ಯತ್ನಾಳ ಪುನರಾಗಮನಕ್ಕೆ ವೇದಿಕೆ ಸಿದ್ಧ
ಹುಬ್ಬಳ್ಳಿ: ಪಕ್ಷದಿಂದ ಉಚ್ಛಾಟಿತಗೊಂಡು ಜೆಡಿಎಸ್ ತೆಕ್ಕೆಯಲ್ಲಿದ್ದ ಮಾಜಿ ಸಂಸದ ಬಸನಗೌಡ ಪಾಟೀಲ ಯತ್ನಾಳ ಅವರ ಪುನರಾಗಮನಕ್ಕೆ ಬಿಜೆಪಿ ರಾಜ್ಯ ಮಟ್ಟದ ಮುಖಂಡರು ಶನಿವಾರ ರಾತ್ರಿ ವೇದಿಕೆ ಸಿದ್ಧಪಡಿಸಿದ್ದು, ಶೀಘ್ರದಲ್ಲಿ ಬಸನಗೌಡ ಪಾಟೀಲ ಬಿಜೆಪಿಗೆ ಮರಳಲಿದ್ದಾರೆ.
ಶನಿವಾರ ರಾತ್ರಿ ಹುಬ್ಬಳ್ಳಿಯ ನಿರೀಕ್ಷಣಾ ಮಂದಿರದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಪ್ರಹ್ಲಾದ ಜೋಶಿ, ಮಾಜಿ ಸಿಎಂ ಜಗದೀಶ ಶೆಟ್ಟರ, ಮಾಜಿ ಸಚಿವ ಗೋವಿಂದ ಕಾರಜೋಳ ಗೌಪ್ಯ ಸಭೆ ನಡೆದಿದೆ. ಸಭೆಯಲ್ಲಿ ವಿಧಾನಪರಿಷತ್ ಸದಸ್ಯ ಅರುಣ ಶಹಾಪುರ, ಮಾಜಿ ಶಾಸಕರಾದ ರಮೇಶ ಭೂಸನೂರ, ಎಸ್.ಕೆ. ಬೆಳ್ಳುಬ್ಬಿ, ಶ್ರೀಕಾಂತ ಕುಲಕರ್ಣಿ ಸೇರಿದಂತೆ ಬಿಜಾಪುರ ಮತ್ತು ಬಾಗಲಕೋಟೆ ಜಿಲ್ಲೆಯ ಬಿಜೆಪಿ ಮುಖಂಡರು ಇದ್ದರು.
ಈ ವೇಳೆ ಹಳೆಯದನ್ನು ಮರೆತು ಪಕ್ಷಕ್ಕೆ ಬನ್ನಿ ಎಂದು ಬಿಜೆಪಿ ಮುಖಂಡರು ಹೇಳಿದ್ದಾರೆನ್ನಲಾಗಿದೆ. ಇದಕ್ಕೆ ಉತ್ತರವಾಗಿ ಬಸನಗೌಡ ಪಾಟೀಲ ಎಲ್ಲ ಮರೆತು ಮರಳಿ ಪಕ್ಷಕ್ಕೆ ಬರುತ್ತಿದ್ದೇನೆ ಎಂದಿದ್ದಾರೆ ಎನ್ನಲಾಗಿದೆ.
ಸಭೆಯ ನಂತರ ಸುದ್ದಿಗಾರರೊಂದಿಗೆ ಮೊದಲು ಮಾತನಾಡಿದ ಬಸನಗೌಡ ಪಾಟೀಲ ಯತ್ನಾಳ, ನನ್ನ ಪಕ್ಷಕ್ಕೆ ನಾನು ಮರಳಿ ಬರುತ್ತಿದ್ದೇನೆ. ಈ ಸಂದರ್ಭ ಪಕ್ಷಕ್ಕೆ ನಾನು ಯಾವುದೇ ಶರತ್ತು ವಿಧಿಸಿಲ್ಲ. ಅಲ್ಲದೇ ಮುಂಬರುವ ಲೋಕಸಭೆ ಚುನಾವಣೆಯಾಗಲಿ ಅಥವಾ ಇನ್ನಾವುದೇ ಚುನಾವಣೆಯಲ್ಲಾಗಲಿ ಸ್ಪರ್ಧಿಸುವುದಿಲ್ಲ. ನರೇಂದ್ರ ಮೋದಿ ದೇಶದ ಪ್ರಧಾನಿಯಾಗಬೇಕು ಎನ್ನುವ ಏಕೈಕ ಉದ್ದೇಶದಿಂದ ಪಕ್ಷಕ್ಕೆ ಮರಳುತ್ತಿದ್ದೇನೆ. ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ನನಗೆ ಯಾವುದೇ ವೈಯಕ್ತಿಕ ದ್ವೇಷ ಇಲ್ಲ. ರಾಜಕೀಯ ಕಾರಣಗಳಿಗಾಗಿ ಅಂದು ನನ್ನನ್ನು ಪಕ್ಷದಿಂದ ಉಚ್ಛಾಟಿಸಲಾಗಿತ್ತು. ಬಿಎಸ್ವೈ ಕೂಡ ಪಕ್ಷ ಬಿಟ್ಟು ಸಾಕಷ್ಟು ತೊಂದರೆ ಅನುಭವಿಸಿದ್ದಾರೆ. ಅದರಂತೆ ನಾನು ಕೂಡ ಸಾಕಷ್ಟು ಶಿಕ್ಷೆ ಅನುಭವಿಸಿದ್ದೇನೆ. ಯತ್ನಾಳ ವಿರುದ್ಧ ಬಿಎಸ್ವೈ ಎನ್ನುವ ಸವಾಲು ಉದ್ಭವಿಸುವುದೇ ಇಲ್ಲ ಎಂದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ರಾಜ್ಯ ಬಿಜೆಪಿ ಅಧ್ಯಕ್ಷ ಪ್ರಹ್ಲಾದ ಜೋಶಿ ಅವರು, ಕೆಲವೊಂದು ಕಾರಣಗಳಿಂದ ಬಸನಗೌಡ ಪಾಟೀಲ ಅವರು ಪಕ್ಷ ತೊರೆಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದೀಗ ಬಿಜಾಪುರ ಮತ್ತು ಬಾಗಲಕೋಟೆ ಜಿಲ್ಲೆಯ ಬಿಜೆಪಿ ಮುಖಂಡರೊಂದಿಗೆ ಚರ್ಚಿಸಿ ಯತ್ನಾಳ ಅವರನ್ನು ಮರಳಿ ಪಕ್ಷಕ್ಕೆ ಸೇರಿಸಿಕೊಳ್ಳುವ ತೀರ್ಮಾನಕ್ಕೆ ಬರಲಾಗಿದ್ದು, ಶೀಘ್ರದಲ್ಲಿ ಅವರು ಪಕ್ಷಕ್ಕೆ ಮರಳಲಿದ್ದಾರೆ ಎಂದರು.
ಬಿಎಸ್ವೈ ಸೇರ್ಪಡೆಗೆ ಒಪ್ಪಿಗೆ: ಪಕ್ಷ ಬಿಟ್ಟು ಕೆಜೆಪಿ ಸ್ಥಾಪಿಸಿರುವ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪರನ್ನು ಮರಳಿ ಪಕ್ಷಕ್ಕೆ ಸೇರಿಸಿಕೊಳ್ಳುವ ನಿಟ್ಟಿನಲ್ಲಿ ರಾಜ್ಯ ಬಿಜೆಪಿ ಘಟಕ ತನ್ನ ಸಮ್ಮತಿ ಸೂಚಿಸಿದೆ. ಮಾಜಿ ಸಿಎಂ ಯಡಿಯೂರಪ್ಪರನ್ನು ಪಕ್ಷಕ್ಕೆ ಮರಳಿ ಕರೆತರುವ ನಿಟ್ಟಿನಲ್ಲಿ ರಾಜ್ಯ ಬಿಜೆಪಿ ಮುಖಂಡರೊಂದಿಗೆ ಚರ್ಚಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

