ಗದಗ

ಬೆಲೆ ಏರಿಕೆ ಖಂಡಿಸಿ ಎಬಿವಿಪಿ ಪ್ರತಿಭಟನೆ

Published On :

ಕನ್ನಡಪ್ರಭ ವಾರ್ತೆ, ಗದಗ, ಆ. 13
ನಿರಂತರ ಬೆಲೆ ಏರಿಕೆ ಹಾಗೂ ಭ್ರಷ್ಟಾಚಾರದಲ್ಲಿ ಮುಳುಗಿರುವ ಕೇಂದ್ರದ ಯುಪಿಎ ಸರ್ಕಾರವನ್ನು ವಜಾಗೊಳಿಸಬೇಕು ಎಂದು ಒತ್ತಾಯಿಸಿ ಮಂಗಳವಾರ ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಜಿಲ್ಲಾ ಘಟಕದ ವತಿಯಿಂದ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಸಂಘಟನೆಯ ಮುಖಂಡ ಶರಣು ಚೌಧರಿ, ಕೇಂದ್ರದ ಯುಪಿಎ ಸರ್ಕಾರ ಹಲವಾರು ಹಗರಣಗಳ ಮೂಲಕ ರು.  12 ಲಕ್ಷ ಕೋಟಿ ಭ್ರಷ್ಟಾಚಾರ ಮಾಡಿದ್ದು, ಹಣದುಬ್ಬರ ಮತ್ತು ಬೆಲೆ ಏರಿಕೆ ತಡೆಗಟ್ಟುವಲ್ಲಿ ವಿಫಲವಾಗಿದೆ. ರುಪಾಯಿ ಮೌಲ್ಯ ನಿರಂತರ ಕುಸಿತ ಕಾಣುತ್ತಿದೆ. ಬಡತನ ನಿರಂತರ ವೃದ್ಧಿಯಾಗುತ್ತಿದೆ. ಜತೆಗೆ ಸರ್ಕಾರ ವಿದೇಶಿ ನೀತಿ ರೂಪಿಸುವ ಕಾರ್ಯದಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ಆಂತರಿಕ ಸುರಕ್ಷೆ ಮತ್ತು ಬಾಹ್ಯ ಸುರಕ್ಷೆ ಕಾಪಾಡುವಲ್ಲಿ ವಿಫಲವಾಗಿದೆ ಎಂದು ದೂರಿದರು.
ಶಿಕ್ಷಣ ಕ್ಷೇತ್ರದಲ್ಲಿ ನಡೆಯುತ್ತಿರುವ ವ್ಯಾಪಾರೀಕರಣ, ಭ್ರಷ್ಟಾಚಾರ ಮತ್ತು ಅರಾಜಕತೆಗೆ ಕೇಂದ್ರ ಸರ್ಕಾರವೇ ಹೊಣೆಯಾಗಿದೆ. ಭ್ರಷ್ಟ ಮತ್ತು ಬೇಜವಾಬ್ದಾರಿ ನೀತಿಯ ಕಾರಣ ದೇಶಕ್ಕೆ ಆರ್ಥಿಕ ನಷ್ಟ ಜೊತೆಗೆ ವಿಕಾಸ ಕುಂಠಿತವಾಗಿದೆ. ವಿದೇಶದಲ್ಲಿರುವ ಕಪ್ಪುಹಣ ಭಾರತಕ್ಕೆ ಮರಳಿ ತರಲು ಕಾನೂನು ರೂಪಿಸಬೇಕು ಮತ್ತು ಭ್ರಷ್ಟಾಚಾರಿಗಳ ಹೆಸರುಗಳನ್ನು ದೇಶದ ಮುಂದೆ ಬಹಿರಂಗಪಡಿಸಬೇಕು. ನ್ಯಾಯಾಂಗದಲ್ಲಿ, ಪೊಲೀಸ್ ವ್ಯವಸ್ಥೆಯ ಜತೆಗೆ ಶಿಕ್ಷಣ ವ್ಯವಸ್ಥೆಯಲ್ಲಿ ಸುಧಾರಣೆ ತರಬೇಕು ಎಂದು ಮನವಿ ಮೂಲಕ ಆಗ್ರಹಿಸಿದರು.
ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿದ ಪ್ರತಿಭಟನಾಕಾರರು ಕೇಂದ್ರ ಯುಪಿಎ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ನಗರದ ಮಹಾತ್ಮಗಾಂಧಿ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಕೆಲಕಾಲ ರಸ್ತೆತಡೆ ನಡೆಸಿದರು. ಇದರಿಂದಾಗಿ ಕೆಲಕಾಲ ವಾಹನ ಸಂಚಾರರಿಗೆ ತೀವ್ರ ತೊಂದರೆಯಾಯಿತು.
ಮಂಜುನಾಥ ಮಿಸೆ, ಶಿವಾನಂದ ಬಿರಾದಾರ, ಶಿಲ್ಪಾ ಬಂಡಿಹಾಳ, ಸುಪ್ರೀತ ವಾಂಡಗೇರ, ಮೋಹನ, ಭಾಗ್ಯಶ್ರೀ ಪವಾರ, ಸುಕನ್ಯಾ, ಅಕ್ಷತಾ, ಜ್ಯೋತಿ, ಕವಿತಾ ಲಲಿತಾ ಸೇರಿದಂತೆ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.