ಅಪಘಾತದಲ್ಲಿ ನಿತ್ಯ 300 ಜನ ಸಾವು
ಹುಬ್ಬಳ್ಳಿ: ಸಂಚಾರ ನಿಯಮ ಉಲ್ಲಂಘನೆಯಿಂದ ಸಂಭವಿಸುತ್ತಿರುವ ಅಪಘಾತಗಳಲ್ಲಿ ಪ್ರತಿನಿತ್ಯ ದೇಶದಲ್ಲಿ 300 ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ ಎಂದು ನರರೋಗ ತಜ್ಞ ಡಾ. ಸುರೇಶ ದುಗ್ಗಾಣಿ ವಿಷಾದಿಸಿದರು.
ಹುಬ್ಬಳ್ಳಿ-ಧಾರವಾಡ ಮಹಾನಗರ ಪೊಲೀಸ್ ಕಮೀಷ್ನರೇಟ್ ಸೋಮವಾರ ಸಂಜೆ ಆರ್.ಎನ್. ಶೆಟ್ಟಿ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ 25ನೇ ರಾಷ್ಟ್ರೀಯ ರಸ್ತೆ ಸುರಕ್ಷಾ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.
2001-2008ರ ವರೆಗೆ ಸಂಭವಿಸಿದ ಅಪಘಾತಗಳ ಸಂಖ್ಯೆಯಲ್ಲಿ ಶೇ. 25ರಷ್ಟು ಹೆಚ್ಚಳವಾಗಿದೆ. ಪ್ರತಿ 10 ಸಾವಿರ ರಸ್ತೆ ಅಪಘಾತಗಳಲ್ಲಿ 78 ಜನರು ಸಾವನ್ನಪ್ಪುತ್ತಿದ್ದಾರೆ ಎಂದರು.
ಅತಿವೇಗ, ನಿರ್ಲಕ್ಷ್ಯ ಹಾಗೂ ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವುದರಿಂದ ರಸ್ತೆ ಅಪಘಾತಗಳ ಪ್ರಮಾಣ ಹೆಚ್ಚುತ್ತಿದ್ದು, ಸಂಚಾರ ನಿಯಮಗಳ ಪಾಲನೆಗೆ ಮತ್ತು ಅಪಘಾತ ತಡೆಗೆ ಪೊಲೀಸ್ ಇಲಾಖೆಯೊಂದಿಗೆ ಕೈಜೋಡಿಸಬೇಕು. ವಾಹನ ಚಾಲನಾ ಪರವಾನಗಿ ನೀಡಿಕೆಯಲ್ಲಿನ ಲೋಪದೋಷಗಳು ಅಪಘಾತಗಳ ಸಂಖ್ಯೆ ಹೆಚ್ಚಳವಾಗುವುದಕ್ಕೆ ಕಾರಣವಾಗಿದ್ದು, ಸಾರಿಗೆ ಇಲಾಖೆ ವಾಹನ ಚಾಲನಾ ಪರವಾನಗಿ ನೀಡುವ ಸಂದರ್ಭದಲ್ಲಿ ಎಚ್ಚರಿಕೆ ವಹಿಸುವುದು ಅಗತ್ಯ ಎಂದರು.
ಹು-ಧಾ ಮಹಾನಗರ ಪೊಲೀಸ್ ಆಯುಕ್ತ ರವೀಂದ್ರಪ್ರಸಾದ, ವಿದ್ಯಾರ್ಥಿ ದೆಸೆಯಿಂದಲೇ ಸಂಚಾರ ನಿಯಮಗಳ ಬಗ್ಗೆ ಮಕ್ಕಳು ತಿಳಿವಳಿಕೆ ಮೂಡಿಸುವ ನಿಟ್ಟಿನಲ್ಲಿ ಸಂಚಾರ ವ್ಯವಸ್ಥೆಗೆ ಸಂಬಂಧಿಸಿದ ಅಧ್ಯಾಯವನ್ನು ಪಠ್ಯದಲ್ಲಿ ಸೇರಿಸುವಂತೆ ಶಿಕ್ಷಣ ಇಲಾಖೆ ಕಾರ್ಯದರ್ಶಿಯೊಂದಿಗೆ ಚರ್ಚಿಸಲಾಗುವುದು. ಸಂಚಾರ ನಿಯಮಗಳ ಪಾಲನೆ ಕರ್ತವ್ಯ ಎಂದು ಪ್ರತಿಯೊಬ್ಬರೂ ತಿಳಿದುಕೊಂಡು ನಡೆದರೆ ಮಾತ್ರ ಅಪಘಾತಗಳನ್ನು ತಡೆಗಟ್ಟಲು ಸಾಧ್ಯ. ಪೊಲೀಸ್ ಇಲಾಖೆ ಸುಗಮ ಸಂಚಾರ ವ್ಯವಸ್ಥೆಗೆ ಎಲ್ಲ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಆದರೆ, ಪ್ರತಿಯೊಂದು ಹಂತದಲ್ಲಿ ಪೊಲೀಸ್ ಸಿಬ್ಬಂದಿ ಸೇವೆ ನೀಡಲು ಸಾಧ್ಯವಿಲ್ಲ. ರಸ್ತೆ ಸುರಕ್ಷಾ ಸಪ್ತಾಹದ ಉದ್ದೇಶ ಸಫಲಗೊಳ್ಳಲು ಸಾರ್ವಜನಿಕರು ಪೊಲೀಸ್ರೊಂದಿಗೆ ಸಹಕರಿಸಿ, ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಹೇಳಿದರು.
ಪಾಲಿಕೆ ಆಯುಕ್ತ ರಮಣದೀಪ ಚೌಧರಿ, ಉತ್ತಮ ರಸ್ತೆ, ಟ್ರಾಫಿಕ್ ಸಿಗ್ನಲ್ಗಳ ಅಳವಡಿಕೆ ಸೇರಿದಂತೆ ಅಪಘಾತ ರಹಿತ ಪ್ರಯಾಣಕ್ಕೆ ಬೇಕಾಗುವ ಎಲ್ಲ ಸವಲತ್ತುಗಳನ್ನು ವಿವಿಧ ಯೋಜನೆಗಳಲ್ಲಿ ಹಣ ಕಾಯ್ದಿರಿಸುವ ಮೂಲಕ ಒದಗಿಸಲಾಗುವುದು ಎಂದು ಹೇಳಿದರು.
ಉಪ ಪೊಲೀಸ್ ಆಯುಕ್ತ ಶ್ರೀನಾಥ ಜೋಶಿ ಪ್ರಾಸ್ತಾವಿಕ ಮಾತನಾಡಿದರು. ಸಹಾಯಕ ಪೊಲೀಸ್ ಆಯುಕ್ತ ಅಡಿವೆಪ್ಪ ಆರ್. ಬಡಿಗೇರ, ಸಪ್ತಾಹದ ಅಂಗವಾಗಿ ಏರ್ಪಡಿಸಲಾಗಿದ್ದ ವಿವಿಧ ಕಾರ್ಯಕ್ರಮಗಳನ್ನು ವಿವರಿಸಿದರು.
ಡಿಸಿಪಿಗಳಾದ ಸುಭಾಸ ಗುಡಿಮನಿ, ಮನೋಹರ ಜೋಗಳೆಕರ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ ನಮಾಜಿ ಇದ್ದರು.
ಸಪ್ತಾಹದ ಅಂಗವಾಗಿ ಆರು ದಿನ ಸುಗಮ ರಸ್ತೆ ಸಂಚಾರ ವ್ಯವಸ್ಥೆಗೆ ಸಂಬಂಧಿಸಿದಂತೆ ಏರ್ಪಡಿಸಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

