3ನೇ ಹಂತದ ರು. 100 ಅನುದಾನ ಹಂಚಿಕೆ
ಧಾರವಾಡ: ಅವಳಿ ನಗರಕ್ಕೆ ಲಭಿಸಲಿರುವ 3ನೇ ಹಂತದ ನೂರು ಕೋಟಿ ರುಪಾಯಿಗಳ ಅನುದಾನವನ್ನು ವಿಧಾನಸಭಾ ಕ್ಷೇತ್ರವಾರು ಹಂಚಿಕೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಸಮೀರ್ ಶುಕ್ಲ ಹೇಳಿದ್ದಾರೆ.
ನಗರೋತ್ಥಾನ ಯೋಜನೆಯಡಿ ಅವಳಿ ನಗರಕ್ಕೆ ಲಭಿಸಲಿರುವ 3ನೇ ಹಂತದ ನೂರು ಕೋಟಿ ಅನುದಾನದ ಬಳಕೆ ಕುರಿತು ಭಾನುವಾರ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ ಗುಂಡೂರಾವ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅವರು ಮಾಹಿತಿ ನೀಡಿದರು.
ಧಾರವಾಡ ವಿಧಾನಸಭಾ ಕ್ಷೇತ್ರಕ್ಕೆ ರು. 1.2 ಕೋಟಿ, ಹು-ಧಾ ಪೂರ್ವ ವಿಧಾನಸಭಾ ಕ್ಷೇತ್ರಕ್ಕೆ ರು. 1.25 ಕೋಟಿ, ಹು-ಧಾ ಸೆಂಟ್ರಲ್ ವಿಧಾನಸಭಾ ಕ್ಷೇತ್ರಕ್ಕೆ ರು. 3.5 ಕೋಟಿ, ಹು-ಧಾ ಪಶ್ಚಿಮ ವಿಧಾನಸಭಾ ಕ್ಷೇತ್ರಕ್ಕೆ ರು. 3.6 ಕೋಟಿ ಹಂಚಿಕೆ ಮಾಡಲಾಗಿದೆ.
ರಸ್ತೆ ಹಾಗೂ ಸೇತುವೆ ನಿರ್ಮಾಣ ಮತ್ತು ದುರಸ್ತಿಗೆ ಧಾರವಾಡ ವಿಧಾನಸಭಾ ಕ್ಷೇತ್ರಕ್ಕೆ 58 ಲಕ್ಷ, ಹು-ಧಾ ಪೂರ್ವವಿಧಾನಸಭಾ ಕ್ಷೇತ್ರಕ್ಕೆ ರು. 87.55 ಲಕ್ಷ, ಹು-ಧಾ ಸೆಂಟ್ರಲ್ ವಿಧಾನಸಭಾ ಕ್ಷೇತ್ರಕ್ಕೆ ರು. 1.7 ಕೋಟಿ, ಹು-ಧಾ ಪಶ್ಚಿಮವಿಧಾನಸಭಾ ಕ್ಷೇತ್ರಕ್ಕೆ ರು. 2.15 ಕೋಟಿ ನೀಡಲಾಗಿದೆ ಎಂದು ತಿಳಿಸಿದರು.
ಹು-ಧಾ ಪೂರ್ವ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ 32 ಕೊಳಚೆ ಪ್ರದೇಶಗಳ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಒದಗಿಸಬೇಕೆಂದು ಶಾಸಕ ಪ್ರಸಾದ ಅಬ್ಬಯ್ಯ ಮನವಿ ಮಾಡಿದರು. 2ನೇ ಹಂತದ ರು. 100 ಕೋಟಿ ಅನುದಾನ ಬಾರದ ಹಿನ್ನೆಲೆಯಲ್ಲಿ ಕಾಮಗಾರಿಗಳು ಅರ್ಧಕ್ಕೆ ನಿಂತಿವೆ. 2ನೇ ಹಂತದ ರು. 100 ಕೋಟಿ ಅನುದಾನದಲ್ಲಿ ಕೈಗೆತ್ತಿಕೊಂಡಿದ್ದ 350 ಕಾಮಗಾರಿಗಳ ಪೈಕಿ 246 ಪೂರ್ಣಗೊಂಡಿದ್ದು ರು. 49.6 ಕೋಟಿ ಬಂದಿದೆ. ರು. 51 ಕೋಟಿ ಅನುದಾನ ಬರಬೇಕು ಎಂದು ಪಾಲಿಕೆ ಎಂಜಿನಿಯರ್ ಮಾಹಿತಿ ನೀಡಿದರು.
ಪಾಲಿಕೆ ವಲಯ ಅಧಿಕಾರಿಗಳು ತಮ್ಮ ಕ್ಷೇತ್ರ ಪರಿಶೀಲಿಸದೇ ಕಚೇರಿಗೆ ಸೀಮಿತವಾಗುವುದು ಸರಿಯಲ್ಲ. ಈಗಾಗಲೇ ಪಾಲಿಕೆ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದ್ದು, ಸರಿಯಾಗಿ ಕೆಲಸ ಮಾಡದಿದ್ದರೆ ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಸಚಿವ ದಿನೇಶ ಗುಂಡೂರಾವ್ ಮತ್ತೊಮ್ಮೆ ಎಚ್ಚರಿಸಿದರು.
ಶಾಸಕ ವಿನಯ ಕುಲಕರ್ಣಿ, ವಿಧಾನಪರಿಷತ್ ಸದಸ್ಯರಾದ ನಾಗರಾಜ ಛಬ್ಬಿ, ವೀರಣ್ಣ ಮತ್ತಿಕಟ್ಟಿ, ಶ್ರೀನಿವಾಸ ಮಾನೆ ಹಾಗೂ ಪಾಲಿಕೆ ಆಯುಕ್ತ ರಮಣದೀಪ ಚೌಧರಿ ಇದ್ದರು.
ಜಿಮಖಾನಾ ಮೈದಾನ ವಿವಾದ: ಸಿಎಂರೊಂದಿಗೆ ಚರ್ಚೆ
ಧಾರವಾಡ: ಜಿಮಖಾನಾ ಮೈದಾನಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಸಮೀರ್ ಶುಕ್ಲ ಅವರು ಸರ್ಕಾರಕ್ಕೆ ಸಲ್ಲಿಸಿರುವ ವರದಿ ಆಧಾರದ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ಆದಷ್ಟು ಬೇಗ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ ಗುಂಡೂರಾವ್ ಹೇಳಿದರು.
ಭಾನುವಾರ ಆರ್.ಎನ್. ಶೆಟ್ಟಿ ಕ್ರೀಡಾಂಗಣದಲ್ಲಿ ಗಣರಾಜ್ಯೋತ್ಸವ ನಿಮಿತ್ತ ರಾಷ್ಟ್ರಧ್ವಜಾರೋಹಣ ನೆರವೇರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
ಮೈದಾನದ ಬಗ್ಗೆ ಇರುವ ವಿವಾದವನ್ನು ಪರಿಶೀಲಿಸಿದ್ದು, ಜಿಲ್ಲಾಧಿಕಾರಿ ಸಲ್ಲಿಸಿರುವ ವರದಿ ಆಧರಿಸಿ ಸರ್ಕಾರ ತೀರ್ಮಾನ ತೆಗೆದುಕೊಳ್ಳಲಿದೆ ಎಂದರು. ಹು-ಧಾ ಅವಳಿನಗರದ ಅಭಿವೃದ್ಧಿಗೆ ನಗರೋತ್ಥಾನ ಯೋಜನೆಯಡಿ ರು. 100 ಕೋಟಿ ವಿಶೇಷ ಅನುದಾನವನ್ನು ಜಿಲ್ಲಾಧಿಕಾರಿಯೊಂದಿಗೆ ಸಭೆ ನಡೆಸಿ ಬಿಡುಗಡೆ ಮಾಡಲಾಗುವುದು. ರು. 100 ಕೋಟಿ ಅನುದಾನದಲ್ಲಿ ಕುಡಿಯುವ ನೀರು ಪೂರೈಕೆಗೆ ರು. 40 ಕೋಟಿ ಹಾಗೂ ಉಳಿದ ಮೊತ್ತವನ್ನು ಧಾರವಾಡದ ಕಲಾಭವನ ನವೀಕರಣ, ಆಧುನಿಕ ಈಜುಗೋಳ ನಿರ್ಮಾಣ ಸೇರಿದಂತೆ ಮತ್ತಿತರ ಬಾಕಿಯಿರುವ ಕಾಮಗಾರಿಗಳಿಗೆ ಉಪಯೋಗಿಸುವ ಯೋಜನೆ ಇದೆ. ಅವಳಿನಗರದಲ್ಲಿನ ಪಾಲಿಕೆ ವ್ಯಾಪ್ತಿಯ 30 ರಸ್ತೆಗಳ ಪೈಕಿ 17 ರಸ್ತೆಗಳ ಗುಂಡಿ ಮುಚ್ಚುವ ಕಾರ್ಯ ಪೂರ್ಣಗೊಂಡಿದೆ ಎಂದು ತಿಳಿಸಿದರು. ತ್ವರಿತ ಬಸ್ ಸಂಚಾರ ವ್ಯವಸ್ಥೆ ಯೋಜನೆಗೆ ಭೂಸ್ವಾಧೀನ ಕುರಿತಂತೆ 13 ಸಭೆಗಳನ್ನು ನಡೆಸಿದ್ದು, ಸ್ವಾಧೀನಪಡಿಸಿಕೊಳ್ಳುವ ಭೂಮಿಗೆ ಮಾರುಕಟ್ಟೆ ಬೆಲೆ ನೀಡುವ ಪ್ರಸ್ತಾಪಕ್ಕೆ ಜಮೀನು ಮಾಲೀಕರು ಒಪ್ಪಿದ್ದಾರೆ ಎಂದು ಡಿಸಿ ಮಾಹಿತಿ ನೀಡಿದ್ದಾರೆ. ಜಿಲ್ಲೆಯಲ್ಲಿ ಆರಂಭಗೊಂಡು ಹಣಕಾಸಿನ ಕೊರತೆಯಿಂದ ಸ್ಥಗಿತಗೊಂಡಿರುವ ವಿವಿಧ ಕಾಮಗಾರಿಗೆ ಶೀಘ್ರ ಅನುದಾನ ಬಿಡುಗಡೆ ಮಾಡಿ ಪೂರ್ಣಗೊಳಿಸಲಾಗುವುದು. ಆರ್.ಎನ್. ಶೆಟ್ಟಿ ಕ್ರೀಡಾಂಗಣದಲ್ಲಿ ಸಿಂಥೆಟಿಕ್ ಟ್ರ್ಯಾಕ್ ನಿರ್ಮಾಣ ಕಾಮಗಾರಿ ಜೂನ್ ಅಂತ್ಯದೊಳಗೆ ಪೂರ್ಣಗೊಳ್ಳಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

