ಎಚ್ಕೆ, ಬಿದರೂರ, ಸಂಕಣ್ಣವರ ನಾಮಪತ್ರ ಸಲ್ಲಿಕೆ
ಕನ್ನಡಪ್ರಭ ವಾರ್ತೆ, ಗದಗ, ಏ. 15
ಶುಭ ಸೋಮವಾರದಂದು ನಗರದಲ್ಲಿ ಪ್ರಮುಖ ರಾಜಕೀಯ ಪಕ್ಷಗಳಾಗಿರುವ ಕಾಂಗ್ರೆಸ್, ಬಿಜೆಪಿ, ಕೆಜೆಪಿ ಅಭ್ಯರ್ಥಿಗಳು ಚುನಾವಣಾ ಅಧಿಕಾರಿಗಳಿಗೆ ನಾಮಪತ್ರ ಸಲ್ಲಿಸುವ ಮೂಲಕ ಚುನಾವಣಾ ಅಖಾಡ ಅಧಿಕೃತವಾಗಿ ರಂಗೇರಿತು.
3 ಪಕ್ಷದ ಅಭ್ಯರ್ಥಿಗಳು ತೆರೆದ ವಾಹನದಲ್ಲಿ ಸಾವಿರಾರು ಕಾರ್ಯಕರ್ತರನ್ನು ಕರೆದುಕೊಂಡು ನಗರದ ಪ್ರಮುಖ ಬೀದಿಗಳಲ್ಲಿ ಬೃಹತ್ ಮೆರವಣಿಗೆಯ ಮೂಲಕ ಆಗಮಿಸಿ ನಾಮಪತ್ರ ಸಲ್ಲಿಸಿದರು. ಕಾಂಗ್ರೆಸ್ ಅಭ್ಯರ್ಥಿ ಎಚ್.ಕೆ. ಪಾಟೀಲ ನಗರದ ಗದಗ ಕಾಟನ್ಸೇಲ್ ಸೊಸೈಟಿ ಆವರಣದಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಯ ಎದುರಿಗೆ ಇರುವ ಕೆ.ಎಚ್. ಪಾಟೀಲರ ಮೂರ್ತಿಗೆ ಮಾಲಾರ್ಪಣೆ ಮಾಡಿ ನಂತರ ತೆರೆದ ವಾಹನದ ಮೂಲಕ ತಮ್ಮ ಸಾವಿರಾರು ಕಾರ್ಯಕರ್ತರ ಜತೆ ತೆರಳಿ ಕೆಎಸ್ಆರ್ಟಿಸಿ ಡಿಪೋ ಎದುರಿಗಿರುವ ಉಪವಿಭಾಗಾಧಿಕಾರಿಗಳ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು.
ನಂತರ ಮಾತನಾಡಿದ ಎಚ್.ಕೆ. ಪಾಟೀಲ, ಈ ಬಾರಿ ಜನತೆ ಕಾಂಗ್ರೆಸ್ ಮತ ನೀಡುವ ಮೂಲಕ ರಾಜ್ಯದಲ್ಲಿ ಸಧೃಡ ಸರ್ಕಾರವನ್ನು ಸ್ಥಾಪಿಸುವ ನಿಟ್ಟಿನಲ್ಲಿ ಗಂಭೀರವಾದ ಚಿಂತನೆ ನಡೆಸಿದ್ದು, ಕೇಂದ್ರ ಸರ್ಕಾರದ ಹಲವಾರು ಅಭಿವೃದ್ಧಿ ಕಾರ್ಯಕ್ರಮಗಳು ಮತ್ತು ರಾಜ್ಯ ಸರ್ಕಾರದ ವೈಫಲ್ಯವನ್ನು ಜನರಿಗೆ ಸಮರ್ಥವಾಗಿ ತಿಳಿಸುವ ಕಾರ್ಯವನ್ನು ಕಾರ್ಯಕರ್ತರು ಯಶಸ್ವಿಯಾಗಿ ಮಾಡಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಗುರಣ್ಣ ಬಳಗಾನೂರ, ಸಾದಿಕ್ ನರಗುಂದ, ನಗರಸಭೆಯ ಸದಸ್ಯ ಸುರೇಶ ಕಟ್ಟಿಮನಿ, ಎಲ್.ಡಿ. ಚಂದಾವರಿ, ಮಾಜಿ ಅಧ್ಯಕ್ಷ ಶಿವಣ್ಣ ಮುಳಗುಂದ, ಸಾಧಿಕ ನರಗುಂದ ಮುಂತಾದವರು ಹಾಜರಿದ್ದರು. ಬಿಜೆಪಿ ಅಭ್ಯರ್ಥಿ ಶ್ರೀಶೈಲಪ್ಪ ಬಿದರೂರ ಸಹ ಸಾವಿರಾರು ಕಾರ್ಯಕರ್ತರ ಜತೆ ತೆರೆದ ವಾಹನದಲ್ಲಿ ಬಂದು ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಕಳೆದೈದು ವರ್ಷಗಳಲ್ಲಿ ನೀಡಿದ ಹಲವಾರು ಜನಪರ ಕಾರ್ಯಕ್ರಮಗಳ ಆಧಾರದಲ್ಲಿ ನಾವು ಚುನಾವಣೆಯನ್ನು ಎದುರಿಸುತ್ತೇವೆ ಮತ್ತು ಗೆಲುವು ಸಾಧಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಬಿಜೆಪಿ ಭಿನ್ನಮತದ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು ಅದೆಲ್ಲಾ ಪಕ್ಷದ ವರಿಷ್ಠರು ಪಕ್ಷದ ಚೌಕಟ್ಟಿನಲ್ಲಿಯೇ ಬಗೆ ಹರಿಸುತ್ತಾರೆ. ಪ್ರತಿಯೊಂದು ರಾಜಕೀಯ ಪಕ್ಷದಲ್ಲಿಯೂ ಇದು ಸರ್ವೇ ಸಾಮಾನ್ಯ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಎಂ.ಎಸ್. ಕರಿಗೌಡ್ರ, ಮುಖಂಡರಾದ ಕಾಂತಿಲಾಲ ಬನ್ಸಾಲಿ, ಎಂ.ಎಂ. ಹಿರೇಮಠ, ಪರಶುರಾಮ ಹೆಬಸೂರ ಸೇರಿದಂತೆ ಸಾವಿರಾರು ಕಾರ್ಯಕರ್ತರು ಹಾಜರಿದ್ದರು. ಇನ್ನು ಕೆಜೆಪಿಯಿಂದ ಎಸ್.ಬಿ. ಸಂಕಣ್ಣವರ ತಮ್ಮ ಸಾವಿರಾರು ಬೆಂಬಲಿಗರೊಂದಿಗೆ ತೆರೆದ ವಾಹನದಲ್ಲಿ ಮೆರವಣಿಗೆಯ ಮೂಲಕ ಆಗಮಿಸಿ ನಾಮಪತ್ರ ಸಲ್ಲಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 4 ದಶಕದಿಂದ ಸಾರ್ವಜನಿಕ ಜೀವನದಲ್ಲಿ ಹೋರಾಟದ ಬದುಕು ನಡೆಸುತ್ತಾ ಬಂದಿದ್ದು, ಕ್ಷೇತ್ರದ ಜನತೆಯ ಸಮಸ್ಯೆಗಳನ್ನು ಹತ್ತಿರದಿಂದ ಬಲ್ಲವನಾಗಿದ್ದೇನೆ. ಇದರೊಟ್ಟಿಗೆ ಮಾಜಿ ಸಿಎಂ ಯಡಿಯೂರಪ್ಪ ಅವರ ನೀಡಿದ ಹಲವಾರು ಜನಪರ ಯೋಜನೆಗಳ ಆಧಾರದಲ್ಲಿಯೇ ನಾನು ಗೆಲುವು ಸಾಧಿಸುತ್ತೇನೆ ಎಂದರು. ಈ ಸಂದರ್ಭದಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ರಾಜು ಕುರುಡಗಿ ಸೇರಿದಂತೆ ಹಲವಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

