ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅನಾಥ
ಕುಂದಗೋಳ: ಕಾಂಗ್ರೆಸ್ ನೇತೃತ್ವದ 9 ತಿಂಗಳ ಅವಧಿಯ ಸರ್ಕಾರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಅನಾಥ ಪ್ರಜ್ಞೆ ಕಾಡತೊಡಗಿದೆ ಎಂದು ತಾಲೂಕು ಸಾಹಿತ್ಯ ಸಮ್ಮೇಳನಾಧ್ಯಕ್ಷ, ರಂಗಭೂಮಿ ಕಲಾವಿದ ಬಸವರಾಜ ಬೆಂಗೇರಿಅಸಮಾಧಾನ ವ್ಯಕ್ತಪಡಿಸಿದರು.
ತಾಲೂಕಿನ ಸಂಶಿ ಗ್ರಾಮದ ಸರ್ಕಾರಿ ಮಾದರಿ ಕನ್ನಡ ಗಂಡು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಭಾನುವಾರ ಜರುಗಿದ ತಾಲೂಕು ಮಟ್ಟದ ತೃತೀಯ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು. ಕನ್ನಡ ಭಾಷೆ ಉಳಿಯಬೇಕಾದರೆ ನಾವೆಲ್ಲರೂ ದೈನಂದಿನ ಕೆಲಸ ಕಾರ್ಯಗಳಲ್ಲಿ ಆಂಗ್ಲ ಭಾಷೆ ಪದಗಳ ಬಳಕೆ ಕಡಿಮೆ ಮಾಡಿ ಹೆಚ್ಚೆಚ್ಚು ಕನ್ನಡ ಶಬ್ದಗಳ ಪ್ರಯೋಗ ಮಾಡಬೇಕು. ಸರ್ಕಾರ ಕನ್ನಡ ಭಾಷೆ ಉಳಿವಿಕೆಗಾಗಿ ಮಾಡುತ್ತಿರುವ ಕಾರ್ಯಕ್ಕೆ ಅಧಿಕಾರಿಗಳು ಕೈಜೋಡಿಸದೇ ಇರುವುದು ನಿಜಕ್ಕೂ ವಿಪರ್ಯಾಸದ ಸಂಗತಿ ಎಂದರು. ಇದರಿಂದ ಕೇವಲ ಭಾಷೆಯ ಚಾರಿತ್ರ್ಯವಧೆಯಾಗದೇ ನಮ್ಮ ಸಂಸ್ಕೃತಿಯ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಕನ್ನಡ ಭಾಷೆ, ಕಲೆ, ಸಂಗೀತ ಹಾಗೂ ಸಾಹಿತ್ಯಕ್ಕಾಗಿ ತಮ್ಮದೇ ಆದ ಕೊಡುಗೆ ನೀಡಿದ ದಿ. ಎನ್. ಬಸವರಾಜ ಹಾಗೂ ಯಲಿವಾಳ ಸಿದ್ಧಯ್ಯನವರ ಸಮಾಧಿಗಳ ಅಭಿವೃದ್ಧಿ ಸರ್ಕಾರ ಮುಂದಾಗಬೇಕೆಂದರು. ಭ್ರಷ್ಟಾಚಾರವನ್ನು ಬುಡಸಮೇತ ಕಿತ್ತು ಹಾಕಲು ಪ್ರತಿಯೊಬ್ಬರೂ ಧ್ವನಿಗೂಡಿಸಬೇಕು ಎಂದೂ ಅವರು ಒತ್ತಿ ಹೇಳಿದರು.
ಉದ್ಘಾಟಿಸಿ ಮಾತನಾಡಿದ ದೇವಿಕಾರಾಣಿ ರೋರಿಕ್ ಎಸ್ಟೇಟ್ ವ್ಯವಸ್ಥಾಪಕ ನಿರ್ದೇಶಕ ಡಾ. ಮನು ಬಳಿಗಾರ, ಕನ್ನಡ ಸಾಹಿತ್ಯ ಉಳಿಸಿ-ಬೆಳೆಸುವ ಕೆಲಸ ಯುವಕರ ಮೇಲಿದೆ. ಕನ್ನಡ ಭಾಷೆ ಸಾಹಿತ್ಯಕ್ಕೆ ತನ್ನದೇ ಆದ ಕೊಡುಗೆ ನೀಡಿದೆ. ಸಂಗೀತ ಕ್ಷೇತ್ರ ಶ್ರೀಮಂತಗೊಳಿಸಿದ ಕೀರ್ತಿ ಸವಾಯಿ ಗಂರ್ಧವರು, ಪಂ. ಭೀಮಸೇನ ಜೋಶಿ, ಡಾ. ಗಂಗೂಬಾಯಿ ಹಾನಗಲ್, ಬಸವರಾಜ ರಾಜಗುರು ಅವರುಗಳಿಗೆ ಸಲ್ಲುತ್ತದೆ ಎಂದರು.
ಇದೇ ಸಂದರ್ಭದಲ್ಲಿ ಭ್ರೂಣದ ಕನಸು, ಕನಸಿನಾಸೆ ಕವನ ಸಂಕಲಗಳನ್ನು ಬಿಡುಗಡೆ ಮಾಡಲಾಯಿತು. ಶಿರಹಟ್ಟಿ ಶ್ರೀ ಜಗದ್ಗುರು ಫಕ್ಕಿರಸಿದ್ಧರಾಮ ಸ್ವಾಮೀಜಿ ಸಾನ್ನಿಧ್ಯವಹಿಸಿದ್ದರು. ಎಫ್.ಬಿ. ಸೊರಟೂರ ಮಾತನಾಡಿದರು.
ನಿಕಟಪೂರ್ವ ಸಮ್ಮೇಳನಾಧ್ಯಕ್ಷ ಸತೀಶ ಕುಲಕರ್ಣಿ, ಜಿಲ್ಲಾ ಕಸಾಪ ಅಧ್ಯಕ್ಷ ಡಾ. ಲಿಂಗರಾಜ ಅಂಗಡಿ, ಡಾ. ಆರ್.ಎ. ಅಳಗುಂಡಗಿ, ಶಾಸಕ ಸಿ.ಎಸ್. ಶಿವಳ್ಳಿ ಸೇರಿದಂತೆ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

