ನೀತಿ ಸಂಹಿತೆ ಉಲ್ಲಂಘನೆ: ಲಿಂಗರಾಜಗೆ ನೋಟಿಸ್
ಧಾರವಾಡ: ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ ಬಿಜೆಪಿ ಮಹಾನಗರ ಜಿಲ್ಲಾಧ್ಯಕ್ಷ ಲಿಂಗರಾಜ ಪಾಟೀಲ ಅವರಿಗೆ ಧಾರವಾಡ ಲೋಕಸಭೆ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿಯೂ ಆಗಿರುವ ಮಹಾನಗರ ಪಾಲಿಕೆ ಆಯುಕ್ತ ರಮಣದೀಪ ಚೌಧರಿ ಮಂಗಳವಾರ ಮಧ್ಯಾಹ್ನ ಕಾರಣ ಕೇಳಿ ನೋಟಿಸ್ ನೀಡಿದ್ದಾರೆ. ಹುಬ್ಬಳ್ಳಿಯ ದೇಶಪಾಂಡೆ ನಗರದಲ್ಲಿರುವ ಶ್ರೀಕೃಷ್ಣ ಕಲ್ಯಾಣ ಮಂಟಪದಲ್ಲಿ ಸೋಮವಾರ ಬಿಜೆಪಿ ಧಾರವಾಡ ಲೋಕಸಭೆ ಕ್ಷೇತ್ರ ಚುನಾವಣಾ ಸಮಿತಿಯ ಕಾರ್ಯಾಗಾರ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರಿಗೆ ಸಾಮೂಹಿಕವಾಗಿ ಊಟದ ವ್ಯವಸ್ಥೆ ಮಾಡಲಾಗಿತ್ತು. ಬಿಜೆಪಿ ಕಾರ್ಯಾಗಾರ ಆಯೋಜಿಸುವ ಬಗ್ಗೆ ಹಾಗೂ ಕಾರ್ಯಾಗಾರದಲ್ಲಿ ಊಟದ ವ್ಯವಸ್ಥೆ ಮಾಡುವ ಬಗೆ ಚುನಾವಣಾ ಅಧಿಕಾರಿಗಳಿಂದ ಯಾವುದೇ ಅನುಮತಿ ಪಡೆದಿರಲಿಲ್ಲ. ಈ ಎರಡೂ ವಿಷಯಕ್ಕೆ ಸಂಬಂಧಿಸಿ ಬಿಜೆಪಿ ಮಹಾನಗರ ಜಿಲ್ಲಾಧ್ಯಕ್ಷರಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಲಾಗಿದೆ. ಕಾರ್ಯಾಗಾರದ ವಿಡಿಯೋ ಚಿತ್ರೀಕರಣ ಹಾಗೂ ಪತ್ರಿಕಾ ವರದಿಯನ್ನು ಆಧರಿಸಿ, ಈ ನೋಟಿಸ್ ನೀಡಲಾಗಿದೆ. ಮಾ. 12ರ ಮಧ್ಯಾಹ್ನ 3ರೊಳಗೆ ನೋಟಿಸ್ಗೆ ಸಮರ್ಪಕ ಉತ್ತರ ನೀಡುವಂತೆ ಚೌಧರಿ ತಿಳಿಸಿದ್ದಾರೆ. ಕಾರ್ಯಾಗಾರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ ಜೋಶಿ, ಮಾಜಿ ಸಚಿವ ಬಸವರಾಜ ಬೊಮ್ಮಾಯಿ, ಮಾಜಿ ಶಾಸಕರಾದ ಶಂಕರ ಪಾಟೀಲ ಮುನೇನಕೊಪ್ಪ, ಸೀಮಾ ಮಸೂತಿ, ವೀರಭದ್ರಪ್ಪ ಹಾಲಹರವಿ, ಮೋಹನ ಲಿಂಬಿಕಾಯಿ, ಅಶೋಕ ಕಾಟವೆ ಪಾಲ್ಗೊಂಡಿದ್ದರು. ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದ ಕಾರ್ಯಾಗಾರದಲ್ಲಿ ಸಾಮೂಹಿಕವಾಗಿ ಊಟದ ವ್ಯವಸ್ಥೆ ಮಾಡಲಾಗಿತ್ತು. ಈ ಕುರಿತು ಲಿಂಗರಾಜ ಪಾಟೀಲರು ಕನ್ನಡಪ್ರಭದೊಂದಿಗೆ ಮಾತನಾಡಿ, ಸಭೆ ಮಾಡುವ ಕುರಿತು ಅಪರ ಜಿಲ್ಲಾಧಿಕಾರಿ ಶಿವಾನಂದ ಕಾಪಸೆ ಅವರಿಗೆ ಮೌಖಿಕವಾಗಿ ಮಾತನಾಡಿದ್ದು, ನಾಮಪತ್ರ ಸಲ್ಲಿಸಿದ ದಿನದಿಂದ ಪ್ರತಿ ಕಾರ್ಯಕ್ಕೂ ಪರವಾನಗಿ ಪಡೆಯಬೇಕೆಂದು ಹೇಳಿದ್ದರು. ಮಾ. 7ರಂದು ವಲಯ ಅಧಿಕಾರಿಗಳಿಗೆ ಪತ್ರ ನೀಡಿದ್ದೆ. ಈಗ ನೋಟಿಸ್ ಬಂದಿದ್ದು, ಬುಧವಾರ ಮಧ್ಯಾಹ್ನದೊಳಗೆ ಸ್ಪಷ್ಟನೆ ನೀಡುತ್ತೇನೆ ಎಂದರು.
ಅತ್ಯಾಚಾರ: ಆರೋಪಿ ಸೆರೆ
ಜೋಯಿಡಾ: ತಾಲೂಕಿನ ಜಗಲಬೇಟನ ಸಿದ್ದಿವಿನಾಯಕ ಸೇವಾ ಸಮಿತಿ ಅಧ್ಯಕ್ಷ ಹಾಗೂ ಪ್ರಾಥಮಿಕ ಶಾಲೆಯ ಎಸ್ಡಿಎಂಸಿ ಅಧ್ಯಕ್ಷನಾಗಿದ್ದ ಪ್ರಶಾಂತ ಸುರೇಶ ಸಿರೋಡ್ಕರ್ (39) ಪಕ್ಕದ ಪ್ರೌಢಶಾಲೆಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಪ್ರಕರಣ ದಾಖಲಾಗಿದ್ದು, ರಾಮನಗರ ಪೊಲೀಸ್ ಠಾಣೆ ಪಿಎಸ್ಐ ಮಂಜುನಾಥ ನಾಯಕ ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಅತ್ಯಾಚಾರಕ್ಕೊಳಗಾದ ಯುವತಿ ಜಗಲಬೇಟ ಪ್ರೌಢಶಾಲೆ 9ನೇ ತರಗತಿಯಲ್ಲಿ ಓದುತ್ತಿದ್ದು, ಅನೇಕ ದಿನಗಳಿಂದ ಈ ಇಬ್ಬರ ನಡುವೆ ಪರಸ್ಪರ ಸಂಬಂಧ ಇತ್ತೆನ್ನಲಾಗಿದೆ. ಆರೋಪಿ ಈಗಾಗಲೇ ಮದುವೆಯಾಗಿ 3 ಮಕ್ಕಳ ತಂದೆಯಾಗಿದ್ದರೂ ಈ ವಿದ್ಯಾರ್ಥಿನಿಯ ಸಲಿಗೆಯನ್ನು ದುರುಪಯೋಗ ಮಾಡಿಕೊಂಡಿದ್ದಾನೆ. ಇದು ಜೋಯಿಡಾ ತಾಲೂಕಿನಾದ್ಯಂತ ಪಾಲಕ ವೃಂದದಲ್ಲಿ ಭಯದ ವಾತಾವರಣ ಸೃಷ್ಟಿಸಿದೆ.
ಪರೀಕ್ಷೆ: ನಿಷೇಧಾಜ್ಞೆ ಜಾರಿ
ಕೊಪ್ಪಳ: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಮಾ. 12ರಿಂದ 27ರ ವರೆಗೆ ಜಿಲ್ಲೆಯಲ್ಲಿ ಒಟ್ಟು 13 ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆ ಸುಗಮವಾಗಿ ನಡೆಯಲು ಅನುಕೂಲವಾಗಲು ಈ ಅವಧಿಯಲ್ಲಿ ಪರೀಕ್ಷಾ ಕೇಂದ್ರದ 200 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಅಪರ ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ ಆದೇಶ ಹೊರಡಿಸಿದ್ದಾರೆ. ಮಾ. 12ರಿಂದ ಮಾ. 27ರ ವರೆಗೆ ಪರೀಕ್ಷೆ ನಡೆಸಲಾಗುತ್ತಿದ್ದು, ಅಂದು ಬೆಳಗ್ಗೆ 9ರಿಂದ ಮಧ್ಯಾಹ್ನ 1ರ ವರೆಗೆ ಭಾರತೀಯ ದಂಡ ಪ್ರಕ್ರಿಯೆ ಸಂಹಿತೆ 144 ಕಲಂನಡಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಪರೀಕ್ಷಾ ಕೇಂದ್ರದ 200 ಮೀ. ವ್ಯಾಪ್ತಿಯಲ್ಲಿ ಪರೀಕ್ಷಾ ಸಮಯದಲ್ಲಿ ಎಸ್ಟಿಡಿ, ಮೊಬೈಲ್, ಪೇಜರ್, ಜೆರಾಕ್ಸ್, ಟೈಪಿಂಗ್ ಮುಂತಾದ ಕೇಂದ್ರಗಳನ್ನು ನಿಷೇಧಿಸಿದೆ. ಪರೀಕ್ಷಾ ಕೇಂದ್ರಗಳಲ್ಲಿ ಅವ್ಯವಹಾರ ನಡೆಯದಂತೆ, ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ನಿಷೇಧಾಜ್ಞೆ ಜಾರಿಗೊಳಿಸಿದೆ. ಜನತೆ ಮದುವೆ, ಶವ ಸಂಸ್ಕಾರ ಹಾಗೂ ಇತರೆ ಧಾರ್ಮಿಕ ಕಾರ್ಯಕ್ರಮಗಳಿಗೆ ಈ ನಿಷೇಧಾಜ್ಞೆ ಅನ್ವಯವಾಗುವುದಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

