ಬರಿದಾದ ತುಂಗೆ: ಗೋಳು ಕೇಳೋರ್ಯಾರು?
ಕನ್ನಡಪ್ರಭ ವಾರ್ತೆ, ಗದಗ, ಏ. 27
ಜಿಲ್ಲೆಯಲ್ಲಿ ಬೇಸಿಗೆಯ ಪ್ರಕರತೆ ಹೆಚ್ಚಾಗಿದ್ದು, ಗದಗ-ಬೆಟಗೇರಿ ಅವಳಿ ನಗರಕ್ಕೆ ಕುಡಿಯುವ ನೀರು ಪೂರೈಕೆ ಮಾಡುತ್ತಿದ್ದ ತುಂಗಭದ್ರಾ ನದಿ ಸಂಪೂರ್ಣ ಬತ್ತಿದೆ.
ಈಗಾಗಲೇ ಕೆಲವು ದಿನಗಳ ಹಿಂದೆಯೇ ಅವಳಿ ನಗರಕ್ಕೆ ನೀರು ಪೂರೈಸುತ್ತಿದ್ದ ತುಂಗಭದ್ರಾ ಜಲಾಶಯವು ಈಗ ಸಂಪೂರ್ಣ ಬರಿದಾಗಿದೆ. ಜನತೆ ನೀರಿಗಾಗಿ ಸಂಕಷ್ಟ ಎದುರಿಸುವ ಸ್ಥಿತಿ ನಿರ್ಮಾಣವಾಗಿದ್ದು, ವಿಧಾನಸಭಾ ಚುನಾವಣೆಯ ಗದ್ದಲದಲ್ಲಿ ಇವರ ಗೋಳು ಕೇಳುವವರೇ ಇಲ್ಲದಂತಾಗಿದೆ.
ಪ್ರತಿ ವರ್ಷಕ್ಕಿಂತಲೂ ಈ ಬಾರಿ ಬಿಸಿಲಿನ ಪ್ರಖರತೆ ಹೆಚ್ಚಾಗಿದೆ. ಅಲ್ಲದೆ ಬೇಸಿಗೆಯ ವೇಳೆಗೆ ಜಲಾಶಯದಲ್ಲಿನ ನೀರು ಬತ್ತುವುದು ಸಹಜ.
ಆದರೆ, ಪ್ರತಿ ವರ್ಷವೂ ಈ ವೇಳೆಗೆ ನೀರಿನ ಸಮಸ್ಯೆ ಉಂಟಾದಲ್ಲಿ ಪರ್ಯಾಯ ವ್ಯವಸ್ಥೆ ಕಲ್ಪಿಸುವ ಮೂಲಕ ಜನರ ನೀರಿನ ಬವಣೆಯನ್ನು ಅಲ್ಪ ಪ್ರಮಾಣದಲ್ಲಾದರೂ ತಪ್ಪಿಸಲು ಕ್ರಮ ಕೈಗೊಳ್ಳಲಾಗುತ್ತಿತ್ತು. ಆದರೆ, ಇಂತಹ ಬೇಸಿಗೆಯಲ್ಲಿಯೇ ಈ ಬಾರಿ ರಾಜ್ಯ ವಿಧಾನಸಭಾ ಚುನಾವಣೆಯು ಬಂದ ಹಿನ್ನೆಲೆಯಲ್ಲಿ ಎಲ್ಲ ರಾಜಕೀಯ ಮುಖಂಡರು, ಅಧಿಕಾರಿಗಳು ಈ ಚುನಾವಣೆಯ ಗದ್ದಲದಲ್ಲಿಯೆ ಮುಳುಗಿದ್ದಾರೆ.
ಜನರ ಸಮಸ್ಯೆಗಳನ್ನು ಆಲಿಸಿ ಪರಿಹರಿಸಬೇಕಾದ ಪ್ರಮುಖ ವಕ್ತಿಗಳೇ ಚುನಾವಣಾ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವುದರಿಂದ ಅವಳಿ ನಗರದ ಜನತೆ ನೀರಿಗಾಗಿ ಪರದಾಡುವಂತಾಗಿದೆ. ನಿತ್ಯ ನೀರಿನ ಸಮಸ್ಯೆ ಎದುರಿಸುತ್ತಿರುವ ಸಾರ್ವಜನಿಕರು ತಮ್ಮ ಆಕ್ರೋಶ ಹೊರಹಾಕುತ್ತಿದ್ದಾರೆ.
ನೀರು ಪೂರೈಕೆ ಸ್ಥಗಿತ: ಗದಗ-ಬೆಟಗೇರಿ ಅವಳಿ ನಗರಕ್ಕೆ ತಿಂಗಳಿಗೊಮ್ಮೆ ನೀರು ಪೂರೈಕೆ ಮಾಡಲಾಗುತ್ತಿತ್ತು. ಆದರೆ, ಅವಳಿ ನಗರಕ್ಕೆ ನೀರು ಪೂರೈಸುತ್ತಿದ್ದ ತುಂಗಭದ್ರಾ ಜಲಾಶಯವು ಸಂಪೂರ್ಣ ಬರಿದಾದ ಹಿನ್ನೆಲೆಯಲ್ಲಿ 10 ದಿನಗಳಿಂದ ನೀರು ಪೂರೈಕೆ ಸಂಪೂರ್ಣವಾಗಿ ಬಂದ್ ಮಾಡಲಾಗಿದೆ. ಈ ಕುರಿತು ನಗರಸಭೆಯವರು ವಾರ್ಡ್ಗಳಲ್ಲಿನ ಕೊಳವೆ ಬಾವಿ ಮೂಲಕ ನೀರು ಪೂರೈಕೆ ಮಾಡಲಾಗುವುದು ಎಂದು ಪ್ರಕಟಣೆ ನೀಡಿದ್ದು, ಆದರೆ ಗದಗ-ಬೆಟಗೇರಿ ಅವಳಿ ನಗರದಲ್ಲಿರುವ ಎಲ್ಲ ವಾರ್ಡ್ಗಳಲ್ಲಿಯೂ ಈ ಕೊಳವೆ ಬಾವಿಗಳಿಲ್ಲ. ಹಾಗಾಗಿ ಜನತೆ ನೀರಿಗಾಗಿ ಪರಿತಪಿಸುವಂತಾಗಿದೆ.
ರಂಗೇರಿದ ಚುನಾವಣೆ: ಮೇ 5ರಂದು ಜರುಗುತ್ತಿರುವ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಗದಗ-ಬೆಟಗೇರಿ ಅವಳಿ ನಗರದಲ್ಲಿ ಬೇಸಿಗೆಯ ಬೀಖರತೆಗಿಂತಲೂ ಚುನಾವಣೆಯ ಕಾವು ದಿನೇ ದಿನೇ ಏರುತ್ತಿದೆ. ಈಗಾಗಲೇ ಗದಗ ವಿಧಾನಸಭಾ ಮತಕ್ಷೇತ್ರಕ್ಕೆ 12 ಜನ ಅಭ್ಯರ್ಥಿಗಳು ತಮ್ಮ ಅದೃಷ್ಟ ಪರೀಕ್ಷೆಗೆ ನಿಂತಿದ್ದಾರೆ.
ಇಂತಹ ಸಂದರ್ಭದಲ್ಲಿ ಅವಳಿ ನಗರದ ಎಲ್ಲ ರಾಜಕೀಯ ನಾಯಕರು, ಅಧಿಕಾರಿಗಳು, ಮುಖಂಡರು ಈ ಚುನಾವಣೆಯ ಗುಂಗಿನಲ್ಲಿ ಕಾಲ ಕಳೆಯುತ್ತಿರುವುದರಿಂದ ಜನರ ನೀರಿನ ಬವಣೆ ಕುರಿತು ಯಾರೊಬ್ಬರೂ ಚಕಾರ ಎತ್ತದೆ ಇರುವುದರಿಂದ ಸಾರ್ವಜನಿಕರು, ಜಾನುವಾರುಗಳು ನೀರಿನ ತೊಂದರೆ ಅನುಭವಿಸುವಂತಾಗಿದೆ.
- ಅಜೀಜಅಹ್ಮದ ಬಳಗಾನೂರ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

