಂದು ಮಾಜಿ ಸಂಸದ ವಿಜಯ ಸಂಕೇಶ್ವರ ಹೇಳಿದರು.
ಮಾಜಿ ಸಚಿವ ರೇಣುಕಾಚಾರ್ಯ, ಮಾಜಿ ಶಾಸಕ ಎಸ್.ಐ. ಚಿಕ್ಕನಗೌಡ್ರ, ಮೈಕಲ್ ಫರ್ನಾಂಡಿಸ್ ಹಾಗೂ ಮತ್ತಿತರರು ಮಾತನಾಡಿದರು. ಧನಂಜಯಕುಮಾರ, ಯು.ಬಿ. ಬಣಕಾರ, ಅಶೋಕ ಕಾಟವೆ, ರಾಜೇಂದ್ರ ಗೋಖಲೆ, ಈಶ್ವರಚಂದ್ರ ಹೊಸಮನಿ, ಬಾಬುರಾವ್ ಚವ್ಹಾಣ ಮತ್ತಿತರರು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

