ಗದಗ

ಅಧಿಕಾರಿಗಳು ಪಕ್ಷಗಳ ಪರ ನಿಂತರೆ ಕಠಿಣ ಕ್ರಮ

Published On :

ಕನ್ನಡಪ್ರಭ ವಾರ್ತೆ, ಶಿರಹಟ್ಟಿ, ಏ. 2
ಹಾಲಿ ವಿಧಾನಸಭಾ ಚುನಾವಣೆಯಲ್ಲಿ ಅಧಿಕಾರಿಗಳು ಯಾವುದೇ ರಾಜಕೀಯ ಪಕ್ಷಗಳ ಪರವಾಗಿ ಕಾರ್ಯ ಮಾಡಿದರೆ ಅವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾ ಅಧಿಕಾರಿ ಪಾಂಡುರಂಗ ನಾಯಕ ಎಚ್ಚರಿಸಿದ್ದಾರೆ.
ಅವರು ಮಂಗಳವಾರ ಪಟ್ಟಣದ ಫಕೀರೇಶ್ವರ ಕಲ್ಯಾಣ ಮಂಟಪದಲ್ಲಿ ಜಿಲ್ಲಾ ಚುನಾವಣಾ ಅಧಿಕಾರಿಗಳು, ಜಿಲ್ಲಾ ಆಡಳಿತದ ವತಿಯಿಂದ ಜರುಗಿದ ವ್ಯವಸ್ಥಿತ ಮತದಾರರ ಶಿಕ್ಷಣ ಹಾಗೂ ಮತದಾನದಲ್ಲಿ ಭಾಗವಹಿಸುವ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಗಳು, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರಿಗೆ ಮತ್ತು ಆರೋಗ್ಯ ಸಹಾಯಕಿಯರಿಗೆ ನಡೆದ ತರಬೇತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಚುನಾವಣಾ ನೀತಿ ಸಂಹಿತೆ ಈಗಾಗಲೇ ಜಾರಿಯಲ್ಲಿದ್ದು, ಅದರ ಪ್ರಕಾರ ನೀತಿ, ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಸೂಚಿಸಲಾಗಿದೆ. ಶಿರಹಟ್ಟಿ ಮೀಸಲು ವಿಧಾನಸಭಾ ಮತಕ್ಷೇತ್ರ ವ್ಯಾಪ್ತಿಯಲ್ಲಿ ಈಗಾಗಲೇ 20 ಚುನಾವಣಾ ಅಧಿಕಾರಿಗಳು ಹಾಗೂ ಸಹಾಯಕ ಚುನಾವಣಾ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಎಲ್ಲರಿಗೂ ಸಮಾನ ಅವಕಾಶಗಳಿದ್ದು, ಚುನಾವಣಾ ಪ್ರಕ್ರಿಯೆ ಸುಗಮವಾಗಿ ನಡೆಯಲು ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಕ್ರಮ ಕೈಗೊಳ್ಳಬೇಕು.
ಅನುಮತಿ ಪಡೆಯಬೇಕು: ಯಾವುದೇ ಆಸೆ, ಆಮಿಷಗಳಿಗೆ ಬಲಿಯಾಗದೇ, ಒತ್ತಡಕ್ಕೆ ಮಣಿಯದೇ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಪ್ರತಿಯೊಬ್ಬರೂ ಸರಿಯಾದ ವ್ಯಕ್ತಿಗೆ ಮತ ನೀಡಬೇಕು. ಗ್ರಾಮ ವ್ಯಾಪ್ತಿಗಳಲ್ಲಿ ರಾಜಕೀಯ ವ್ಯಕ್ತಿಗಳ ಭಾವಚಿತ್ರ, ಭಿತ್ತಿಪತ್ರ ಮೊದಲಾದವುಗಳನ್ನು ಪ್ರಕಟಿಸುವ ಪೂರ್ವದಲ್ಲಿ ಕಡ್ಡಾಯವಾಗಿ ಅನುಮತಿ ಪಡೆಯಬೇಕು. ಈ ಬಾರಿ ಪ್ರತಿಯೊಬ್ಬ ಮತದಾರರಿಗೂ ಅಧಿಕಾರಿಗಳು ಮನೆಮನೆಗೆ ತೆರಳಿ ಭಾವಚಿತ್ರ ವಿತರಿಸಲಿದ್ದಾರೆ ಎಂದರು.
ಜಿಪಂ ಸಿಇಓ ಅಧಿಕಾರಿ ವೀರಣ್ಣ ತುರಮರಿ ಹಾಗೂ ಶಿರಹಟ್ಟಿ ಮೀಸಲು ಮತಕ್ಷೇತ್ರದ ಚುನಾವಣಾ ಅಧಿಕಾರಿ ಟಿ. ದಿನೇಶ ಮಾತನಾಡಿ, ಚುನಾವಣೆಗೆ ಸಂಬಂಧಿಸಿದ ಅಧಿಕಾರಿಗಳ ಅನುಮತಿ ಇಲ್ಲದೇ ರಾಜಕೀಯ ಪಕ್ಷಗಳ ಮುಖಂಡರು ಸಭೆ ಸಮಾರಂಭಗಳನ್ನು ನಡೆಸಿದಲ್ಲಿ ಕೂಡಲೇ ಅಧಿಕಾರಿಗಳ ಗಮನಕ್ಕೆ ತರುವಂತೆ ತಿಳಿಸಿದರು. ಮತದಾನ ಕಡಿಮೆಯಾದ ಪ್ರದೇಶದಲ್ಲಿ ಪ್ರತಿಯೊಬ್ಬರೂ ಮತದಾನದಲ್ಲಿ ಭಾಗವಹಿಸುವಂತೆ ಪ್ರೆರೇಪಿಸಬೇಕು.
ದೇವಸ್ಥಾನಗಳು, ಮಸೀದಿ, ಚರ್ಚ್ಗಳಲ್ಲಿ ರಾಜಕೀಯ ಸಭೆ ಸಮಾರಂಭ ನಡೆಸಲು ಅವಕಾಶಗಳಿರುವುದಿಲ್ಲ. ಇಂತಹ ವ್ಯವಸ್ಥೆ ಕಂಡುಬಂದಲ್ಲಿ ದೂರು ಸಲ್ಲಿಸುವಂತೆ ತಿಳಿಸಿದರು. 18 ವರ್ಷ ತುಂಬಿದ ಯುವಕ, ಯುವತಿಯರ ಮತದಾರರ ಯಾದಿಯಲ್ಲಿ ಹೆಸರು ಸೇರ್ಪಡೆಗೆ ಏ. 7ರ ವರೆಗೆ ಅವಕಾಶಗಳಿದ್ದು, ಇದರ ಸದುಪಯೋಗ ಪಡೆದುಕೊಳ್ಳುವಂತೆ ಸೂಚಿಸಿದರು. ಈಗಾಗಲೇ ಸಹಾಯಕ ಚುನಾವಣಾ ಅಧಿಕಾರಿಗಳು ತಿಳಿಸಿದಂತೆ 1506 ಹೊಸದಾಗಿ ಸೇರ್ಪಡೆ ಅರ್ಜಿಗಳು ಬಂದಿದ್ದು, ನಿಗದಿತ ಸಮಯದಲ್ಲಿ ಅವರಿಗೆ ಗುರುತಿನ ಚೀಟಿ ನೀಡುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ತಹಸೀಲ್ದಾರ್ ಹಾಗೂ ಸಹಾಯಕ ಚುನಾವಣಾ ಅಧಿಕಾರಿ ಆರ್.ಡಿ. ಉಪ್ಪಿನ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ವೈ.ಎಲ್. ಹಂಪಣ್ಣ, ಶಿಶು ಅಭಿವೃದ್ಧಿ ಇಲಾಖೆ ಅಧಿಕಾರಿ ಸರಸ್ವತಿ ಹೊನ್ನೇಗೌಡರ, ಬಿ.ಎಸ್. ಭಜಂತ್ರಿ ಮುಂತಾದವರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.