ಧಾರವಾಡ

ಹೆದ್ದಾರಿ ಅಭಿವೃದ್ಧಿಗೆ ತಿಂಗಳಲ್ಲಿ ಪ್ರಸ್ತಾವನೆ

Published On :

ಕನ್ನಡಪ್ರಭ ವಾರ್ತೆ, ಹುಬ್ಬಳ್ಳಿ, ಜ. 7
ಶಿಗ್ಗಾಂವಿ ಹಾಗೂ ಹುಬ್ಬಳ್ಳಿ ಮಧ್ಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸುವ ಅಪಘಾತ ಹಾಗೂ ಸಾವು-ನೋವು ತಪ್ಪಿಸಲು ಹೆದ್ದಾರಿ ಪಕ್ಕ ಸರ್ವೀಸ್ ರಸ್ತೆ ಹಾಗೂ ಸೇತುವೆ ನಿರ್ಮಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಒಂದು ತಿಂಗಳೊಳಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯಕ್ಕೆ ಪ್ರಸ್ತಾವನೆ ಸಲ್ಲಿಸಲಿದ್ದಾರೆ.
ಸಂಸದ ಪ್ರಹ್ಲಾದ ಜೋಶಿ ನೇತೃತ್ವದಲ್ಲಿ ಹುಬ್ಬಳ್ಳಿಯಿಂದ ವರೂರ ವರೆಗಿನ ರಾಷ್ಟ್ರೀಯ ಹೆದ್ದಾರಿಗೆ ಮಂಗಳವಾರ ಭೇಟಿ ನೀಡಿದ ಮಾಜಿ ಸಚಿವ ಹಾಗೂ ಶಾಸಕ ಬಸವರಾಜ ಬೊಮ್ಮಾಯಿ, ವಿಧಾನಪರಿಷತ್ ಸದಸ್ಯ ಸೋಮಣ್ಣ ಬೇವಿನಮರದ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮುಖ್ಯ ಪ್ರಧಾನ ವ್ಯವಸ್ಥಾಪಕ ಎ.ಕೆ. ಮಾಥೂರ್, ಪ್ರಧಾನ ವ್ಯವಸ್ಥಾಪಕ ಎ.ಕೆ. ಜಾನಬಾಜ್ ಮತ್ತಿತರ ಅಧಿಕಾರಿಗಳು ಸರ್ವೀಸ್ ರಸ್ತೆ ಹಾಗೂ ಮತ್ತಿತರ ಸೌಲಭ್ಯ ಪರಿಶೀಲಿಸಿದರು.
6 ಲೇನ್ ಹೆದ್ದಾರಿ ನಿರ್ಮಾಣಗೊಂಡರೆ ಮಾತ್ರ ಸರ್ವೀಸ್ ರಸ್ತೆ, ಕೆಳ ಸೇತುವೆ, ಮೇಲ್ಸೇತುವೆ ನಿರ್ಮಾಣ ಸಾಧ್ಯ ಎಂಬ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ನಿಯಮಗಳನ್ನು ಸಡಿಲಿಸಬೇಕು ಎಂದು ಇದೇ ಸಂದರ್ಭದಲ್ಲಿ  ಸಂಸದ ಪ್ರಹ್ಲಾದ ಜೋಶಿ ಹಾಗೂ ಮಾಜಿ ಸಚಿವ ಬಸವರಾಜ ಬೊಮ್ಮಾಯಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳನ್ನು ಒತ್ತಾಯಿಸಿದರು.
ಶಿಗ್ಗಾಂವಿ, ಬಂಕಾಪುರ ಹಾಗೂ ವರೂರ ಬಳಿ ವಾಹನ ಸಂಚಾರಕ್ಕೆ ಅನುಕೂಲವಾಗುವಂತೆ ಕೆಳಸೇತುವೆ ನಿರ್ಮಿಸಬೇಕು. ಬೆಳಗಲಿ ಕ್ರಾಸ್, ಛಬ್ಬಿ ಕ್ರಾಸ್ ಹಾಗೂ ವರೂರ ಸಮೀಪದ ವಿಆರ್ಎಲ್ ಬಳಿ ಮೇಲ್ಸೇತುವೆ ನಿರ್ಮಿಸಲು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ಆಸ್ಕರ್ ಫರ್ನಾಂಡಿಸ್ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಹಿರಿಯ ಅಧಿಕಾರಿಗಳನ್ನು ತಕ್ಷಣ ಭೇಟಿ ಮಾಡಿ, ಶಿಗ್ಗಾಂವಿಯಿಂದ ಹುಬ್ಬಳ್ಳಿವರೆಗಿನ ಮಾರ್ಗದಲ್ಲಿ ಕೆಳಸೇತುವೆ, ಮೇಲ್ಸೇತುವೆ ಹಾಗೂ ಸರ್ವೀಸ್ ರಸ್ತೆ ನಿರ್ಮಾಣದ ಕುರಿತು ಚರ್ಚಿಸುವುದಾಗಿ ತಿಳಿಸಿದ ಸಂಸದ ಪ್ರಹ್ಲಾದ ಜೋಶಿ, ತಕ್ಷಣ ಕಾಮಗಾರಿ ಪ್ರಾರಂಭಿಸದಿದ್ದರೆ ಫೆಬ್ರವರಿ ಅಂತ್ಯದಲ್ಲಿ ಪ್ರತಿಭಟನೆ ಮಾಡುಲಾಗುವುದು ಎಂದು ಎಚ್ಚರಿಸಿದರು.
2010-11ರಲ್ಲಿ ಹೆದ್ದಾರಿ ನಿರ್ಮಿಸುವ ಸಂದರ್ಭದಲ್ಲಿಯೇ ಸರ್ವೀಸ್ ರಸ್ತೆ ಹಾಗೂ ಕೆಳಸೇತುವೆ ನಿರ್ಮಿಸಬೇಕಿತ್ತಾದರೂ ಅಂದಿನ ಗುತ್ತಿಗೆದಾರರು ಈ ಸೌಕರ್ಯಗಳನ್ನು ಕಲ್ಪಿಸಿಲ್ಲ ಎಂದು ಹೆದ್ದಾರಿ ಪಕ್ಕದ ಗ್ರಾಮಸ್ಥರು ಇದೇ ಸಂದರ್ಭದಲ್ಲಿ ದೂರಿದರು.
ಪಾಳೆ ಕ್ರಾಸ್ ಬಳಿ ನಿರ್ಮಿಸಿರುವ ಕೆಳಸೇತುವೆಯಲ್ಲಿ ಮಳೆಗಾಲದಲ್ಲಿ ನೀರು ನಿಲ್ಲುತ್ತಿದ್ದು, ಗ್ರಾಮಸ್ಥರು ಹಾಗೂ ಚಕ್ಕಡಿ, ಟ್ರ್ಯಾಕ್ಟರ್ ಸಂಚಾರಕ್ಕೆ ತೊಂದರೆಯುಂಟಾಗಿದೆ. ವರೂರ ಗ್ರಾಮದ ಬಳಿ ಪದೇ ಪದೇ ಅಪಘಾತಗಳು ಸಂಭವಿಸುತ್ತಿವೆ. ವರೂರ ಗ್ರಾಮದ ಬಳಿ ವೃತ್ತ ನಿರ್ಮಾಣದ ಯೋಜನೆ ಇದ್ದರೂ ಇದುವರೆಗೂ ಈಡೇರಿಲ್ಲ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದರು.
ಸರ್ವೀಸ್ ರಸ್ತೆಗೆ ಭೂಮಿ ವಶಪಡಿಸಿಕೊಳ್ಳುವ ಕಾರ್ಯ ಪೂರ್ಣಗೊಂಡಿದ್ದರೂ ಸರ್ವೀಸ್ ರಸ್ತೆ ಕಾಮಗಾರಿ ಪೂರ್ಣಗೊಂಡಿಲ್ಲ. ಇದರಿಂದ ರೈತರು ತೊಂದರೆಗೊಳಗಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.