ಹೊಸ ಚಿಂತನೆಗೆ ಒಡ್ಡಿಕೊಳ್ಳಿ
ಕನ್ನಡಪ್ರಭ ವಾರ್ತೆ, ಧಾರವಾಡ, ಜು. 27
ರಾಜ್ಯದ ಹಲವೆಡೆ ನಡೆಯುವ ಪಕ್ಷದ ಕಾರ್ಯಕಾರಿಣಿ ಸಭೆಗಳು ಪದಾಧಿಕಾರಿಗಳ ಆಯ್ಕೆ, ಹೊಸ ಚಿಂತನೆಗಳಿಗೆ ವೇದಿಕೆಯಾಗುತ್ತಿವೆ. ಪಕ್ಷದ ಕಾರ್ಯಕರ್ತರು, ಪದಾಧಿಕಾರಿಗಳು ಪಕ್ಷದ ಸಂಘಟನೆ ಗಟ್ಟಿಗೊಳಿಸಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ ಜೋಶಿ ಹೇಳಿದರು.
ಇಲ್ಲಿನ ಲಿಂಗಾಯತ ಟೌನ್ ಹಾಲ್ನಲ್ಲಿ ಭಾನುವಾರ ನಡೆದ ಬಿಜೆಪಿಯ ಹು-ಧಾ ಮಹಾನಗರ ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ಕೊಳಚೆ ಪ್ರದೇಶದ ಸಮಸ್ಯೆಗಳ ಬಗ್ಗೆ ಗಮನ ಹರಿಸಿ, ಪರಿಹಾರಕ್ಕಾಗಿ ಯತ್ನಿಸಬೇಕು. ಕ್ರಿಯಾಶೀಲರಾಗಿ ಸಮಾಜಮುಖಿ ಕೆಲಸಗಳಲ್ಲಿ ತೊಡಗಬೇಕೆಂದರು.
ಕೇಂದ್ರ ಸರ್ಕಾರದ ಹಂತದಲ್ಲಿ ಸ್ಮಾರ್ಟ್ ಸಿಟಿಯ ಕಲ್ಪನೆ ಇನ್ನೂ ಚರ್ಚೆಯ ಹಂತದಲ್ಲಿದೆ. ಸ್ಮಾರ್ಟ್ ಸಿಟಿಗಳ ಪಟ್ಟಿ ಸಿದ್ಧಗೊಂಡಿಲ್ಲ. ಈ ಬಗ್ಗೆ ಸರಿಯಾದ ಮಾಹಿತಿ ಪಡೆಯದ ಸಚಿವ ದಿನೇಶ ಗುಂಡೂರಾವ್ ಹು-ಧಾ ಮಹಾನಗರವನ್ನು ಸ್ಮಾರ್ಟ್ ಸಿಟಿ ಪಟ್ಟಿಯಿಂದ ಕೈಬಿಡಲಾಗಿದೆ ಎಂದು ದೂರಿದ್ದಾರೆ.
ಸುಳ್ಳು ಹೇಳಿಕೆ ನೀಡಿ ಗೊಂದಲಕ್ಕೆ ತಳ್ಳುವ ಕಾಂಗ್ರೆಸ್ ಕುತಂತ್ರವನ್ನು ಕಾರ್ಯಕರ್ತರು ಅರ್ಥ ಮಾಡಿಕೊಳ್ಳಬೇಕು ಎಂದರು.
ಕಾಂಗ್ರೆಸ್ ಸರ್ಕಾರ ಆಡಳಿತ ಹಿಡಿದು ಒಂದೂವರೆ ವರ್ಷವಾದರೂ ಪಾಲಿಕೆಗೆ ಅನುದಾನ ಬಿಡುಗಡೆ ಮಾಡಿಲ್ಲ. ಅನುದಾನ ಕೊಟ್ಟಿದ್ದರೆ ಸಾರ್ವಜನಿಕರಿಗೆ ಮಾಹಿತಿ ನೀಡಲಿ ಎಂದು ಜೋಶಿ ಸವಾಲೆಸೆದರು. ಮಾಜಿ ಶಾಸಕರಾದ ಸೀಮಾ ಮಸೂತಿ, ವೀರಭದ್ರಪ್ಪ ಹಾಲಹರವಿ, ಲಿಂಗರಾಜ ಪಾಟೀಲ, ಮಹೇಶ ಟೆಂಗಿನಕಾಯಿ ಇದ್ದರು.
ಸಿಎಂ ಸಿದ್ದು ವಿರುದ್ಧ ಹೋರಾಟ
ಧಾರವಾಡ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾದ್ಯಂತ ಹೋರಾಟ ಆರಂಭಿಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ ಜೋಶಿ ಹೇಳಿದ್ದಾರೆ.
ಭಾನುವಾರ ಧಾರವಾಡದಲ್ಲಿ ನಡೆದ ಕಾರ್ಯಕಾರಣಿ ಸಭೆಯಲ್ಲಿ ತಮ್ಮನ್ನು ಭೇಟಿಯಾದ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳ ನೇತೃತ್ವದ ರಾಜ್ಯ ಸರ್ಕಾರದಲ್ಲಿ 541 ಎಕರೆ ಭೂಮಿ ಡಿನೋಟಿಫಿಕೇಶನ್ ಆಗಿರುವ ಪ್ರಕರಣವನ್ನು ವಿಪಕ್ಷ ನಾಯಕ ಜಗದೀಶ ಶೆಟ್ಟರ್ ಬಯಲಿಗೆ ತಂದಿದ್ದಾರೆ. ಇದು ದೊಡ್ಡ ಮಟ್ಟದ ಸಂಚಲನ ಮೂಡಿಸಿದೆ. ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿರುವ ಬಿಜೆಪಿ, ರಾಜ್ಯ ಸರ್ಕಾರದ ವಿರುದ್ಧ ಹೋರಾಟಕ್ಕೆ ಅಣಿಯಾಗುತ್ತಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟು ರಾಜ್ಯ ಸರ್ಕಾರ ಎಲ್ಲ ಕ್ಷೇತ್ರಗಳಲ್ಲಿಯೂ ವಿಫಲವಾಗಿದೆ. ಅಸಮರ್ಥ ಗೃಹಮಂತ್ರಿಯ ಕಾರ್ಯವೈಖರಿಯಿಂದ ಪರಿಸ್ಥಿತಿ ಕೈ ಮೀರುತ್ತಿದೆ ಎಂದು ಜೋಶಿ ಬೇಸರ ವ್ಯಕ್ತಪಡಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

