ಕೃಷಿ ಉತ್ಪನ್ನ ಬೆಲೆ ನಿಗದಿ ಆಯೋಗ ರಚನೆ
ಕನ್ನಡಪ್ರಭ ವಾರ್ತೆ, ಧಾರವಾಡ, ಸೆ. 22
ರೈತರು, ಕೃಷಿ ಹಾಗೂ ಮಾರುಕಟ್ಟೆ ತಜ್ಞರನ್ನು ಒಳಗೊಂಡ ಕೃಷಿ ಉತ್ಪನ್ನ ಬೆಲೆ ನಿಗದಿ ಆಯೋಗ ರಚನೆ ಮಾಡಲಾಗುತ್ತಿದ್ದು, ಈ ಮೂಲಕ ಕೃಷಿ ಉತ್ಪನ್ನಗಳಿಗೆ ಬೆಲೆಯನ್ನು ನಿಗದಿ ಮಾಡಲು ಸರ್ಕಾರ ಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಲ್ಲಿ ಹೇಳಿದರು.
ಇಲ್ಲಿನ ಕೃಷಿ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ನಾಲ್ಕು ದಿನಗಳ ಕೃಷಿ ಮೇಳವನ್ನು ಭಾನುವಾರ ಉದ್ಘಾಟಿಸಿ ಮಾತನಾಡಿದ ಅವರು, ವರ್ಷಗಟ್ಟಲೇ ಕಷ್ಟಪಟ್ಟು ಬೆಳೆ ಬೆಳೆದ ರೈತನಿಗೆ ಬೆಳೆ ಮಾರಾಟ ಮಾಡುವ ಸಂದರ್ಭದಲ್ಲಿ ನ್ಯಾಯಯುತ ಬೆಲೆ ಸಿಗುತ್ತಿಲ್ಲ. ಆದ್ದರಿಂದ ರೈತ ಕೃಷಿಯನ್ನು ಲಾಭದಾಯಕವಾಗಿ ಮಾಡಿಕೊಳ್ಳಲು ಸರ್ಕಾರ ಬದ್ಧವಾಗಿದ್ದು, ಬೆಲೆ ನಿಗದಿಗೆ ಕೂಡಲೇ ಕ್ರಮ ಕೈಗೊಳ್ಳಲಾಗುವುದು ಎಂದರು.
ಅಲ್ಲದೇ, ಗರಿಷ್ಠ ಐದು ಎಕರೆಯಲ್ಲಿ ಹನಿ ನೀರಾವರಿ ಮಾಡುವ ರಾಜ್ಯದ ದೊಡ್ಡ ಹಾಗೂ ಸಣ್ಣ ರೈತರಿಗೆ ಶೇ. 90ರಷ್ಟು ರಿಯಾಯ್ತಿ ನೀಡಲಾಗುವುದು ಮತ್ತು ಉನ್ನತ ಶಿಕ್ಷಣ ಪಡೆಯುತ್ತಿರುವ ರೈತರ ಮಕ್ಕಳ ಶಿಕ್ಷಣದ ಶುಲ್ಕವನ್ನು ಬರಗಾಲದ ಸಂದರ್ಭದಲ್ಲಿ ಸರ್ಕಾರ ಸಂಪೂರ್ಣ ಮನ್ನಾ ಮಾಡಲಿದೆ ಎಂದು ಇದೇ ಸಂದರ್ಭದಲ್ಲಿ ಸಿದ್ದರಾಮಯ್ಯ ಪ್ರಕಟಿಸಿದರು.
ಬೇರೆ ದೇಶಗಳಿಗೆ ಹೋಲಿಸಿದರೆ ದೇಶದಲ್ಲಿ ಅದರಲ್ಲಿಯೂ ಕರ್ನಾಟಕದಲ್ಲಿ ಆಹಾರ ಉತ್ಪಾದನೆ ಕಡಿಮೆ ಇದೆ. ರಾಜ್ಯದಲ್ಲಿ ಸದ್ಯ 113 ಮಿಲಿಯನ್ ಟನ್ ಆಹಾರ ಉತ್ಪಾದನೆ ಆಗುತ್ತಿದ್ದು, 2020ರ ವೇಳೆಗೆ ಈ ಆಹಾರ ಉತ್ಪಾದನೆ ಸಾಲೋದಿಲ್ಲ. ಕನಿಷ್ಠ 300 ಮಿಲಿಯನ್ ಟನ್ ಆಹಾರ ಉತ್ಪಾದನೆಯಾಗಬೇಕು. ಈ ಹಿನ್ನೆಲೆಯಲ್ಲಿ ಸರ್ಕಾರಗಳು, ರೈತರು ಹಾಗೂ ಕೃಷಿ ವಿಶ್ವವಿದ್ಯಾಲಯಗಳು ಆಹಾರ ಉತ್ಪಾದನೆಗೆ ಹೆಚ್ಚಿನ ಮಾನ್ಯತೆ ನೀಡಬೇಕೆಂದು ಪ್ರತಿಪಾದಿಸಿದರು.
ಭಾರತ ಕೃಷಿ ಪ್ರಧಾನ ದೇಶವಾದರೂ ಸಹ ಇತ್ತೀಚೆಗೆ ಕೃಷಿ ಲಾಭದಾಯಕವಲ್ಲದ ಹಾಗೂ ಸಣ್ಣ ಹಿಡುವಳಿದಾರರ ಸಂಖ್ಯೆ ಹೆಚ್ಚಾದ ಕಾರಣ ರೈತರು ಹಾಗೂ ಅವರ ಮಕ್ಕಳು ನಗರ ಪ್ರದೇಶದತ್ತ ವಲಸೆ ಹೋಗುತ್ತಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ವಾಸಿಸುವವರ ಸಂಖ್ಯೆ ಶೇ. 75 ರಿಂದ 62ಕ್ಕೆ ಇಳಿದಿದೆ. ಇದೇ ರೀತಿ ಪರಿಸ್ಥಿತಿ ಮುಂದುವರಿದರೆ ಇನ್ನೂ ಹೆಚ್ಚಿನ ರೈತರು ಕೃಷಿಯನ್ನು ಕೈ ಬಿಡುತ್ತಾರೆ. ಆದ್ದರಿಂದ ಕೃಷಿ ವಿಶ್ವವಿದ್ಯಾಲಯಗಳು, ಕೃಷಿ ವಿಜ್ಞಾನಿಗಳು ಹಾಗೂ ಸರ್ಕಾರಗಳು ಗಂಭೀರವಾಗಿ ಚಿಂತನೆ ಮಾಡಬೇಕಿದೆ. ಕೃಷಿ ಲಾಭದಾಯಕವಾಗಬೇಕಾದರೆ ಕೃಷಿ ಉತ್ಪನ್ನ ಹೆಚ್ಚಾಗಬೇಕು ಹಾಗೂ ಹೊಸ ತಳಿಗಳ ಸಂಶೋಧನೆಯಾಗಬೇಕು. ಬರಗಾಲಕ್ಕೆ ಶಾಶ್ವತ ಪರಿಹಾರ ಕಂಡು ಹಿಡಿಯಬೇಕು. ಒಣ ಭೂಮಿ ಬಗ್ಗೆ ಸ್ಪಷ್ಟ ನೀತಿ ಜಾರಿಯಾಗಿ ಒಣ ಭೂಮಿಯಲ್ಲಿ ಯಾವ ಬೆಳೆ ಬೆಳೆಯಬಹುದು ಎಂಬುದರ ಕುರಿತ ಸಂಶೋಧನೆಗಳು ನಡೆಯಬೇಕು. ಈ ಸಂಶೋಧನೆಗಳು ರೈತನ ಹೊಲಗಳಿಗೆ ನೇರವಾಗಿ ತಲುಪಬೇಕು. ಕೃಷಿ ವಿವಿಗಳು ಸಂಶೋಧನೆಯತ್ತ ಹೆಚ್ಚಿನ ಒತ್ತು ನೀಡಿದರೆ ರಾಜ್ಯ ಸರ್ಕಾರ ವಿಶ್ವವಿದ್ಯಾಲಯಗಳಿಗೆ ಬೇಕಾದ ಆರ್ಥಿಕ ಸಂಪತ್ತನ್ನು ಒದಗಿಸಲು ಸಿದ್ಧವಾಗಿದೆ ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು.
ಶಾಸಕ ವಿನಯ ಕುಲಕರ್ಣಿ ಅಧ್ಯಕ್ಷತೆ ವಹಿಸಿದ್ದರು. ಕೃಷಿ ವಿವಿ ಪ್ರಭಾರಿ ಕುಲಪತಿ ಡಾ. ಎಚ್.ಎಸ್. ವಿಜಯಕುಮಾರ ಪ್ರಾಸ್ತಾವಿಕವಾಗಿ ಮಾತನಾಡಿದರು. ಕೃಷಿ ಸಚಿವ ಕೃಷ್ಣ ಬೈರೇಗೌಡ, ಗ್ರಾಮೀಣಾಭಿವೃದ್ಧಿ ಸಚಿವ ಎಚ್.ಕೆ. ಪಾಟೀಲ, ಕಾನೂನು ಸಚಿವ ಟಿ.ಬಿ. ಜಯಚಂದ್ರ, ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಮಾತನಾಡಿದರು. ಮೂಲಭೂತ ಸೌಕರ್ಯ ಮತ್ತು ವಾರ್ತಾ ಇಲಾಖೆ ಸಚಿವ ಸಂತೋಷ ಲಾಡ್, ಸಣ್ಣ ಕೈಗಾರಿಕೆಗಳ ಸಚಿವ ಪ್ರಕಾಶ ಹುಕ್ಕೇರಿ, ಶಾಸಕರಾದ ವೀರಣ್ಣ ಮತ್ತಿಕಟ್ಟಿ, ನಾಗರಾಜ ಛಬ್ಬಿ, ಪ್ರಸಾದ ಅಬ್ಬಯ್ಯ, ಎನ್.ಎಚ್. ಕೋನರೆಡ್ಡಿ, ಕೃಷಿ ವಿವಿ ವಿಸ್ತರಣಾ ನಿರ್ದೇಶಕ ಡಾ. ಎಲ್. ಕೃಷ್ಣಾ ನಾಯಕ ಮತ್ತಿತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

