ಗದಗ

ಶಿರಹಟ್ಟಿ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಭಿನ್ನಮತ

Published On :

 ಶಿವಕುಮಾರ ಕುಷ್ಟಗಿ
ಗದಗ: ಶಿರಹಟ್ಟಿ ಮೀಸಲು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಹಂಚಿಕೆ ಮೊದಲಿನಿಂದಲೂ ತೀವ್ರ ಗೊಂದಲಕ್ಕೆ ಕಾರಣವಾಗಿತ್ತು. ಯಾಕೆಂದರೆ 18ಕ್ಕೂ ಹೆಚ್ಚು ಜನರು ಟಿಕೆಟ್‌ಗಾಗಿ ಅರ್ಜಿ ಸಲ್ಲಿಸಿದ ವೇಳೆಯಲ್ಲಿಯೇ ಪಕ್ಷದ ನಾಯಕರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿತ್ತು. ಆದರೆ ಈಗ ಕಾಂಗ್ರೆಸ್ ಪಕ್ಷ ರಾಮಕೃಷ್ಣ ದೊಡ್ಡಮನಿಯವರಿಗೆ ಮಣೆ ಹಾಕಿದ್ದು, ಶಿರಹಟ್ಟಿ ಭಾಗದ ಕಾಂಗ್ರೆಸ್ ಮುಖಂಡರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ.
ಬಹಿರಂಗ ಆಕ್ರೋಶ: ರಾಮಕೃಷ್ಣ ದೊಡ್ಡಮನಿ ತಮ್ಮ ರಾಜಕೀಯ ಜೀವನದಲ್ಲಿ ಸಾಕಷ್ಟು ಬಾರಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದಾರೆ.
ಜುಲೈ 10, 2009 ರಂದು ಮುಂಡರಗಿ ಪುರಸಭಾ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಯ ವೇಳೆಯಲ್ಲಿ ಬಹಿರಂಗವಾಗಿಯೇ ಬಿಜೆಪಿಯನ್ನು ಬೆಂಬಲಿಸಿದ್ದಾರೆ. ಪಕ್ಷದ ವಿಪ್ ಉಲ್ಲಂಘಿಸಿದ್ದಾರೆ. ಇವರ ಸದಸ್ಯತ್ವ ರದ್ದುಗೊಳಿಸಬೇಕೆಂದು ಅಂದಿನ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ. ಎಂ.ಎಲ್. ಬುರಬುರೆ ಜಿಲ್ಲಾಧಿಕಾರಿಗೆ ದೂರು ನೀಡಿದ್ದರು. (ಪತ್ರ ಸಂಖ್ಯೆ ಮೀಸಲೇನಿಯಸ್ ಎಪಿ-2ಎ 2009-10) ಪಕ್ಷದ ವಿರುದ್ಧ ಬಂಡಾಯದ ಕೆಲಸ ಮಾಡಿದ್ದ ರಾಮಕೃಷ್ಣ ದೊಡ್ಡಮನಿ ಅವರಿಗೆ ಟಿಕೆಟ್ ನೀಡಿರುವುದು ಸಹಜವಾಗಿ ಕಾರ್ಯಕರ್ತರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.
ಗಂಭೀರ ಆರೋಪ: ಪಕ್ಷದ ವರಿಷ್ಠರು ಟಿಕೆಟ್ ನೀಡುವ ಸಂದರ್ಭದಲ್ಲಿ ಯಾವುದೇ ನಿಯಮಗಳನ್ನು ಪಾಲಿಸಿಲ್ಲ. ಪಕ್ಷ ವಿರೋಧಿ ಚಟುವಟಿಕೆ ಮಾಡಿದವರಿಗೆ ಟಿಕೆಟ್ ನೀಡುವುದಿಲ್ಲವೆಂದು ಹೇಳಿದ್ದರು. ಆದರೆ, ಈಗ ರಾಮಕೃಷ್ಣ ದೊಡ್ಡಮನಿ ಅವರಿಗೆ ಟಿಕೆಟ್ ನೀಡಿದ್ದು ನಮಗೆಲ್ಲ ತೀವ್ರ ನೋವುಂಟು ಮಾಡಿದೆ. ಅವರು ಮೊದಲು ಬಿಎಸ್ಪಿ ಜಿಲ್ಲಾ ಅಧ್ಯಕ್ಷರಾಗಿ, ನಂತರ ಕಾಂಗ್ರೆಸ್ ಪಕ್ಷಕ್ಕೆ ಬಂದಿದ್ದಾರೆ. ಇವರ ಹೆಸರು ಸಂಭವನೀಯರ ಪಟ್ಟಿಯಲ್ಲಿದೆ. ಪಕ್ಷವು ಇವರಿಗೆ ಟಿಕೆಟ್ ನೀಡಿದಲ್ಲಿ ಶಿರಹಟ್ಟಿ ಭಾಗದಲ್ಲಿನ ನೈಜ ಕಾಂಗ್ರೆಸ್ ಕಾರ್ಯಕರ್ತರು ಪಕ್ಷದಿಂದ ದೂರವಾಗುವ ಸಾಧ್ಯತೆ ಇದೆ ಎಂದು ಕಾರ್ಯಕರ್ತರಾದ ವಿ.ಆರ್. ಪೂಜಾರ, ಶಂಕರಗುರು ಬಿಳಿಮಗ್ಗದ, ಡಿ.ಎಂ. ಮುಂದಿನಮನಿ, ಸಿ.ಜೆ. ರಾಠೋಡ, ಮಹಾಂತೇಶ ರಾಠೋಡ, ಎಚ್.ಡಿ. ಲಮಾಣಿ, ಡಿ.ಎಂ. ಮುಂದಿನಮನಿ, ಎಂ.ಪಿ. ಲಮಾಣಿ ಮುಂತಾದವರು ತಮ್ಮ ಅಸಮಾಧಾನ ಹೊರಹಾಕಿದ್ದಾರೆ.
ಭುಗಿಲೆದ್ದ ಭಿನ್ನಮತ: ಕಾಂಗ್ರೆಸ್ ಟಿಕೆಟ್ ಹಂಚಿಕೆಯಲ್ಲಿ ಉಂಟಾಗಿರುವ ಗೊಂದಲದಿಂದಾಗಿ ಪಕ್ಷದಲ್ಲಿ ಭಿನ್ನಮತ ಹೊಗೆಯಾಡುತ್ತಿದೆ.
ಮಂಗಳವಾರ ಗದಗನಲ್ಲಿ ಏರ್ಪಡಿಸಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಹಲವಾರು ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ರಾಮಕೃಷ್ಣ ದೊಡ್ಡಮನಿ ಅವರಿಗೆ ಟಿಕೆಟ್ ನೀಡುವ ಪ್ರಯತ್ನದಲ್ಲಿರುವ ಪಕ್ಷದ ವರಿಷ್ಠರ ವಿರುದ್ಧ ಬಹಿರಂಗವಾಗಿಯೇ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಅವರಿಗೆ ಟಿಕೆಟ್ ನೀಡಿದಲ್ಲಿ ಇನ್ನಷ್ಟು ಭಿನ್ನಮತ ಉಲ್ಭಣವಾಗುವ ಸಾಧ್ಯತೆ ನಿಚ್ಚಳವಾಗಿದೆ.

ನಾನು ಕಳೆದ ಹಲವಾರು ವರ್ಷಗಳಿಂದ ಪಕ್ಷಕ್ಕಾಗಿ ದುಡಿದಿದ್ದೇನೆ. ಟಿಕೆಟ್ ನೀಡುವಂತೆ ಪಕ್ಷದ ವರಿಷ್ಠರಿಗೆ ಅರ್ಜಿ ಸಲ್ಲಿಸಿದ್ದೇನೆ. ಶಿರಹಟ್ಟಿ ಭಾಗದ ಹಲವಾರು ಜನರು ನನ್ನ ಮೇಲೆ ವಿಶ್ವಾಸ ವ್ಯಕ್ತ ಪಡಿಸುತ್ತಿದ್ದಾರೆ. ಆದರೆ, ನಾನು ಈಗಲೂ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿದ್ದು, ನನಗೇ ಟಿಕೆಟ್ ನೀಡಬೇಕು ಎನ್ನುವುದು ಶಿರಹಟ್ಟಿ ಭಾಗದ ಕಾರ್ಯಕರ್ತರ ಅಭಿಪ್ರಾಯವಾಗಿದೆ. ಪಕ್ಷದ ವರಿಷ್ಠರು ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೆ ಕಾದು ನೋಡಬೇಕು.
ಟ ಭೀಮ್‌ಸಿಂಗ್ ರಾಠೋಡ
ಶಿರಹಟ್ಟಿ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ


ನಿಷ್ಠಾವಂತರಿಗೆ ಟಿಕೆಟ್ ನೀಡಿ
ಕಾಂಗ್ರೆಸ್ ಪಕ್ಷದಲ್ಲಿ ಕಳೆದ ಹಲವಾರು ವರ್ಷಗಳಿಂದ ನಿಷ್ಠಾವಂತರಾಗಿ ಕೆಲಸ ಮಾಡಿದ ಹಲವಾರು ಜನರಿದ್ದಾರೆ. ಟಿಕೆಟ್ ನೀಡುವಂತೆ 18 ಜನರು ಅರ್ಜಿಸಲ್ಲಿಸಿದ್ದು, ಅವರಲ್ಲಿ ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ದುಡಿದವರಿಗೆ ಟಿಕೆಟ್ ನೀಡಬೇಕು. ಪಕ್ಷ ವಿರೋಧಿ ಕಾರ್ಯದಲ್ಲಿ ಭಾಗಿಯಾದವರಿಗೆ ಯಾವುದೇ ಕಾರಣಕ್ಕೂ ಟಿಕೆಟ್ ನೀಡಬೇಡಿ. ಒಂದು ವೇಳೆ ಪಕ್ಷವು ಇದೇ ಪ್ರವೃತ್ತಿಯನ್ನು ಮುಂದುವರಿಸಿದಲ್ಲಿ ಶಿರಹಟ್ಟಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಚುನಾವಣೆಯಲ್ಲಿ ಹಿನ್ನಡೆಯಾಗುವ ಸಾಧ್ಯತೆ ಇದೆ ಎಂದು ಹಲವಾರು ಕಾರ್ಯಕರ್ತರು 'ಕನ್ನಡಪ್ರಭ'ಕ್ಕೆ ತಮ್ಮ ಅಭಿಪ್ರಾಯ ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.