ಮದ್ಯಪಾನದಿಂದ ಸಮಾಜದ ಸ್ವಾಸ್ಥ್ಯಕ್ಕೆ ಧಕ್ಕೆ: ಶ್ರೀ
ಹುಬ್ಬಳ್ಳಿ: ಮದ್ಯಪಾನದಿಂದ ಸಮಾಜದ ಸ್ವಾಸ್ಥ್ಯ ಹಾಳಾಗುತ್ತಿದೆ. ಮದ್ಯಪಾನದಂತಹ ದುಶ್ಚಟಗಳಿಗೆ ಯುವ ಜನಾಂಗ ಬಲಿಯಾಗುತ್ತಿದೆ. ಮದ್ಯಪಾನಿಗಳನ್ನು ಪರಿವರ್ತನೆ ಮಾಡುವಂತಹ ಮದ್ಯವರ್ಜನ ಶಿಬಿರ ಸಮಾಜಕ್ಕೆ ಉತ್ತಮ ಸಂದೇಶ ನೀಡುತ್ತಿದೆ ಎಂದು ಮೂರುಸಾವಿರಮಠದ ಗುರುಸಿದ್ಧರಾಜಯೋಗೀಂದ್ರ ಸ್ವಾಮೀಜಿ ಹೇಳಿದರು.
ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಆಯೋಜಿಸಿದ 653ನೇ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು. ದುಶ್ಚಟಗಳಿಗೆ ಸುಲಭವಾಗಿ ಬಲಿಯಾಗುವ ಮನುಷ್ಯ ಅವುಗಳಿಂದ ಹೊರಬರಲಾಗದೇ ಒದ್ದಾಡುತ್ತಾನೆ. ಆದರೆ 8 ದಿನಗಳ ಮದ್ಯವರ್ಜನ ಶಿಬಿರದಲ್ಲಿ ಶಿಬಿರಾರ್ಥಿಗಳನ್ನು ಮದ್ಯ ಸೇವನೆಯಿಂದ ಮುಕ್ತಗೊಳಿಸಿದ್ದು ಶ್ಲಾಘನೀಯ ಎಂದು ಹೇಳಿದರು.
ಸಮಿತಿ ಅಧ್ಯಕ್ಷ, ಪಾಲಿಕೆ ಸದಸ್ಯ ರಾಜಣ್ಣ ಕೊರವಿ, ಉಣಕಲ್ ಪ್ರದೇಶದಲ್ಲಿ ಮದ್ಯವರ್ಜನ ಶಿಬಿರ ಆಯೋಜಿಸಿದ್ದಕ್ಕೆ ಸಂತಸ ವ್ಯಕ್ತಪಡಿಸಿ, ಇಂತಹ ಶಿಬಿರ ನಡೆಸಲು ಅವಕಾಶ ಮಾಡಿಕೊಟ್ಟ ಶ್ರೀಗಳಿಗೆ ಮತ್ತು ಎಸ್ಡಿಎಂ ಗ್ರಾಮಾಭಿವೃದ್ಧಿ ಯೋಜನೆ ನಿರ್ದೇಶಕರಿಗೆ ಅಭಿನಂದನೆ ಸಲ್ಲಿಸಿದರು.
ಎಸ್ಡಿಎಂ ಗ್ರಾಮಾಭಿವೃದ್ಧಿ ಯೋಜನೆ ಪ್ರಾದೇಶಿಕ ನಿರ್ದೇಶಕ ಜಯಶಂಕರ ಶರ್ಮಾ, ಸಾಮಾಜಿಕ ಕಳಕಳಿ ಹೊಂದಿರುವ ಡಾ. ವೀರೇಂದ್ರ ಹೆಗ್ಗಡೆ ಅವರು ಉತ್ತಮ ಸಮಾಜ ನಿರ್ಮಾಣಕ್ಕೆ ಮದ್ಯವರ್ಜನ ಶಿಬಿರ ಅಗತ್ಯ ಎಂದು ಮನಗಂಡು ಈ ನಿಟ್ಟಿನಲ್ಲಿ ಅವರ ಮಾರ್ಗದರ್ಶನದಲ್ಲಿ ಶಿಬಿರ ಆಯೋಜಿಸಲಾಗುತ್ತಿದೆ ಎಂದು ತಿಳಿಸಿದರು.
ಅಖಿಲ ಕರ್ನಾಟಕ ಜಾಗೃತಿ ವೇದಿಕೆ ನಿರ್ದೇಶಕ ವಿವೇಕ ವಿನ್ಸೆಂಟ್ ಪ್ಯಾಸ್, ಮದ್ಯಮುಕ್ತ ಜೀವನದ ಸೊಬಗಿನ ಕುರಿತು ಶಿಬಿರಾರ್ಥಿಗಳಿಗೆ ತಿಳಿಸಿಕೊಟ್ಟರು.
ವೇದಿಕೆಯಲ್ಲಿ ಜಿಲ್ಲಾ ನಿರ್ದೇಶಕ ಎಸ್.ಸೀತಾರಾಮ ಶೆಟ್ಟಿ, ಯೋಜನಾಧಿಕಾರಿ ರೋಹಿತ್ ಎಚ್. ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷ ಪೀರಾಜಿ ಖಂಡೇಕರ್, ಗೌರವಾಧ್ಯಕ್ಷ ಸಿದ್ದಯ್ಯ ಹಿರೇಮಠ, ಉಮೇಶ ಕೌಜಗೇರಿ, ಸಿದ್ದಪ್ಪ ಬೆಂಗೇರಿ ಇನ್ನಿತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

