ಧಾರವಾಡ

ಕೋಟ್ಪಾ ಕಾಯ್ದೆ ಜಾರಿ: ಹು-ಧಾ ಹಿಂದೆ

Published On :

ಹುಬ್ಬಳ್ಳಿ: ಸಿಗರೇಟು, ತಂಬಾಕು ಉತ್ಪನ್ನಗಳ ನಿಯಂತ್ರಣ ಕಾಯ್ದೆ ಜಾರಿಗೆ ತರುವಲ್ಲಿ ಹುಬ್ಬಳ್ಳಿ-ಧಾರವಾಡ ಅವಳಿ ನಗರ ಪ್ರಗತಿಯತ್ತ ಸಾಗಿದೆ. ರಾಜ್ಯದ ಉಳಿದ ಜಿಲ್ಲೆಗಳು, ನಗರಗಳಿಗೆ ಹೋಲಿಸಿದರೆ ಅವಳಿ ನಗರದಲ್ಲಿ ಈ ಕಾಯ್ದೆ ಉತ್ತಮವಾಗಿ ಜಾರಿಗೊಂಡಿದೆಯಾದರೂ ಕಟ್ಟುನಿಟ್ಟಾಗಿ ಅನುಷ್ಠಾನಕ್ಕೆ ತರುವಲ್ಲಿ ಸ್ವಲ್ಪ ಪ್ರಮಾಣದಲ್ಲಿ ಹಿಂದೆ ಬಿದ್ದಿದೆ.
ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟು ಹಾಗೂ ತಂಬಾಕು ಉತ್ಪನ್ನಗಳ ನಿಯಂತ್ರಣ ಕುರಿತು ಬೆಂಗಳೂರಿನ ಇನ್‌ಸ್ಟಿಟ್ಯೂಟ್ ಆಫ್ ಪಬ್ಲಿಕ್ ಹೆಲ್ತ್ ನಡೆಸಿದ ಅಧ್ಯಯನದಲ್ಲಿ ಈ ವಿಷಯ ಬಹಿರಂಗಗೊಂಡಿದೆ.
ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವ ಮೂಲಕ ಧೂಮಪಾನಿಗಳಲ್ಲದವರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿರುವುದು, ಅಂಗಡಿ ಮುಂಗ್ಗಟ್ಟುಗಳಲ್ಲಿ ಚಿಕ್ಕ ವಯಸ್ಸಿನ ಮಕ್ಕಳಿಗೆ ಸಿಗರೇಟು ಮತ್ತು ಇತರ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿರುವುದು, ಶಾಲಾ ಕಾಲೇಜು ಆವರಣದ ಸುತ್ತ ತಂಬಾಕು ಉತ್ಪನ್ನ್ನಗಳ ಮಾರಾಟದಿಂದ ಮಕ್ಕಳು ಮತ್ತು ಯುವಜನಾಂಗದ ಸ್ವಾಸ್ಥ್ಯ ಕೆಡುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿದ ರಾಜ್ಯ ಸರ್ಕಾರ, ಆರೋಗ್ಯ ರಕ್ಷಣೆಗಾಗಿ ಸೇವೆ ಸಲ್ಲಿಸುತ್ತಿರುವ ಬೆಂಗಳೂರಿನ ಪಬ್ಲಿಕ್ ಹೆಲ್ತ್ ಸಂಸ್ಥೆಯೊಂದಿಗೆ ಸೇರಿ ತಂಬಾಕು ಉತ್ಪನ್ನಗಳ ನಿಯಂತ್ರಣ ಕಾಯ್ದೆ ಜಾರಿ ಬಗ್ಗೆ ಎಲ್ಲ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನೇತೃತ್ವದಲ್ಲಿ ಕಾರ್ಯಾಗಾರ ನಡೆಸುತ್ತ ಬಂದಿದೆ.
ಜುಲೈ 19ರಂದು ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಪೊಲೀಸ್ ಅಧಿಕಾರಿಗಳನ್ನು ಒಂದೆಡೆ ಸೇರಿಸಿ ಕಾಯ್ದೆಯ ಕಟ್ಟುನಿಟ್ಟಿನ ಅನುಷ್ಠಾನದ ಕುರಿತು ಈ ಸಂಸ್ಥೆಯಿಂದ ಮಾಹಿತಿ ನೀಡಲಾಗಿತ್ತು. ಈ ಕಾಯ್ದೆ ಉಲ್ಲಂಘಿಸುವವರ ವಿರುದ್ಧ ಮೊಕದ್ದಮೆ ದಾಖಲಿಸಿ, ಅವರಿಂದ ದಂಡ ವಸೂಲಿ ಮಾಡುವ ಮೂಲಕ ಸಾರ್ವಜನಿಕರಲ್ಲಿ ಧೂಮಪಾನದಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಲೂ ಸೂಚಿಸಲಾಗಿತ್ತು. ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವವರ ವಿರುದ್ಧ ಮೊಕದ್ದಮೆಯನ್ನ್ನೂ ದಾಖಲಿಸಿಕೊಳ್ಳುವ ಮೂಲಕ ಸಾರ್ವಜನಿಕರಿಗೆ ಎಚ್ಚರಿಕೆ ಸಂದೇಶ್ನ ರವಾನಿಸಲಾಯಿತು.
ಗದಗಕ್ಕೆ ಮೊದಲ ಸ್ಥಾನ: ಪೊಲೀಸ್ ಇಲಾಖೆ ಬಿಡುಗಡೆ ಮಾಡಿರುವ ಅಂಕಿ-ಅಂಶಗಳ ಪ್ರಕಾರ ಮೂರು ಜಿಲ್ಲೆಗಳಲ್ಲಿ ಗದಗ ಮೊದಲ ಸ್ಥಾನದಲ್ಲಿದೆ. ಗದಗ ಜಿಲ್ಲೆಯಲ್ಲಿ ಕಳೆದ ಜನವರಿಯಿಂದ ಆಗಸ್ಟ್ ಅಂತ್ಯದ ವರೆಗೆ 3,380 ಪ್ರಕರಣಗಳನ್ನು ದಾಖಲಿಸಿಕೊಂಡಿದ್ದು, ರು. 2,52,615 ದಂಡ ಸಂಗ್ರಹಿಸಲಾಗಿದೆ. ಅದೇ ರೀತಿ ಹುಬ್ಬಳ್ಳಿ-ಧಾರವಾಡದಲ್ಲಿ ಒಟ್ಟು 1,160 ಪ್ರಕರಣಗಳನ್ನು ದಾಖಲಿಸಿದ್ದು, ರು. 2,14,800 ದಂಡ ಸಂಗ್ರಹಿಸಲಾಗಿದೆ.
ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸುವ ಕೋಟಾ ಸೆಕ್ಷನ್ 4ರಡಿ ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಒಟ್ಟು 4,872 ಪ್ರಕರಣಗಳು ದಾಖಲಾಗಿವೆ. ಅಂಗಡಿ ಮುಂಗ್ಗಟ್ಟುಗಳಲ್ಲಿ ತಂಬಾಕು ಉತ್ಪನ್ನಗಳ ಜಾಹೀರಾತು ಪ್ರದರ್ಶನ ನಿಷೇಧಕ್ಕೆ ಇರುವ ಸೆಕ್ಷನ್ 5ರಡಿ ಗದಗದಲ್ಲಿ 32 ಪ್ರಕರಣಗಳು, ಮಕ್ಕಳಿಗೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡಿದ ಆರೋಪದ ಮೇಲೆ ಸೆಕ್ಷನ್ 6 ಎ ಪ್ರಕಾರ 574 ಪ್ರಕರಣಗಳು, ಶಿಕ್ಷಣ ಸಂಸ್ಥೆಗಳ 100 ಅಡಿ ಅಂತರದಲ್ಲಿ ಮಾರಾಟ ಮತ್ತು ಸೇವನೆ ಮಾಡಿದ ಆರೋಪದಲ್ಲಿ ಸೆಕ್ಷನ್ 6ಬಿ ಅಡಿ 99 ಪ್ರಕರಣಗಳು ಮತ್ತು ಇತರ 7 ಪ್ರಕರಣಗಳನ್ನು ದಾಖಲು ಮಾಡಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.