ಉಕದಲ್ಲಿ ಕೈಗಾರಿಕೆಗಳ ಅಭಿವೃದ್ಧಿಗೆ ಸರ್ಕಾರ ಬದ್ಧ
ಕನ್ನಡಪ್ರಭ ವಾರ್ತೆ, ಹುಬ್ಬಳ್ಳಿ, ಸೆ. 17
ಉತ್ತರ ಕರ್ನಾಟಕದಲ್ಲಿ ಕೈಗಾರಿಕೆಗಳ ಅಭಿವೃದ್ಧಿಗೆ ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಸಣ್ಣ ಕೈಗಾರಿಕೆ, ಮುಜರಾಯಿ ಮತ್ತು ಸಕ್ಕರೆ ಸಚಿವ ಪ್ರಕಾಶ ಹುಕ್ಕೇರಿ ಹೇಳಿದ್ದಾರೆ.
ನಗರದಲ್ಲಿ ಮಂಗಳವಾರ ಜರುಗಿದ 'ಇನ್ಕಾಮೆಕ್ಸ್-2013' ಸಮಾರೋಪ ಸಮಾರಂಭದಲ್ಲಿ ಅತ್ಯುತ್ತಮ ಮಳಿಗೆದಾರರಿಗೆ ಪ್ರಮಾಣ ಪತ್ರ ವಿತರಿಸಿ ಮಾತನಾಡಿದ ಅವರು, ಕೈಗಾರಿಕೆಗಳು ಎದುರಿಸುತ್ತಿರುವ ಸಮಸ್ಯೆ ತಿಳಿಸುವ ಜೊತೆಗೆ ಕೈಗಾರಿಕೆಗಳ ಅಭಿವೃದ್ಧಿಗೆ ಬೇಕಾಗುವ ಇನ್ನೂ ಹೆಚ್ಚಿನ ಸೌಲಭ್ಯಗಳ ಮಾಹಿತಿಯನ್ನು ಸರ್ಕಾರಕ್ಕೆ ನೀಡಿದಲ್ಲಿ, ಆವಶ್ಯಕತೆಗಳ ಪೂರೈಕೆಗೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಭರವಸೆ ನೀಡಿದರು.
ಈ ನಿಟ್ಟಿನಲ್ಲಿ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ಜವಾಬ್ದಾರಿ ಹೊತ್ತುಕೊಂಡು ಉತ್ತರ ಕರ್ನಾಟಕದಲ್ಲಿ ಕೈಗಾರಿಕೆಗಳ ಬೆಳವಣಿಗೆಗೆ ಸರ್ಕಾರದ ಕೊಂಡಿಯಂತೆ ಕಾರ್ಯನಿರ್ವಹಿಸಬೇಕು. ಕೈಗಾರಿಕೆಗಳ ಬೆಳವಣಿಗೆಗೆ ಬೇಕಾದ ಸೌಲಭ್ಯಗಳ ಪಟ್ಟಿ ತಯಾರಿಸಿ ಸರ್ಕಾರಕ್ಕೆ ನೀಡಿದಲ್ಲಿ, ಬೇಡಿಕೆಗಳ ಈಡೇರಿಕೆಗೆ ಸ್ಪಂದಿಸಲಾಗುವುದು ಎಂದು ತಿಳಿಸಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ಉತ್ತರ ಕರ್ನಾಟಕದಲ್ಲಿ ಕೈಗಾರಿಕೆಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಉನ್ನತ ಮಟ್ಟದ ಸಭೆ ನಡೆಸಲಾಗಿದೆ. ಈ ಭಾಗದಲ್ಲಿ ಹೆಚ್ಚಿನ ಕೈಗಾರಿಕೆಗಳ ಸ್ಥಾಪನೆಗೆ ಸರ್ಕಾರ ಆಸಕ್ತಿ ವಹಿಸಿದೆ. ಚಿಕ್ಕೋಡಿಯಲ್ಲಿ 75 ಎಕರೆ ವಿಸ್ತೀರ್ಣದಲ್ಲಿ ಸುಮಾರು ರು. 30 ಕೋಟಿ ವೆಚ್ಚದಲ್ಲಿ ಪಾರ್ಕ್ ನಿರ್ಮಾಣಕ್ಕೆ ಸರ್ಕಾರ ಅನುಮೋದನೆ ನೀಡಿದೆ. ಬೆಳಗಾವಿಯಲ್ಲಿ ಕೇಂದ್ರ ಸರ್ಕಾರದ ಸಹಯೋಗದೊಂದಿಗೆ 10 ಎಕರೆ ಜಾಗದಲ್ಲಿ ಸುಮಾರು ರು. 150 ಕೋಟಿ ವೆಚ್ಚದಲ್ಲಿ ಟೆಕ್ನಾಲಜಿ ಸೆಂಟರ್ ನಿರ್ಮಿಸುವ ಯೋಜನೆ ಇದ್ದು, ಕೇಂದ್ರ ಸಚಿವ ಮುನಿಯಪ್ಪ ಅವರೂ ಹಸಿರು ನಿಶಾನೆ ತೋರಿಸಿದ್ದಾರೆ. ಗಡಿ ಭಾಗದಲ್ಲಿ ಸಣ್ಣ ಕೈಗಾರಿಕೆಗಳ ಅಭಿವೃದ್ಧಿಗೆ ರು. 5 ಕೋಟಿ ವೆಚ್ಚದಲ್ಲಿ ಯೋಜನೆ ರೂಪಿಸಿದ್ದು, ಉತ್ತರ ಕರ್ನಾಟಕದ ಗಡಿ ಭಾಗಗಳಿಗೆ ಆದ್ಯತೆ ನೀಡಲಾಗುವುದು. ಕಿತ್ತೂರಿನಲ್ಲಿ ಸಿಲಿಂಡರ್ ಬ್ಲಾಕ್ ಘಟಕ ನಿರ್ಮಿಸುವ ಯೋಜನೆ ಇದೆ. ಹೊಸ ಸಕ್ಕರೆ ಕಾರ್ಖಾನೆಗಳಿಗೂ ಅನುಮತಿ ನೀಡಲಾಗಿದೆ ಎಂದು ಸಚಿವ ಹುಕ್ಕೇರಿ ವಿವರಿಸಿದರು.
ಉದ್ಯೋಗ ಸೃಷ್ಟಿ: ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿಗಾಗಿ ಸಣ್ಣ ಕೈಗಾರಿಕಾ ಇಲಾಖೆಯಿಂದ ರು. 1 ಕೋಟಿ ನೀಡಲಾಗುತ್ತಿದೆ. ವ್ಯಾಟ್ ಕಡಿಮೆಗೊಳಿಸಲು ಇಲ್ಲಿಯ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ಪದಾಧಿಕಾರಿಗಳು ನೀಡಿರುವ ಮನವಿಗೆ ಪ್ರಾಮಾಣಿಕವಾಗಿ ಸ್ಪಂದಿಸಲಾಗುವುದು ಎಂದು ಹೇಳಿದರು. ವಿಧಾನ ಪರಿಷತ್ ಸದಸ್ಯ ವೀರಣ್ಣ ಮತ್ತಿಕಟ್ಟಿ ಮಾತನಾಡಿ, ಉತ್ತರ ಕರ್ನಾಟಕದಲ್ಲಿ ಕೈಗಾರಿಕೆಗಳ ಅಭಿವೃದ್ಧಿಗೆ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಇದರ ಪರಿಣಾಮವಾಗಿ ಮುಂದಿನ ದಿನಗಳಲ್ಲಿ ಈ ಭಾಗದಲ್ಲಿ ಉದ್ಯೋಗ ಸೃಷ್ಟಿಯಾಗಲಿದೆ ಎಂದರು.
ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಆಯುಕ್ತ ಎಂ. ಮಹೇಶ್ವರರಾವ್, ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಡಾ. ಸಿ. ಸೋಮಶೇಖರ, ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ಅಧ್ಯಕ್ಷ ಎನ್.ಪಿ. ಜವಳಿ ಮತ್ತಿತರರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

