ಉಕದಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸಿ
ಕನ್ನಡಪ್ರಭ ವಾರ್ತೆ, ಹುಬ್ಬಳ್ಳಿ, ಜೂ. 6
ಧಾರವಾಡ-ಹುಬ್ಬಳ್ಳಿ, ಬೆಳಗಾವಿ ಸೇರಿದಂತೆ ಉತ್ತರ ಕರ್ನಾಟಕದಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಸಾಕಷ್ಟು ಸಂಪನ್ಮೂಲಗಳಿವೆ. ಈ ಭಾಗದತ್ತ ಕೈಗಾರಿಕೋದ್ಯಮಿಗಳನ್ನು ಆಕರ್ಷಿಸಲು ಸರ್ಕಾರ ಇಚ್ಛಾಶಕ್ತಿ ತೋರಬೇಕಿದೆ ಎಂಬ ಸಲಹೆ ನಗರದಲ್ಲಿ ಶುಕ್ರವಾರ ಇಂಡೋ-ಅಮೇರಿಕನ್ ಚೇಂಬರ್ ಆಫ್ ಕಾಮರ್ಸ್ ಸಹಯೋಗದೊಂದಿಗೆ ದೇಶಪಾಂಡೆ ಫೌಂಡೇಶನ್ ಯಿಂದ ಆಯೋಜಿಸಿದ್ದ 'ಉತ್ಪಾದನಾ ಕ್ಷೇತ್ರದಲ್ಲಿ ವಿಶ್ವದರ್ಜೆಯ ಸಾಮರ್ಥ್ಯ ನಿರ್ಮಾಣ' ಕುರಿತ ಕಾರ್ಯಾಗಾರದಲ್ಲಿ ಕೇಳಿಬಂದಿತು.
ಬೆಂಗಳೂರು ಹೊರತುಪಡಿಸಿ ರಾಜ್ಯದ ಇತರ ಭಾಗಗಳಲ್ಲಿ ಕೈಗಾರಿಕೆಗಳು ಸ್ಥಾಪನೆಗೊಳ್ಳಬೇಕೆಂಬ ಸಲಹೆಯನ್ನು ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದ ಉದ್ದಿಮೆದಾರರು ನೀಡಿದರು.
ಉದ್ದಿಮೆದಾರ ಶ್ರೀನಿವಾಸ ಮಾತನಾಡಿ, ಸಾಕಷ್ಟು ಮೂಲ ಸೌಲಭ್ಯಗಳಿದ್ದರೂ ಹುಬ್ಬಳ್ಳಿ ಇದುವರೆಗೂ ಜಾಗತಿಕ ಮಟ್ಟದ ವಾಣಿಜ್ಯ ನಕಾಶೆಯಲ್ಲಿ ಗುರುತಿಸಿಕೊಂಡಿಲ್ಲ ಎಂದು ಖೇದ ವ್ಯಕ್ತಪಡಿಸಿದರು.
ಹುಬ್ಬಳ್ಳಿ ಮತ್ತು ಬೆಳಗಾವಿಯಲ್ಲಿ ವಿಮಾನ ನಿಲ್ದಾಣಗಳಿದ್ದು, ಸರ್ಕಾರ ಈ ನಗರಗಳತ್ತ ಕೈಗಾರಿಕೋದ್ಯಮಿಗಳನ್ನು ಆಕರ್ಷಿಸಲು ಗಮನ ಹರಿಸಬೇಕು ಎಂದ ಉದ್ಯಮಿ ಸಂಜಯ ಬೀಚು, ಮುಂದಿನ ಹತ್ತು ವರ್ಷಗಳಲ್ಲಿ ಈ ಎರಡೂ ಮಹಾನಗರಗಳು ಕೈಗಾರಿಕೆಗಳ ಅಭಿವೃದ್ಧಿಯತ್ತ ದಾಪುಗಾಲು ಹಾಕಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಉದ್ಯಮಿ ದಿನೇಶ ದಾದುಟೆ ಮಾತನಾಡಿ, ಹುಬ್ಬಳ್ಳಿ, ಬೆಳಗಾವಿ ಸೇರಿದಂತೆ ರಾಜ್ಯದ ಇತರೆಡೆಯೂ ಕೈಗಾರಿಕೆಗಳ ಸ್ಥಾಪನೆಗೆ ಸರ್ಕಾರ ಮುಂದಾಗಬೇಕು ಎಂದು ಆಗ್ರಹಿಸಿದರು.
ಟಾಟಾ ಸಮೂಹದ ಉಮಾಪತಿ ಮಾತನಾಡಿ, ರಾಷ್ಟ್ರೀಯ ಹೆದ್ದಾರಿಗಳ ಸಂಪರ್ಕ, ಉತ್ತಮ ರಸ್ತೆ, ನೀರಿನ ವ್ಯವಸ್ಥೆ, ಮಾನವ ಸಂಪನ್ಮೂಲ ಸೇರಿದಂತೆ ಇನ್ನಿತರ ಅಗತ್ಯ ಸೌಲಭ್ಯಗಳು ಉತ್ತರ ಕರ್ನಾಟಕದ ಬಹುತೇಕ ನಗರಗಳಲ್ಲಿವೆ. ಈ ನಗರಗಳಲ್ಲಿ ಕೈಗಾರಿಕೆಗಳ ಸ್ಥಾಪನೆ ಮಾಡುವ ಮೂಲಕ ಅಂತರಾಷ್ಟ್ರೀಯ ಮಟ್ಟದ ಉದ್ದಿಮೆದಾರರ ಗಮನ ಸೆಳೆಯುವ ಕೆಲಸವಾಗಬೇಕಿದೆ ಎಂದರು.
ಇದಕ್ಕೂ ಮೊದಲು ಮಾತನಾಡಿದ ರಾಜ್ಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರತ್ನಪ್ರಭಾ, ಕಳೆದ ಎರಡ್ಮೂರು ವರ್ಷಗಳಿಂದ ಕೈಗಾರಿಕೆಗಳಿಗೆ ನಿವೇಶನಗಳ ಹಂಚಿಕೆಯಾಗಿಲ್ಲ. ಬೆಂಗಳೂರು ಹೊರತುಪಡಿಸಿ ರಾಜ್ಯದ ಇತರೆಡೆ ಉದ್ಯೋಗ ಸೃಷ್ಟಿ, ಉತ್ಪಾದನೆಗೆ ಮುಂದಾಗುವ ಕೆಲಸವಾಗಬೇಕಿದೆ ಎಂದು ಹೇಳಿದರು.
ಹೈದರಾಬಾದ್ ಕರ್ನಾಟಕಕ್ಕೆ ವಿಶೇಷ ಸ್ಥಾನ ನೀಡಿದ್ದರೂ ಆ ಪ್ರದೇಶದಲ್ಲಿ ಸಾಕಷ್ಟು ಕೈಗಾರಿಕೆಗಳಿಲ್ಲ. ಅಲ್ಲಿಯೂ ನಿರುದ್ಯೋಗ ಸಮಸ್ಯೆ ಕಾಡುತ್ತಿದೆ. ವಿಮಾನ ನಿಲ್ದಾಣಗಳನ್ನು ಅಂತಾರಾಷ್ಟ್ರೀಯ ಗುಣಮಟ್ಟಕ್ಕೇರಿಸುವ, ಸಣ್ಣ ಬಂದರುಗಳನ್ನು ಅಭಿವೃದ್ಧಿಪಡಿಸುವಂಥ ಕಾರ್ಯಗಳಿಗೆ ಒತ್ತು ಕೊಡಬೇಕಿದೆ ಎಂದರು.
ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ಅಧ್ಯಕ್ಷ ವಸಂತ ಲದ್ವಾ ಮಾತನಾಡಿ, ಒಂದು ಕಾಲದಲ್ಲಿ ಹಲವಾರು ಕೈಗಾರಿಕೆಗಳಿದ್ದ ಹುಬ್ಬಳ್ಳಿಯಲ್ಲಿ ಇದೀಗ ಬೆರಳೆಣಿಕೆಯ ಕೈಗಾರಿಕೆಗಳು ಮಾತ್ರ ಉಳಿದುಕೊಂಡಿವೆ. ಬೆಂಗಳೂರಿನ ಮಾಹಿತಿ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಉತ್ತರ ಕರ್ನಾಟಕ ಭಾಗದ ಪ್ರತಿಶತ 40ಕ್ಕೂ ಹೆಚ್ಚು ಉದ್ಯೋಗಿಗಳಿದ್ದಾರೆ. ಉತ್ತರ ಕರ್ನಾಟಕದಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಬೇಕಾದ ಎಲ್ಲ ಸೌಕರ್ಯಗಳಿವೆ. ಸರ್ಕಾರ ಹುಬ್ಬಳ್ಳಿಯಲ್ಲಿಯೂ ವಿಶೇಷ ಆರ್ಥಿಕ ವಲಯ ಸ್ಥಾಪನೆಗೆ ಮುಂದಾಗಬೇಕು ಎಂದು ಆಗ್ರಹಿಸಿದರು.
ಉದ್ದಿಮೆದಾರರಾದ ಶ್ರೀಕೃಷ್ಣ ಕೇಳಕರ, ದಿನೇಶ ದಾದಟೆ ಮತ್ತಿತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

