ಇಂದಿನಿಂದ ಕೆಎಸ್ಡಿಎಲ್ ಸೋಪ್ ಸಂತೆ
ಹುಬ್ಬಳ್ಳಿ: ಗ್ರಾಹಕರಿಗೆ ರಿಯಾಯಿತಿ ದರದಲ್ಲಿ ಉತ್ಪನ್ನಗಳನ್ನು ತಲುಪಿಸುವ ಉದ್ದೇಶದಿಂದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ ವತಿಯಿಂದ ಇಲ್ಲಿಯ ದೇಶಪಾಂಡೆ ನಗರದ ಗುಜರಾತ್ ಭವನದಲ್ಲಿ ಜ. 9ರಿಂದ 19ರವರೆಗೆ 'ಸೋಪ್ ಸಂತೆ' ಹಮ್ಮಿಕೊಳ್ಳಲಾಗಿದೆ.
ಮೈಸೂರು ಸ್ಯಾಂಡಲ್ ಸೋಪ್, ಮೈಸೂರು ಸ್ಯಾಂಡಲ್ ಗಿಫ್ಟ್ ಪ್ಯಾಕ್, ಮೈಸೂರು ಸ್ಯಾಂಡಲ್ ಗೋಲ್ಡ್, ಮೈಸೂರು ಸ್ಯಾಂಡಲ್ ಸಿಕ್ಸರ್ ಸೇರಿದಂತೆ ವಿವಿಧ ರೀತಿಯ ಮೈಸೂರು ಸ್ಯಾಂಡಲ್ ಸೋಪ್ಗಳು, ಅಗರಬತ್ತಿಗಳು, ಶ್ರೀಗಂಧದ ಬಿಲ್ಲೆಗಳು, ಎಣ್ಣೆ ಮತ್ತಿತರ ಉತ್ಪನ್ನಗಳನ್ನು ಈ ಸಂತೆಯಲ್ಲಿ ಪ್ರದರ್ಶನ ಮತ್ತು ಮಾರಾಟ ಮಾಡಲಾಗುವುದು ಎಂದು ಸಂಸ್ಥೆಯ ಮಾರುಕಟ್ಟೆ ವಿಭಾಗದ ವ್ಯವಸ್ಥಾಪಕ ನಿರ್ದೇಶಕ ಎ.ಸಿ. ಕೇಶವಮೂರ್ತಿ ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಪ್ರತಿ ದಿನ ಬೆಳಗ್ಗೆ 10 ರಿಂದ ರಾತ್ರಿ 9ರವರೆಗೆ ಸೋಪ್ ಸಂತೆ ನಡೆಯಲಿದ್ದು, ಜ. 9ರಂದು ನಡೆಯಲಿರುವ ಉದ್ಘಾಟನಾ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ ಗುಂಡೂರಾವ್, ಶಾಸಕರಾದ ವಿನಯ ಕುಲಕರ್ಣಿ, ಸಂತೋಷ ಲಾಡ್, ಬಸವರಾಜ ಹೊರಟ್ಟಿ ಪಾಲ್ಗೊಳ್ಳುವರು. ಮಾಜಿ ಮುಖ್ಯಮಂತ್ರಿ ಹಾಗೂ ಶಾಸಕ ಜಗದೀಶ ಶೆಟ್ಟರ ಮತ್ತು ಸಂಸದ ಪ್ರಹ್ಲಾದ ಜೋಶಿ ಅವರೂ ಸಂತೆಗೆ ಭೇಟಿ ನೀಡಲಿದ್ದಾರೆ ಎಂದು ಹೇಳಿದರು.
ಮುಂಬರುವ ದಿನಗಳಲ್ಲಿ ಪ್ರತಿ ಜಿಲ್ಲೆಯಲ್ಲಿ ಸೋಪ್ ಸಂತೆ ಆಯೋಜಿಸುವ ಉದ್ದೇಶ ಇದೆ. ಪರಿಸರ ಸಂರಕ್ಷಣೆ ಉದ್ದೇಶದಿಂದ 'ಶ್ರೀಗಂಧ ಬೆಳೆಸಿ ಸಿರಿವಂತರಾಗಿ' ಎಂಬ ಯೋಜನೆಯಡಿ ಈ ಭಾಗದ ರೈತರಿಗೆ ರಿಯಾಯಿತಿ ದರದಲ್ಲಿ ಶ್ರೀಗಂಧದ ಸಸಿಗಳನ್ನು ಮಾರಾಟ ಮಾಡಲಾಗುವುದು.
ಕಳೆದ ವರ್ಷ ಹಮ್ಮಿಕೊಂಡಿದ್ದ ಸೋಪ್ ಸಂತೆಯಲ್ಲಿ ರು. 28 ಲಕ್ಷ ವೆಚ್ಚದ ಉತ್ಪನ್ನ ಮಾರಾಟವಾಗಿದ್ದು, ಈ ಬಾರಿ ರು. 35 ಲಕ್ಷ ಮೊತ್ತದ ಉತ್ಪನ್ನ ಮಾರಾಟವಾಗುವ ನಿರೀಕ್ಷೆ ಇದೆ.
ಪ್ರಸಕ್ತ ವರ್ಷದಲ್ಲಿ ರು. 345 ಕೋಟಿ ವೆಚ್ಚದ ಉತ್ಪನ್ನಗಳನ್ನು ಮಾರಾಟ ಮಾಡುವ ಗುರಿ ಹೊಂದಲಾಗಿದೆ. 2011-12ರ ಹಣಕಾಸು ವರ್ಷದಲ್ಲಿ ಸಂಸ್ಥೆ ರು. 16 ಕೋಟಿ ನಿವ್ವಳ ಲಾಭ ಗಳಿಸಿದ್ದು, 2012-13ಕ್ಕೆ ಹೋಲಿಸಿದಾಗ ನಿವ್ವಳ ಲಾಭ ರು. 21 ಕೋಟಿ ಆಗಿದೆ ಎಂದು ವಿವರಿಸಿದರು. ಸಂಸ್ಥೆಯ ಮಾರಾಟ ವಿಭಾಗದ ಉಪ ಪ್ರಧಾನ ವ್ಯವಸ್ಥಾಪಕ ಸಿ.ಎಂ. ಸುವರ್ಣಕುಮಾರ್ ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

