ಧಾರವಾಡ

ಅನ್ನಭಾಗ್ಯಕ್ಕೆ ಕನ್ನ: ಸರ್ಕಾರ ಮೌನ

Published On :

ಕನ್ನಡಪ್ರಭ ವಾರ್ತೆ, ಗದಗ, ಮಾ. 11
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಹತ್ವಾಕಾಂಕ್ಷಿ ಯೋಜನೆ 'ಅನ್ನಭಾಗ್ಯ'ದಲ್ಲಿ ಭಾರಿ ಅಕ್ರಮ ನಡೆದಿದ್ದು, ಈ ಬಗ್ಗೆ ಲೋಕಾಯುಕ್ತ ನ್ಯಾಯಮೂರ್ತಿ ವೈ. ಭಾಸ್ಕರಾವ್ ಹೇಳಿಕೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ವಿರೋಧ ಪಕ್ಷದ ನಾಯಕ ಜಗದೀಶ ಶೆಟ್ಟರ್ ಹೇಳಿದರು.
ಅವರು ಮಂಗಳವಾರ ಗದಗ ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಒಂದು ತಿಂಗಳಲ್ಲಿ ರು. 1.25 ಕೋಟಿ ಅಕ್ರಮ ನಡೆದಿದೆ ಎಂದರೆ, ಈ ಯೋಜನೆ ಪ್ರಾರಂಭವಾದಾಗಿನಿಂದ ಸಾಕಷ್ಟು ಅಕ್ರಮ ನಡೆದಿರುವ ಶಂಕೆ ಇದೆ. ಈ ಬಗ್ಗೆ ಸರ್ಕಾರ ಕೂಡಲೇ ತನಿಖೆ ನಡೆಸಬೇಕು. ತರಾತುರಿಯಲ್ಲಿ ಯೋಜನೆ ಜಾರಿ ಮಾಡುವಾಗ ಅಗತ್ಯ ಮುನ್ನೆಚ್ಚರಿಕೆ ಕೈಗೊಳ್ಳದಿರುವುದೇ ಈ ಅಕ್ರಮಗಳಿಗೆ ಕಾರಣವಾಗಿದೆ. ಬಡವರಿಗೆ ನೀಡುತ್ತಿರುವ ಅಕ್ಕಿ ಮಧ್ಯವರ್ತಿಗಳು ಹಾಗೂ ಕೆಲ ಭ್ರಷ್ಟ ಅಧಿಕಾರಿಗಳ ಪಾಲಾಗುತ್ತಿದೆ. ಈ ಬಗ್ಗೆ ನಾನು ವಿಧಾನಸಭೆಯಲ್ಲೂ ಹಲವಾರು ಬಾರಿ ಹೇಳಿದ್ದೇನೆ. ಆದರೆ, ಸೋಮವಾರ ಲೋಕಾಯುಕ್ತ ನಾಯ್ಯಮೂರ್ತಿ ವೈ. ಭಾಸ್ಕರ ರಾವ್ ಅಂಕಿ-ಅಂಶಗಳ ಸಮೇತ ತಿಳಿಸಿದ್ದಾರೆ. ಇನ್ನಾದರೂ ಸರ್ಕಾರ ಗಮನ ನೀಡಲಿ ಎಂದು ಆಗ್ರಹಿಸಿದರು.
ಎಲ್ಲರೂ ಬಡವರೇ?: ಸರ್ಕಾರದ ಮಾಹಿತಿ ಆಧಾರದಲ್ಲಿ ರಾಜ್ಯದಲ್ಲಿ 96 ಲಕ್ಷ ಬಿಪಿಎಲ್ ಕಾರ್ಡ್ ವಿತರಣೆಯಾಗಿದೆ. ಇನ್ನು 36 ಲಕ್ಷ ಕುಟುಂಬಗಳು ಬಿಪಿಎಲ್ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿವೆ. ಗಮನಿಸಬೇಕಾದ ಅಂಶವೆಂದರೆ ರಾಜ್ಯದಲ್ಲಿ 1.32 ಕೋಟಿ ಕುಟುಂಬಗಳಿವೆ. ವಿತರಣೆಯಾಗಿರುವ ಮತ್ತು ಕಾರ್ಡ್‌ಗಾಗಿ ಅರ್ಜಿ ಸಲ್ಲಿಸಿದವರ ಸಂಖ್ಯೆ ನೋಡಿದರೆ, ರಾಜ್ಯದಲ್ಲಿರುವ ಎಲ್ಲರೂ ಬಡವರೇ ಎನ್ನುವ ಪ್ರಶ್ನೆ ಎದುರಾಗುತ್ತದೆ. ಅರ್ಹರಲ್ಲದವರಿಗೂ ಬಿಪಿಎಲ್ ಕಾರ್ಡ್ ನೀಡುವ ಹಗರಣದಲ್ಲಿ ಪಾಲ್ಗೊಂಡ ಅಧಿಕಾರಿಗಳ ಬಗ್ಗೆ ಸಮಗ್ರ ತನಿಖೆ ನಡೆಸಬೇಕೆಂದು ಒತ್ತಾಯಿಸಿದರು.
ಕೇಂದ್ರ ರಾಜ್ಯ ಸರ್ಕಾರ ವಿಫಲ: ಕೇಂದ್ರದ ಯುಪಿಎ ಹಾಗೂ ರಾಜ್ಯದ ಕಾಂಗ್ರೆಸ್ ಸರ್ಕಾರ ಆಡಳಿತ ನಡೆಸುವಲ್ಲಿ ಸಂಪೂರ್ಣ ವಿಫಲವಾಗಿವೆ. ಕೇಂದ್ರ ಸರ್ಕಾರ ತನ್ನ ಅವಧಿಯಲ್ಲಿ ಭಾರಿ ಭ್ರಷ್ಟಾಚಾರ ನಡೆಸಿ ದೇಶದ ಮಾನ ಹರಾಜು ಹಾಕಿದೆ. ಈ ಲೋಕಸಭಾ ಚುನಾವಣೆಯಲ್ಲಿ ಜನತೆ ಇವರಿಗೆ ತಕ್ಕ ಪಾಠ ಕಲಿಸಲಿದ್ದಾರೆ. ರಾಜ್ಯ ಹಾಗೂ ದೇಶಾದ್ಯಂತ ನರೇಂದ್ರ ಮೋದಿ ಅಲೆ ಜೋರಾಗಿದ್ದು, ಕೇಂದ್ರದಲ್ಲಿ ಯುಪಿಎ ಸರ್ಕಾರ ಅಧಿಕಾರಕ್ಕೆ ಬರಲಿದೆ. ರಾಜ್ಯದ 20ಕ್ಕೂ ಹೆಚ್ಚಿನ ಲೋಕಸಭಾ ಕ್ಷೇತ್ರಗಳಲ್ಲಿ ನಾವು ಗೆಲುವ ಸಾಧಿಸಲಿದ್ದೇವೆ ಎಂದು ಶೆಟ್ಟರ್ ವಿಶ್ವಾಸ ವ್ಯಕ್ತಪಡಿಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಕಳಕಪ್ಪ ಬಂಡಿ, ಬಿಜೆಪಿ ಅಭ್ಯರ್ಥಿ ಶಿವಕುಮಾರ ಉದಾಸಿ, ಭೋಜರಾಜ ಕರೂದಿ, ಮಾಜಿ ಸಚಿವ ಸಿ.ಎಂ. ಉದಾಸಿ, ಎಂ.ಎಸ್. ಕರಿಗೌಡ್ರ, ಮಾಜಿ ಶಾಸಕ ರಾಮಣ್ಣ ಲಮಾಣಿ ಸುದ್ದಿಗೋಷ್ಠಿಯಲ್ಲಿದ್ದರು.
ರೈತರಿಗೆ ನೆರವಿಗೆ ಧಾವಿಸಿ: ಉತ್ತರ ಕರ್ನಾಟಕದ 10ಕ್ಕೂ ಹೆಚ್ಚಿನ ಜಿಲ್ಲೆಗಳಲ್ಲಿ ವಾರದಿಂದ ಸುರಿಯುತ್ತಿರುವ ಆಲಿಕಲ್ಲು ಮಳೆಯಿಂದ ನೂರಾರು ಕೋಟಿ ಬೆಳೆಹಾನಿಯಾಗಿದೆ. ತೋಟಗಾರಿಕೆ ಬೆಳೆಗಳಿಗೆ ಸಾಕಷ್ಟು ಹಾನಿ ಸಂಭವಿಸಿದೆ. 20ಕ್ಕೂ ಹೆಚ್ಚು ಜೀವಹಾನಿಯಾಗಿದೆ. ಅಪಾರ ಪ್ರಮಾಣದ ಆಸ್ತಿ ನಷ್ಟವಾಗಿದೆ. ಈ ಬಗ್ಗೆ ಕೂಡಲೇ ಸರ್ಕಾರ ಬೆಳೆಹಾನಿಯ ಕುರಿತು ಸಮೀಕ್ಷೆ ನಡೆಸಬೇಕು. ರೈತರಿಗೆ ಪರಿಹಾರ ನೀಡಬೇಕು. ಚುನಾವಣೆಯ ನೆಪ ಹೇಳಿ ಸರ್ಕಾರ ತೆಪ್ಪಗೆ ಕುಳಿತರೆ ಸಾಲದು, ತಕ್ಷಣ ನೊಂದ ರೈತರ ನೆರವಿಗೆ ಧಾವಿಸಿ ಎಂದು ಸಿಎಂ ಸಿದ್ದರಾಯಮ್ಯ ಅವರಿಗೆ ಪತ್ರ ಬರೆದಿದ್ದಾಗಿ ಮಾಜಿ ಸಿಎಂ ಜಗದೀಶ ಶೆಟ್ಟರ್ ಹೇಳಿದರು.
ನಾಳೆ ಅಭ್ಯರ್ಥಿಗಳ ಪಟ್ಟಿ: ರಾಜ್ಯದ ಇನ್ನುಳಿದ ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಮಾ. 13ರಂದು ಬಿಡುಗಡೆ ಮಾಡಲಾಗುವುದು. ಅಂದು ಪಕ್ಷದ ಸಭೆ ನಡೆಯಲಿದ್ದು, ಈ ಬಗ್ಗೆ ಅಂತಿಮ ತೀರ್ಮಾನ ಆಗಲಿದೆ. ಬಿಎಸ್‌ವೈ ಅಸಮಾಧಾನದ ಪತ್ರದ ಬಗ್ಗೆ ಉತ್ತರಿಸಿದ ಜಗದೀಶ ಶೆಟ್ಟರ್, ಅಂತಹ ಯಾವುದೇ ತೊಂದರೆ ಇಲ್ಲ. ಚುನಾವಣೆ ವೇಳೆ ಇಂತಹ ಸಣ್ಣಪುಟ್ಟ ಗೊಂದಲಗಳು ಸಹಜ. ಅದನ್ನು ಪಕ್ಷದ ವರಿಷ್ಠರು ನಿವಾರಿಸುತ್ತಾರೆ ಎಂದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.