ಚುನಾವಣೆ: ಪಕ್ಷಗಳ ಪದಾಧಿಕಾರಿಗಳ ಸಭೆ
ಕನ್ನಡಪ್ರಭ ವಾರ್ತೆ, ಧಾರವಾಡ, ಮಾ. 6
ಲೋಕಸಭೆ ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಧಾರವಾಡ ಲೋಕಸಭೆ ಕ್ಷೇತ್ರದ ವ್ಯಾಪ್ತಿಯ ರಾಜಕೀಯ ಪಕ್ಷಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳಿಗೆ ಚುನಾವಣಾ ನೀತಿ ಸಂಹಿತೆ ಮಾಹಿತಿ ಕುರಿತಾದ ಸಭೆ ಜಿಲ್ಲಾ ಚುನಾವಣಾಧಿಕಾರಿ ಸಮೀರ ಶುಕ್ಲ ಅಧ್ಯಕ್ಷತೆಯಲ್ಲಿ ನಡೆಯಿತು.
ಜಿಲ್ಲೆಯಲ್ಲಿ ಮಾ. 16 ರ ವರೆಗೆ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಪ್ರಕ್ರಿಯೆ ಜಾರಿಯಲ್ಲಿದ್ದು, ಹೆಸರು ಸೇರ್ಪಡೆಯಾಗಿರದಿದ್ದವರು ಕೂಡಲೇ ಅರ್ಜಿ ನಮೂನೆ ನಂ. 6 ರಲ್ಲಿ ಅರ್ಜಿ ಸಲ್ಲಿಸಬೇಕು. ಈ ಮಾಹಿತಿಯನ್ನು ಪಕ್ಷದ ಕಾರ್ಯಕರ್ತರಿಗೆ ಮನವರಿಕೆ ಮಾಡಿಕೊಟ್ಟು, ಹೆಸರು ಸೇರ್ಪಡೆಯಾಗದಿದ್ದವರು ಹೆಸರು ಸೇರ್ಪಡೆ ಮಾಡಿಕೊಳ್ಳಲು ನೆರವಾಗಬೇಕು ಎಂದು ಸಮೀರ ಶುಕ್ಲ ವಿನಂತಿಸಿದರು.
ಈ ಮುಂಚೆ ಭಾರತ ಚುನಾವಣಾ ಆಯೋಗದ ಮತದಾರರ ಗುರುತಿನ ಚೀಟಿ ಪಡೆದಿರುವವರ ಹೆಸರು ಮತದಾರರ ಪಟ್ಟಿಯಲ್ಲಿ ಇಲ್ಲದಿದ್ದರೆ ಅಂಥವರಿಗೆ ಮತ ಚಲಾಯಿಸಲು ಅವಕಾಶವಿಲ್ಲ. ಆದ್ದರಿಂದ ಕೂಡಲೇ ಹೆಸರು ಸೇರ್ಪಡೆಗೊಳಿಸಬೇಕು. ರಾಜಕೀಯ ಪಕ್ಷಗಳ ಮುಖಂಡರು ಲೋಕಸಭೆ ಕ್ಷೇತ್ರದಲ್ಲಿ ಪ್ರಚಾರಕ್ಕೆ ಬಂದರೆ ಅವರು ರಾಜ್ಯ ಅಥವಾ ರಾಷ್ಟ್ರೀಯ ಮಟ್ಟದ ನಾಯಕರಾಗಿದ್ದು, ಝಡ್ ಶ್ರೇಣಿಯ ಭದ್ರತೆ ಒದಗಿಸಬೇಕಾದವರಾಗಿದ್ದರೆ, ಅಂತವರಿಗೆ ಮಾತ್ರ ಸ್ಥಳೀಯ ಪ್ರವಾಸಿ ಮಂದಿರಗಳನ್ನು ರಕ್ಷಣಾ ವಲಯ ಎಂದು ಪರಿಗಣಿಸಿ ತಾತ್ಕಾಲಿಕ ತಂಗಲು ಅವಕಾಶ ನೀಡಲಾಗುವುದು ಎಂದರು.
ಮತದಾರರಿಗೆ ಆಮಿಷ ಒಡ್ಡುವ ಯಾವುದೇ ಸಾಮಗ್ರಿಗಳ ವಿತರಣೆ ಮತ್ತು ಭೋಜನ ವ್ಯವಸ್ಥೆಯನ್ನು ಮಾಡಬಾರದು ಎಂದು ತಿಳಿಸಿದ ಜಿಲ್ಲಾ ಚುನಾವಣಾಧಿಕಾರಿ, ಜಿಲ್ಲೆಗೆ ನೂತನ ಮತಯಂತ್ರಗಳ ಪೂರೈಕೆಯಾಗಿರುವುದರಿಂದ ಮತಯಂತ್ರಗಳಲ್ಲಿ ದೋಷ ಕಾಣಿಸುವ ಪ್ರಶ್ನೆ ಉದ್ಭವಿಸುವುದಿಲ್ಲ. ಮತಯಂತ್ರಗಳನ್ನು ಮೂರು ಹಂತಗಳಲ್ಲಿ ಪರೀಕ್ಷೆಗೆ ಒಳಪಡಿಸಲಾಗುತ್ತದೆ. ಮತ ಯಂತ್ರಗಳ ಪರಿಶೀಲನೆ ಸಂದರ್ಭದಲ್ಲಿ ರಾಜಕೀಯ ಪಕ್ಷಗಳ ಸದಸ್ಯರಿಗೆ ಆಹ್ವಾನವಿರುವುದರಿಂದ ಭಾಗವಹಿಸಬೇಕು ಎಂದು ಸಲಹೆ ಮಾಡಿದರು.
ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಈ ಸಂದರ್ಭದಲ್ಲಿ ಮಾತನಾಡಿ, ಮತದಾರರ ಪಟ್ಟಿ ಹಾಗೂ ಚೀಟಿಯಲ್ಲಿ ವ್ಯಕ್ತಿಯ ಹೆಸರು, ವಯಸ್ಸು ಹಾಗೂ ಭಾವಚಿತ್ರಗಳು ತಪ್ಪಾಗಿ ಮುದ್ರಣವಾಗದಂತೆ ಮುತುವರ್ಜಿ ವಹಿಸಬೇಕು ಎಂದು ಸಲಹೆ ನೀಡಿದರು. ಅಪರ ಜಿಲ್ಲಾಧಿಕಾರಿ ಶಿವಾನಂದ ಕಾಪಸೆ ಹಾಗೂ ಐಎಎಸ್ ಪ್ರೊಬೇಷನರಿ ಅಧಿಕಾರಿ ಚಾರುಲತಾ ಮತ್ತಿತರರು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

