ಕಾಂಗ್ರೆಸ್ ಮೃದುಧೋರಣೆಯಿಂದ ಭಯೋತ್ಪಾದನೆ ಹೆಚ್ಚಳ: ಜೋಶಿ
ಗದಗ: ಕಾಂಗ್ರೆಸ್ ಪಕ್ಷದವರ ಮೃಧು ಧೋರಣೆ ಹಾಗೂ ವ್ಯತಿರಿಕ್ತ ಹೇಳಿಕೆಗಳಿಂದಲೇ ದೇಶದಲ್ಲಿ ಭಯೋತ್ಪಾದನೆ ಹೆಚ್ಚಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ಪ್ರಹ್ಲಾದ ಜೋಶಿ ಗಂಭೀರ ಆರೋಪ ಮಾಡಿದರು.
ಚುನಾವಣಾ ಪ್ರಚಾರ ಕಾರ್ಯಕ್ರಮ ಪೂರ್ವದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಭಯೋತ್ಪಾದನೆ ವಿಷಯದಲ್ಲಿ ಕಾಂಗ್ರೆಸ್ ತೆಗೆದುಕೊಳ್ಳುತ್ತಿರುವ ನಿರ್ಧಾರಗಳನ್ನು ಗಮನಿಸಿದರೆ, ಅವರಿಗೆ ದೇಶದ ಹಿತಕ್ಕಿಂತ ಮತಗಳೇ ಮುಖ್ಯ ಎನಿಸುತ್ತಿದೆ ಎಂದು ಟೀಕಿಸಿದರು. ಬೆಂಗಳೂರು ಸ್ಫೋಟದ ಹಿನ್ನೆಲೆಯಲ್ಲಿ ಕಾಂಗ್ರೆಸ್ ರಾಜ್ಯದ ಜನತೆಯಲ್ಲಿ ಗೊಂದಲ ಸೃಷ್ಟಿಸುವ ಹೇಳಿಕೆ ನೀಡಿದ್ದನ್ನೂ ಖಂಡಿಸಿದರು.
ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಮಹಿಳೆಯರಿಗೆ ರಕ್ಷಣೆ ಇಲ್ಲವೆಂದು ಶನಿವಾರ ಗದಗನಲ್ಲಿ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಮಾಡಿರುವ ಟೀಕೆ ಕುರಿತು ಕೇಳಿದಾಗ, ಕಾಂಗ್ರೆಸ್ ಸರ್ಕಾರಗಳಿರುವ ರಾಜ್ಯಗಳಲ್ಲಿಯೇ ಮಹಿಳೆಯರ ಮೇಲೆ ಅತ್ಯಾಚಾರದಂತಹ ಪ್ರಕರಣಗಳು ನಡೆಯುತ್ತಿವೆ ಎನ್ನುವುದಕ್ಕೆ ದೆಹಲಿಯೇ ಉತ್ತಮ ಉದಾಹರಣೆ. ಪದೇ ಪದೇ ಅಂಥ ಪ್ರಕರಣ ನಡೆದರೂ ಗಮನಿಸುತ್ತಿಲ್ಲ. ಬಿಜೆಪಿ ಸರ್ಕಾರದ ಬಗ್ಗೆ ಮಾತನಾಡುವ ಮೊದಲು ಸಿದ್ದರಾಮಯ್ಯ ಇದನ್ನೆಲ್ಲ ಗಮನಿಸಲಿ. ಐದು ವರ್ಷಗಳಲ್ಲಿ ಆಗಿರುವ ಅಭಿವೃದ್ಧಿ ಕಾರ್ಯ ಸಹಿಸಿಕೊಳ್ಳಲು ಆಗದೆ ಟೀಕೆ ಮಾಡುವುದು ಸರಿಯಲ್ಲ. ಅಂಥ ಟೀಕೆಗಳಿಗೆ ಉತ್ತರಿಸುವ ಅಗತ್ಯವೂ ಇಲ್ಲ ಎಂದು ಜೋಶಿ ಹೇಳಿದರು.
ಯುಪಿಎ ಸರ್ಕಾರದ ಅಧಿಕಾರಾವಧಿಯಲ್ಲಿ ಆಗಿರುವ ಸಾಲು ಸಾಲು ಹಗರಣಗಳನ್ನು ಕಾಂಗ್ರೆಸ್ ನಾಯಕರು ಮರೆತಂತಿದೆ. ದೇಶಕ್ಕಾಗಿ ಈ ಐದು ವರ್ಷಗಳಲ್ಲಿ ಅವರೇನು ಕೊಟ್ಟಿದ್ದಾರೆ ಎಂದು ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ಜೋಶಿ ತಿರುಗೇಟು ನೀಡಿದರು. ಗದಗ ಶಾಸಕ ಶ್ರೀಶೈಲಪ್ಪ ಬಿದರೂರ, ಜಿಲ್ಲಾ ಬಿಜೆಪಿ ಅಧ್ಯಕ್ಷ ಎಂ.ಎಸ್. ಕರಿಗೌಡ್ರ, ಎಂ.ಎಂ. ಹಿರೇಮಠ, ಶ್ರೀಕಾಂತ ಖಟವಟೆ, ಮೋಹನ ಮಾಳಶೆಟ್ಟಿ ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

