ಕಳೆದ ಸಾಲಿಗಿಂತ ಈ ಬಾರಿ ಉತ್ತಮ ಮಳೆ
ಧಾರವಾಡ: ಜಿಲ್ಲೆಯ ಕೃಷಿ ಪರಿಸ್ಥಿತಿ ಕಳೆದ ಸಾಲಿಗಿಂತ ಈ ಬಾರಿ ಉತ್ತಮವಾಗಿದ್ದು, ಸೆ. 10ರ ವರೆಗೆ ಜಿಲ್ಲೆಯಲ್ಲಿ ವಾಡಿಕೆಯ 537 ಮಿ.ಮೀ. ಪೈಕಿ 509ರಷ್ಟಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕ ಎಸ್.ಎಂ. ಗಡಾದ ಹೇಳಿದರು.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆಯಲ್ಲಿ ಕೃಷಿ ಕುರಿತು ಸಭೆಗೆ ಮಾಹಿತಿ ನೀಡಿದ ಅವರು, 27 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಹೆಸರು ಬಿತ್ತನೆ ಮಾಡಿದ್ದು, ಇತ್ತೀಚಿನ ಮಳೆಯಿಂದ ಬೆಳೆ ನಷ್ಟತೆಯಿಂದಾಗಿ ಕೇವಲ 12,500 ಮೆಟ್ರಿಕ್ ಟನ್ ಉತ್ಪಾದನೆ ನಿರೀಕ್ಷಿಸಲಾಗಿದೆ.
34 ಸಾವಿರ ಹೆಕ್ಟೇರ್ನಲ್ಲಿ ಸೋಯಾಬಿನ್ ಬಿತ್ತಿದ್ದು, ಉತ್ತಮ ಇಳುವರಿ ನಿರೀಕ್ಷಿಸಲಾಗಿದೆ. ಉದ್ದು, ಗೋವಿನ ಜೋಳ ಉತ್ತಮವಾಗಿದ್ದು, ವಿಳಂಬದ ಮಳೆ ಹಿನ್ನೆಲೆಯಲ್ಲಿ ರೈತರು ಉದ್ದೇಶಿತ 36 ಸಾವಿರ ಹೆಕ್ಟೇರ್ಗಿಂತ ಹೆಚ್ಚಾಗಿ 54 ಸಾವಿರ ಹೆಕ್ಟೇರ್ನಲ್ಲಿ ಹತ್ತಿ ಬೆಳೆ ಬೆಳೆದಿದ್ದು, ಅದಕ್ಕೆ ಹೆಚ್ಚಿನ ಕಾಳಜಿ ತೋರಿದ್ದಾರೆ ಎಂದು ಮಾಹಿತಿ ನೀಡಿದರು.
ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ 175 ಹೆಕ್ಟೇರ್ ತೋಟಗಾರಿಕೆ ಬೆಳೆಗಳ ಪ್ರದೇಶ ವಿಸ್ತರಣೆ ರಾಷ್ಟ್ರೀಯ ತೋಟಗಾರಿಕೆ ಮಿಶನ್ ಯೋಜನೆಯಡಿ ಕೈಗೆತ್ತಿಕೊಂಡಿದ್ದು, ಯೋಜನೆಯಡಿ 75 ಹೆಕ್ಟೇರ್ನಲ್ಲಿ ಮಾವು, 45 ಹೆಕ್ಟೇರ್ನಲ್ಲಿ ಹೂವು, 30 ಹೆಕ್ಟೇರ್ನಲ್ಲಿ ಪಪ್ಪಾಯಿ, ಇನ್ನುಳಿದ 20 ಹೆಕ್ಟೇರ್ನಲ್ಲಿ ಗೋಡಂಬಿ, ಸಪೋಟಾ ಬೆಳೆ ಬೆಳೆಯುವ ಗುರಿ ಇಟ್ಟುಕೊಳ್ಳಲಾಗಿದೆ ಎಂದು ತೋಟಗಾರಿಕೆ ಉಪನಿರ್ದೇಶಕರು ಸಭೆಯಲ್ಲಿ ತಿಳಿಸಿದರು.
ಟೀಕೆಗೊಳಗಾಗುತ್ತಿದೆ: ಕರ್ನಾಟಕ ಗ್ರಾಮಿಣ ಮೂಲಭೂತ ಸೌಕರ್ಯ ನಿಗಮ ಅನುದಾನ ಪಡೆದರೂ ಸಮಯಕ್ಕೆ ಸರಿಯಾಗಿ ಕಾರ್ಯನಿರ್ವಹಿಸದೇ ಇರುವುದರಿಂದ ಅನಾವಶ್ಯಕವಾಗಿ ಸಾರ್ವಜನಿಕರ ಟೀಕೆಗೆ ಒಳಗಾಗುತ್ತಿದ್ದೇವೆ ಎಂದು ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಅಶೋಕ ಚಲವಾದಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ತ್ರಿಶುಲಾ ಅಪ್ಪಣ್ಣವರ ಸಭೆಯಲ್ಲಿ ಅಂಕಿ ಅಂಶಗಳ ಸಮೇತ ದೂರಿದರು.
ನಿಗಮ ಸುವರ್ಣ ಗ್ರಾಮ ಯೋಜನೆಯಡಿ ಸರಿಯಾಗಿ ಕಾರ್ಯ ನಿರ್ವಹಿಸದಿರುವುದು ಕಂಡು ಬೇಸರ ವ್ಯಕ್ತಪಡಿಸಿದ ಜಿಪಂ ಸಿಇಒ ಪಿ.ಎ. ಮೇಘಣ್ಣವರ ಹಾಗೂ ಅಧ್ಯಕ್ಷತೆ ವಹಿಸಿದ್ದ ಜಿಪಂ ಉಪಾಧ್ಯಕ್ಷ ಫಕ್ಕೀರಪ್ಪ ಜಕ್ಕಣ್ಣವರ, ಇದೇ ರೀತಿ ಸ್ಥಿತಿ ಮುಂದುವರಿದರೆ ನಿಗಮದ ಅಧಿಕಾರಿಗಳ ಮೇಲೆ ಕ್ರಮ ಜರುಗಿಸಲು ಹಿಂದೆ ಮುಂದೆ ನೋಡುವುದಿಲ್ಲ ಎಂಬ ಎಚ್ಚರಿಕೆ ನೀಡಿದರು.
ಸಭೆಯಲ್ಲಿ ಜಿಪಂ ಸ್ಥಾಯಿ ಸಮಿತಿ ಅಧ್ಯಕ್ಷೆ ನಿರ್ಮಲಾದೇವಿ ಉಪ್ಪಿನ, ಟಿ.ಜಿ. ಬಾಲಣ್ಣವರ, ಜಿಪಂ ಮುಖ್ಯ ಯೋಜನಾಧಿಕಾರಿ ಎ.ಡಿ. ದೊಡ್ಡಮನಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

