ಧಾರವಾಡ

ಸಿದ್ಧ ಉಡುಪು ತರಬೇತಿ ಕೇಂದ್ರಕ್ಕೆ ರು. 27 ಲಕ್ಷ

Published On :

ಹುಬ್ಬಳ್ಳಿ: ಸಿದ್ಧ ಉಡುಪು ಉದ್ಯಮಕ್ಕೆ ಅಗತ್ಯವಿರುವ ಕುಶಲಕರ್ಮಿಗಳಿಗೆ ತರಬೇತಿ ನೀಡುವ ಪ್ರತಿ ಕೇಂದ್ರಕ್ಕೆ ಸರ್ಕಾರದಿಂದ ರು. 27 ಲಕ್ಷ ಧನ ಸಹಾಯ ನೀಡಲಾಗುತ್ತಿದೆ ಎಂದು ಕೈಮಗ್ಗ ಮತ್ತು ಜವಳಿ ಇಲಾಖೆ ಉಪನಿರ್ದೇಶಕ ಎಚ್.ಎಸ್. ಸೋಮನಗೌಡರ ಹೇಳಿದರು.
ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಸಿದ್ಧ ಉಡುಪು ತಯಾರಿಕಾ ಉದ್ಯಮಕ್ಕೆ 10 ಲಕ್ಷ ಕುಶಲ ಕಾರ್ಮಿಕರ ಅಗತ್ಯವಿದ್ದು, ಸುವರ್ಣ ವಸ್ತ್ರನೀತಿಯಡಿ ನಿರುದ್ಯೋಗಿಗಳಿಗೆ ತರಬೇತಿ ನೀಡುವ ಮುಖಾಂತರ ಕೈಗಾರಿಕೆಗಳಿಗೆ ಈ ಕೌಶಲ್ಯಾಧಾರಿತ ಮಾನವ ಸಂಪನ್ಮೂಲವನ್ನು ಪೂರೈಸುವ ಕೆಲಸ  ಮಾಡಲಾಗುತ್ತಿದೆ ಎಂದರು. 2013ರಲ್ಲಿ ಸುವರ್ಣ ವಸ್ತ್ರನೀತಿ ಯೋಜನೆ ಮುಕ್ತಾಯವಾಗಿದ್ದರೂ, ಪ್ರಸಕ್ತ ಸರ್ಕಾರ ಮತ್ತೆ ಈ ಯೋಜನೆಗೆ ಚಾಲನೆ ನೀಡುವುದಕ್ಕೆ ತೀರ್ಮಾನಿಸಿದ್ದು, ಹೀಗಾಗಿ ಸಿದ್ಧ ಉಡುಪು ಕ್ಷೇತ್ರಕ್ಕೆ ಅಗತ್ಯವಿರುವ ನಿಪುಣ ಮಾನವ ಸಂಪನ್ಮೂಲವನ್ನು ತರಬೇತಿ ಕೇಂದ್ರಗಳ ಮೂಲಕ ಪೂರೈಸಲಾಗುವುದು. ಕೌಶಲ್ಯ ಕೇಂದ್ರಗಳ ಸ್ಥಾಪನೆಗೆ ಸರ್ಕಾರ ಈಗಾಗಲೇ ರು. 47 ಕೋಟಿ ವೆಚ್ಚ ಮಾಡಿದ್ದು, ರಾಜ್ಯದ ವಿವಿಧ ಸ್ಥಳಗಳಲ್ಲಿ ಒಟ್ಟು 95 ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಧಾರವಾಡ ಜಿಲ್ಲೆಯ ಎಲ್ಲ ತಾಲೂಕು ಕೇಂದ್ರಗಳಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಇಲ್ಲಿಯವರೆಗೆ ಒಟ್ಟು 2578 ಫಲಾನುಭವಿಗಳಿಗೆ ತರಬೇತಿ ನೀಡಲಾಗಿದ್ದು, ಅದರಲ್ಲಿ 2091 ಫಲಾನುಭವಿಗಳು ವಿವಿಧ ಗಾರ್ಮೆಂಟ್ ಫ್ಯಾಕ್ಟರಿಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಯೋಜನೆಯಡಿ ಪ್ರತಿ ತಿಂಗಳು 30 ಜನರಿಗೆ ತರಬೇತಿ ನೀಡಲಾಗುತ್ತಿದೆ. ಸೆಪ್ಟೆಂಬರ್ 21ರಿಂದ 25ರ ವರೆಗೆ ಧಾರವಾಡದಲ್ಲಿ ನಡೆಯುವ ಕೃಷಿ ಮೇಳದಲ್ಲಿ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಕೈಮಗ್ಗ ಮತ್ತು ಖಾದಿ ಬಟ್ಟೆಗಳ ಪ್ರದರ್ಶನ ನಡೆಯಲಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಇಂದು ಕೌಶಲ್ಯಾಭಿವೃದ್ಧಿ ಕೇಂದ್ರ ಉದ್ಘಾಟನೆ
ಕೈಮಗ್ಗ ಮತ್ತು ಜವಳಿ ಇಲಾಖೆಯ ಸಹಾಯಧನದೊಂದಿಗೆ ಇಲ್ಲಿನ ಮರಾಠಾ ಗಲ್ಲಿಯಲ್ಲಿ ಆರಂಭಿಸಲಾಗಿರುವ ಸುಮುಖ ಅಸೋಸಿಯೇಷನ್‌ನ ಕೌಶಲ್ಯಾಭಿವೃದ್ಧಿ ತರಬೇತಿ ಕೇಂದ್ರದ ಉದ್ಘಾಟನೆ ಸೆ. 8ರಂದು ಬೆಳಗ್ಗೆ 11ಕ್ಕೆ ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಕೌಶಲ್ಯಾಭಿವೃದ್ಧಿ ಕೇಂದ್ರ ಉದ್ಘಾಟಿಸುವರು. ಶಾಸಕ ಪ್ರಸಾದ ಅಬ್ಬಯ್ಯ ಅಧ್ಯಕ್ಷತೆ ವಹಿಸುವರು. ಮೂರುಸಾವಿರ ಮಠದ ಶ್ರೀ ಗುರುಸಿದ್ಧ ರಾಜಯೋಗಿಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ವಿಶೇಷ ಆಹ್ವಾನಿತರಾಗಿ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್, ಜವಳಿ ಸಚಿವ ಬಾಬುರಾವ್ ಚಿಂಚನಸೂರ, ವಿಧಾನಪರಿಷತ್ ಸದಸ್ಯ ವೀರಣ್ಣ ಮತ್ತಿಕಟ್ಟಿ ಮುಂತಾದವರು ಪಾಲ್ಗೊಳ್ಳಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.