ಗದಗ

ಕಾಂಗ್ರೆಸ್ ಹೈಕಮಾಂಡ್‌ಗೆ ಸಿಎಂ ಮೇಲೆ ವಿಶ್ವಾಸವಿಲ್ಲ

Published On :

ಕನ್ನಡಪ್ರಭ ವಾರ್ತೆ, ನರಗುಂದ, ಆ. 13
ಕಾಂಗ್ರೆಸ್ ಸರ್ಕಾರದ ಸಿಎಂ ಸಿದ್ದರಾಮಯ್ಯನವರ ಮೇಲೆ ಮೂಲ ಕಾಂಗ್ರೆಸ್ಸಿಗರಿಗೆ ವಿಶ್ವಾಸವೇ ಇಲ್ಲ. ಅದಕ್ಕಾಗಿ ಒಂದೇ ಪಕ್ಷದ ಸರ್ಕಾರ ಅಧಿಕಾರದಲ್ಲಿದ್ದರೂ ಸಮನ್ವಯ ಸಮಿತಿ ಮಾಡಿದ್ದಾರೆ ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ್ ಲೇವಡಿ ಮಾಡಿದರು.
ಅವರು ಮಂಗಳವಾರ ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ವಿಧಾನ ಪರಿಷತ್ ಚುನಾವಣೆಯ ಬಿಜೆಪಿ ಅಭ್ಯರ್ಥಿ ಪ್ರದೀಪ ಶೆಟ್ಟರ್‌ರ ಮತ ಯಾಚನೆ ಸಭೆಯಲ್ಲಿ ಮಾತನಾಡಿದರು.
ಸಿದ್ದರಾಮಯ್ಯ ಮೂಲ ಕಾಂಗ್ರೆಸ್ಸಿಗರಲ್ಲ ಎನ್ನುವುದು ಅವರ ಪಕ್ಷದಲ್ಲಿ ಬಹಳ ದಿನಗಳಿಂದಲೂ ಕೇಳಿ ಬರುತ್ತಿರುವ ಮಾತಾಗಿದೆ ಎಂದ ಅವರು, ಈ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಸೋಲಿಸಬೇಕೆಂದು ಕಾಂಗ್ರೆಸ್ ವಿರೋಧಿ ಪಕ್ಷಗಳು ಒಂದಾಗಿ ಚುನಾವಣೆ ಎದರಸಲು ಸಿದ್ಧವಾಗಿವೆ ಎಂದರು.
ನೂತನ ಸರ್ಕಾರ ಮಂಡಿಸಿದ ಬಜೆಟ್‌ನಲ್ಲಿ ಕಳಸಾ-ಬಂಡೂರಿ ನಾಲಾ ಯೋಜನೆ ಕಾಮಗಾರಿಗೆ ರು.  5 ರಿಂದ 10 ಕೋಟಿ ಹಣ ಮೀಸಲಿಡಬೇಕು ಎಂದು ನಾನು ಮತ್ತು ಶಾಸಕ ಬಸವರಾಜ ಬೊಮ್ಮಾಯಿ ಸಿಎಂಗೆ ವಿನಂತಿ ಮಾಡಿದ್ದೆವು. ಆದರೆ, ಅದ್ಯಾವುದಕ್ಕೂ ಅವರ ತೆಲೆ ಕೆಡಿಸಿಕೊಂಡಿಲ್ಲ, ಕಾಂಗ್ರೆಸ್ ಪಕ್ಷಕ್ಕೆ ಈ ಭಾಗದ ಅಭಿವೃದ್ಧಿ ಬೇಕಿಲ್ಲ ಎಂದು ದೂರಿದರು. ಸಭೆಯಲ್ಲಿ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ ಮುಂತಾದವರು ಮಾತನಾಡಿದರು.
ಸಂಸದ ಪಿ.ಸಿ. ಗದ್ದಿಗೌಡರ, ಮಾಜಿ ಸಚಿವ ಸಿ.ಸಿ. ಪಾಟೀಲ, ಗೋವಿಂದ ಕಾರಜೋಳ,  ಕಳಕಪ್ಪ ಬಂಡಿ, ಬಸವರಾಜ ಬೊಮ್ಮಾಯಿ, ಜಿಪಂ ಅಧ್ಯಕ್ಷ ಎಂ.ಎಸ್. ಪಾಟೀಲ, ಸದಸ್ಯೆ ಶಾಂತಾ ದಂಡಿನ, ತಾಪಂ ಅಧ್ಯಕ್ಷ ಗುರಪ್ಪ ಆದಪ್ಪನವರ, ವಿ.ಎಸ್. ಹಿರೇಮಠ, ಎಪಿಎಂಸಿ ಅಧ್ಯಕ್ಷ ಅಜ್ಜಪ್ಪ ಹುಡೇದ, ಎಂ.ಎಸ್. ಕರಿಗೌಡರ, ಎಸ್.ಬಿ. ಕರಿಗೌಡರ, ಬಿ.ಬಿ. ಐನಾಪುರ, ವಾಸು ಜೋಗಣ್ಣವರ, ರಾಜುಗೌಡ ಪಾಟೀಲ, ಬಿ.ಕೆ. ಗುಜಮಾಗಡಿ, ವಿ.ಎನ್. ಕೊಳ್ಳಿಯವರ, ಗ್ರಾಪಂ, ತಾಪಂ, ಜಿಪಂ, ಪುರಸಭೆ, ಎಪಿಎಂಸಿ ಸದಸ್ಯರು ಮತ್ತು ಬಿಜೆಪಿ ಮುಖಂಡರು, ಕಾರ್ಯಕರ್ತರು ಹಾಜರಿದ್ದರು.

ಕಾಂಗ್ರೆಸ್ ಆಡಳಿತದಿಂದ ಜನತೆ ಭ್ರಮ ನಿರಸನಗೊಂಡಿದ್ದಾರೆ

ಗಜೇಂದ್ರಗಡ: ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರದ 3 ತಿಂಗಳ ಆಡಳಿತದಿಂದ ಜನತೆ ಭ್ರಮ ನಿರಸನಗೊಂಡಿದ್ದಾರೆ ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ್ ಹೇಳಿದರು.
ಅವರು ಮಂಗಳವಾರ ಜಿ.ಕೆ. ಬಂಡಿ ಗಾರ್ಡನ್‌ನಲ್ಲಿ ವಿಧಾನ ಪರಿಷತ್ ಉಪ ಚುನಾವಣೆ ಹಿನ್ನೆಲೆಯಲ್ಲಿ ಅಭ್ಯರ್ಥಿ ಪರ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.
ಹಿಂದಿನ ಬಿಜೆಪಿ ಸರ್ಕಾರದ ಜನಪರ ಅಭಿವೃದ್ಧಿ ಯೋಜನೆಗಳನ್ನು ಕಾಂಗ್ರೆಸ್ ಸರ್ಕಾರ ಕೈ ಬಿಡುವ ಮೂಲಕ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿದ ಅವರು, ಬರುವ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲು ಖಚಿತ ಎಂದರು.  
ಮಾಜಿ ಸಚಿವ ಗೋವಿಂದ ಕಾರಜೋಳ ಮಾತನಾಡಿ, ಉಪ ಚುನಾವಣೆ ಬಳಿಕ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಕಾಂಗ್ರೆಸ್ ವಿರೋಧಿ ಅಲೆ ಸೃಷ್ಟಿಯಾಗಲಿದೆ. ಜತೆಗೆ ಮುಂಬರುವ 2014ರ ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎ ಒಕ್ಕೂಟ ಅಧಿಕಾರಕ್ಕೆ ಬರಲಿದೆ ಎಂದರು.
ಮಾಜಿ ಸಚಿವ ಬಿಜೆಪಿ ಜಿಲ್ಲಾಧ್ಯಕ್ಷ ಕಳಕಪ್ಪ ಬಂಡಿ, ಬಸವರಾಜ ಬೊಮ್ಮಾಯಿ ಮಾತನಾಡಿದರು. ಸಂಗಣ್ಣ ಕರಡಿ, ಹಾಲಪ್ಪ ಆಚಾರ್ಯ, ದೊಡ್ಡನಗೌಡ ಪಾಟೀಲ, ಬಾಗಲಕೋಟೆ ಸಂಸದ ಪಿ.ಸಿ. ಗದ್ದಿಗೌಡರ, ಜಿಪಂ ಉಪಾಧ್ಯಕ್ಷ ರಮೇಶ ಮುಂದಿನಮನಿ, ಎಂ.ಎಸ್. ಕರಿಗೌಡರ, ತಾಪಂ ಅಧ್ಯಕ್ಷೆ ಲಲಿತಾ ಪೂಜಾರ, ಅಶೋಕ ನವಲಗುಂದ, ಬಿ.ಎಂ. ಸಜ್ಜನ, ಗಜೇಂದ್ರಗಡ ನಗರ ಘಟಕ ಅಧ್ಯಕ್ಷ ಭಾಸ್ಕರ ರಾಯಬಾಗಿ, ಪುರಸಭಾ ಸದಸ್ಯ ಸಿದ್ದಪ್ಪ ಬಂಡಿ, ಪಿ.ಸಿ. ಪೊಲೀಸ್ ಪಾಟೀಲ ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.