ಧಾರವಾಡ

ತೆರಿಗೆ ಇಳಿಕೆಗೆ ಚಿಂತನೆ: ಸಚಿವ ಹುಕ್ಕೇರಿ

Published On :

ಕನ್ನಡಪ್ರಭ ವಾರ್ತೆ, ಹುಬ್ಬಳ್ಳಿ, ಫೆ. 4
ಸಣ್ಣ ಕೈಗಾರಿಕಗಳ ಉತ್ಪನ್ನಗಳ ಮೇಲಿನ ಮೌಲ್ಯವರ್ಧಿತ ತೆರಿಗೆಯನ್ನು ಶೇ. 2ಕ್ಕೆ ಇಳಿಸುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಲಾಗುವುದು ಎಂದು ಸಣ್ಣ ಕೈಗಾರಿಕೆ ಸಚಿವ ಪ್ರಕಾಶ ಹುಕ್ಕೇರಿ ಹೇಳಿದರು.
ಮಂಗಳವಾರ ಹುಬ್ಬಳ್ಳಿಯಲ್ಲಿ ಔದ್ಯಮಿಕ ತರಬೇತಿ ಮತ್ತು ಕೌಶಲ್ಯಾಭಿವೃದ್ಧಿ ಕೇಂದ್ರಕ್ಕೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದ ಅವರು, ಸದ್ಯ ಸಣ್ಣ ಕೈಗಾರಿಕೆಗಳ ಉತ್ಪನ್ನದ ಮೇಲೆ ಶೇ. 14.5ರಷ್ಟು ಮೌಲ್ಯ ವರ್ಧಿತ ತೆರಿಗೆ ವಿಧಿಸಲಾಗುತ್ತಿದ್ದು, ಇದನ್ನು ಶೇ. 2ಕ್ಕೆ ಇಳಿಸಬೇಕು ಎನ್ನುವ ಉದ್ಯಮಿಗಳ ಬೇಡಿಕೆ ಕುರಿತು ಸಕಾರಾತ್ಮಕವಾಗಿ ಸ್ಪಂದಿಸಲಾಗುವುದು ಎಂದು ಹೇಳಿದರು.
ಕೈಗಾರಿಕಾ ವಸಾಹತುಗಳಲ್ಲಿ ಮೂಲ ಸೌಕರ್ಯ ಕುರಿತು ಈಗಾಗಲೇ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಿಯಾಯೋಜನೆ ರೂಪಿಸಲಾಗಿದ್ದು, ಶೀಘ್ರದಲ್ಲೇ ಮೂಲಸೌಕರ್ಯ ಸಮಸ್ಯೆ ಪರಿಹರಿಸಲಾಗುವುದು. ಆದರೆ ಸರ್ಕಾರದ ನೂತನ ಕೈಗಾರಿಕಾ ನೀತಿಯು ಈ ಭಾಗದ ಸಮಗ್ರ ಕೈಗಾರಿಕಾಭಿವೃದ್ಧಿಗೆ ಕ್ರಮ ತೆಗೆದುಕೊಳ್ಳಲಿದೆ ಎಂದು ತಿಳಿಸಿದರು.
ಸಂಸದ ಪ್ರಹ್ಲಾದ ಜೋಶಿ ಮಾತನಾಡಿ, ಸಣ್ಣ ಕೈಗಾರಿಕೋದ್ಯಮಿಗಳು ತಮ್ಮನ್ನು ಸಂಘಟಿಸಿಕೊಳ್ಳುವುದರ ಮೂಲಕ ಸರ್ಕಾರದ ಮೇಲೆ ಒತ್ತಾಯ ತರಬೇಕು. ಅಂದರೆ ಮಾತ್ರ ಸರ್ಕಾರ ಕೈಗಾರಿಕಾ ನೀತಿಯಲ್ಲಿ ಅಗತ್ಯ ಬದಲಾವಣೆ ಕೈಗೊಳ್ಳುವುದಕ್ಕೆ ಚಿಂತನೆ ಮಾಡುತ್ತದೆ ಎಂದು ಹೇಳಿದರು.
ಸಣ್ಣ ಕೈಗಾರಿಕೋದ್ಯಮಿಗಳ ಸಮಸ್ಯೆಗಳ ಬಗ್ಗೆ ಮಾತನಾಡಿದ ಸಂಸದ ಜೋಶಿ, ಋಣಾತ್ಮಕ ಕೈಗಾರಿಕಾ ಕ್ಷೇತ್ರದ ಬೆಳವಣಿಗೆ ಸಣ್ಣ ಕೈಗಾರಿಕೆಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ. ಸರ್ಕಾರ ದೋಷಪೂರಿತ ಕೈಗಾರಿಕಾ ನೀತಿಯಿಂದಾಗಿ ದೇಶದ ಮಾನವ ಸಂಪನ್ಮೂಲದ ಸದ್ಬಳಕೆಯಾಗುತ್ತಿಲ್ಲ. ಕೃಷಿ ನಂತರ ಅತಿ ಹೆಚ್ಚು ಜನರಿಗೆ ಉದ್ಯೋಗವಕಾಶ ಕಲ್ಪಿಸಿರುವ ಸಣ್ಣ ಕೈಗಾರಿಕಾ ಕ್ಷೇತ್ರವನ್ನು ಸರ್ಕಾರ ಕಡೆಗಣಿಸಿದೆ ಎಂದು ಹೇಳಿದರು.
ಶಾಸಕ ಅರವಿಂದ ಬೆಲ್ಲದ ಮಾತನಾಡಿ, ಮುಂದಿನ ವರ್ಷಗಳ ಅವಧಿಯಲ್ಲಿ ಈ ಭಾಗದ ಸಣ್ಣ ಕೈಗಾರಿಕೋದ್ಯಮಿಗಳಿಗೆ ಭಾರಿ ಪ್ರಮಾಣದ ಬೇಡಿಕೆ ಬರಲಿದೆ. ಈ ಪ್ರದೇಶದಲ್ಲಿ ಹೀರೊ ಮೋಟೋ ಕಾರ್ಪ್, ಟೋಯೋಟಾ ಕಂಪನಿಗಳು ವಾಹನ ತಯಾರಿಕಾ ಘಟಕಗಳನ್ನು ಸ್ಥಾಪಿಸಲು ಉದ್ದೇಶಿಸಿವೆ ಎಂದು ತಿಳಿಸಿದರು.
ಇದಕ್ಕೂ ಮುನ್ನ ಉತ್ತರ ಕರ್ನಾಟಕ ಸಣ್ಣ ಕೈಗಾರಿಕೋದ್ಯಮಿಗಳ ಒಕ್ಕೂಟದ ಪದಾಧಿಕಾರಿಗಳು ಸಣ್ಣ ಕೈಗಾರಿಕೆ ಸಚಿವ ಪ್ರಕಾಶ ಹುಕ್ಕೇರಿ ಅವರಿಗೆ ಮನವಿ ಸಲ್ಲಿಸಿ, ತೆರಿಗೆ ರಜಾ ಅವಧಿ ಮತ್ತು ಮುಂದೂಡಿದ ತೆರಿಗೆ ಪಾವತಿಯಂತಹ ಸೌಲಭ್ಯಗಳನ್ನು ಕಲ್ಪಿಸಬೇಕು. ಉದ್ಯಮ ಸ್ಥಾಪನೆಗೆ ಜಾಗ ನೀಡುವಲ್ಲಿ ಅತಿಯಾದ ವಿಳಂಬವಾಗುತ್ತಿದ್ದು, ಈ ನೀತಿಯನ್ನು ಅಧಿಕಾರಿಗಳು ಕೈಬಿಡಬೇಕು ಎಂದು ಆಗ್ರಹಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.