ಗದಗ

ಪ್ರತಿಭೆ ಹೊರಹಾಕಲು ಕ್ರೀಡೆಗಳು ಸಹಕಾರಿ

Published On :

ಕನ್ನಡಪ್ರಭ ವಾರ್ತೆ, ಗದಗ, ಡಿ. 16
ಆರಕ್ಷಕ ಸಿಬ್ಬಂದಿ ಕರ್ತವ್ಯದ ಜತೆ ತಮ್ಮಲ್ಲಿ ಅಡಗಿರುವ ಪ್ರತಿಭೆಯನ್ನು ಹೊರಹಾಕಲು ಕ್ರೀಡಾಕೂಟಗಳು ಸಹಕಾರಿಯಾಗಿವೆ ಎಂದು ಜಿಲ್ಲಾಧಿಕಾರಿ ಎನ್.ಎಸ್. ಪ್ರಸನ್ನಕುಮಾರ ಹೇಳಿದರು.
ಸೋಮವಾರ ಬೆಟಗೇರಿಯ ಜಿಲ್ಲಾ ಶಸಸ್ತ್ರ ಮೀಸಲು ಪಡೆಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಪೊಲೀಸ್ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.
ಉತ್ತಮ ಆರೋಗ್ಯಕ್ಕೆ ಕ್ರೀಡೆ ಅತ್ಯವಶ್ಯವಾಗಿದ್ದು, ಪ್ರತಿಯೊಬ್ಬರೂ ಕ್ರೀಡಾಮನೋಭಾವ ಅಳವಡಿಸಿಕೊಳ್ಳಬೇಕು. ದಿನದ 1 ಗಂಟೆಯಾದರೂ ಕ್ರೀಡೆಗೆ ಮೀಸಲಿಡಬೇಕು. ತಮ್ಮ ಒತ್ತಡದ ಬದುಕಿನಲ್ಲಿ ಪೊಲೀಸ್ ಸಿಬ್ಬಂದಿಗಳೆಲ್ಲ ಕೂಡಿ ಕ್ರೀಡಾಚಟುವಟಿಕೆ ಹಮ್ಮಿಕೊಳ್ಳುವ ಮೂಲಕ ಪ್ರತಿಯೊಬ್ಬರು ಸ್ನೇಹ ಬೆಳೆಸಿಕೊಳ್ಳಲು ಸಹಕಾರಿಯಾಗಲಿದೆ. ಕ್ರೀಡೆಯಲ್ಲಿ ಸೋಲು-ಗೆಲುವು ಮುಖ್ಯವಲ್ಲ. ಪ್ರತಿಯೊಬ್ಬರೂ ಕ್ರೀಡೆಯಲ್ಲಿ ಪಾಲ್ಗೊಳ್ಳುವುದು ಅತ್ಯವಶ್ಯ. ಸೋತನೆಂದು ಕುಗ್ಗದೇ, ಗೆದ್ದೆನೆಂದು ಬೀಗದೆ ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು ಎಂದರು.
ಜಿಪಂನ ಕಾರ್ಯನಿರ್ವಾಹಕ ಅಧಿಕಾರಿ ವೀರಣ್ಣ ತುರಮರಿ ಮಾತನಾಡಿ, ಶಿಸ್ತು, ಸಂಯಮಕ್ಕೆ ಪೊಲೀಸ್ ಇಲಾಖೆ ಸಿಬ್ಬಂದಿ ಮಾದರಿಯಾಗಿದ್ದು, ಸಮಾಜದಲ್ಲಿ ಉಂಟಾಗುವ ಅಹಿತಕರ ಘಟನೆಗಳು, ಪ್ರತಿಭಟನೆ ಮುಂತಾದವುಗಳನ್ನು ತಡೆದು ಜಿಲ್ಲೆಯನ್ನು ಶಾಂತಿಯುತವಾಗಿ ಇಡುವ ಪೊಲೀಸರ ಕಾರ್ಯ ಶ್ಲಾಘನೀಯ. ಇಂತಹ ಪೊಲೀಸರಿಗೂ ಕ್ರೀಡಾಕೂಟ ಹಮ್ಮಿಕೊಳ್ಳುವ ಮೂಲಕ ಆರಕ್ಷಕರಲ್ಲಿ ಅಡಕವಾಗಿರುವ ಕ್ರೀಡಾಮನೋಭಾವ ಹೊರಹಾಕುವ ಕಾರ್ಯ ನಡೆಸುತ್ತಿರುವುದು ಸಂತಸದ ಸಂಗತಿಯಾಗಿದೆ ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಶರಣಪ್ಪ ಎಸ್.ಡಿ. ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ಸಂದರ್ಭದಲ್ಲಿ ಗದಗ, ಬೆಟಗೇರಿ, ರೋಣ, ಶಿರಹಟ್ಟಿ, ನರಗುಂದ ಸೇರಿದಂತೆ ವಿಶೇಷ ಘಟಕದಿಂದ ಪೊಲೀಸ್ ಅಧಿಕಾರಿಗಳು ಹಾಗೂ ಪೊಲೀಸ್ ಕ್ರೀಡಾಪಟುಗಳು ಪಾಲ್ಗೊಂಡಿದ್ದರು. ಆರ್‌ಪಿಐ ಟಿ. ಫೈಜುದ್ದಿನ್ ನಿರೂಪಿಸಿದರು. ಡಿವೈಎಸ್‌ಪಿ ವಿ.ಜಿ. ಡಂಬಳ ವಂದಿಸಿದರು.

ಗದಗ ಜಿಲ್ಲೆ ಕ್ರೀಡಾ ಚಟುವಟಿಕೆಯಲ್ಲಿ ಹೆಚ್ಚಿನ ಪ್ರಾಶಸ್ತ್ಯ ಹೊಂದಿದ್ದು, ಹಾಕಿ, ಕುಸ್ತಿ ಸೇರಿದಂತೆ ಹಲವು ಕ್ರೀಡೆಗಳಲ್ಲಿ ಜಿಲ್ಲೆಯ ಕ್ರೀಡಾಪಟುಗಳು, ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಪಾಲ್ಗೊಳ್ಳುವ ಮೂಲಕ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಅದರಂತೆಯೇ ಈಗ ಹಮ್ಮಿಕೊಳ್ಳಲಾಗಿರುವ ಕ್ರೀಡಾಕೂಟದಲ್ಲಿ ಪಾಲ್ಗೊಂಡಿರುವ ಆರಕ್ಷಕ ಸಿಬ್ಬಂದಿ ಕ್ರೀಡಾಮನೋಭಾವದಿಂದ ರಾಜ್ಯಮಟ್ಟದಲ್ಲಿ ಗದಗ ಜಿಲ್ಲೆಗೆ ಕೀರ್ತಿ ತರಬೇಕು.
- ಎನ್.ಎಸ್. ಪ್ರಸನ್ನಕುಮಾರ,
ಗದಗ ಜಿಲ್ಲಾಧಿಕಾರಿ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.