ಶಿಕ್ಷಕರ ಬದಲಾವಣೆಗೆ ಶಾಸಕರ ಸೂಚನೆ
ಕನ್ನಡಪ್ರಭ ವಾರ್ತೆ, ಶಿರಹಟ್ಟಿ, ಡಿ. 16
ಪಟ್ಟಣದ ಹೃದಯ ಭಾಗದಲ್ಲಿರುವ ಸರ್ಕಾರಿ ಮಾದರಿ ಕನ್ನಡ ಗಂಡು ಮಕ್ಕಳ ಶಾಲೆಯಲ್ಲಿ 15 ವರ್ಷಗಳಿಂದ ಶಿಕ್ಷಕರು ಕಾರ್ಯನಿರ್ವಹಿಸುತ್ತಿದ್ದು, ಕಲಿಸಲು ಆಸಕ್ತಿ ತೋರುತ್ತಿಲ್ಲ. ಶಾಲೆಯಲ್ಲಿ ಮಕ್ಕಳ ಹಾಜರಾತಿಯೂ ತೀರಾ ಕಡಿಮೆಯಾಗಿದೆ ಎಂಬ ಆರೋಪ ಕೇಳಿ ಬರುತ್ತಿದೆ. ಕೂಡಲೇ ಅಲ್ಲಿನ ಎಲ್ಲ ಶಿಕ್ಷಕರನ್ನು ಬೇರೆಡೆಗೆ ನಿಯೋಜಿಸಿ ಹೊಸಬರನ್ನು ನೇಮಿಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗೆ ಶಾಸಕ ರಾಮಕೃಷ್ಣ ದೊಡ್ಡಮನಿ ಸೂಚಿಸಿದರು.
ಸೋಮವಾರ ತಾಪಂ ಸಾಮರ್ಥ್ಯ ಸೌಧದಲ್ಲಿ ನಡೆದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.
ಮೊದಲೇ ಸರ್ಕಾರಿ ಶಾಲೆಗಳ ಬಗ್ಗೆ ಪಾಲಕರಲ್ಲಿ ಆಸಕ್ತಿ ಕಡಿಮೆಯಾಗಿದೆ. ಶಿಕ್ಷಕರಲ್ಲಿನ ಒಳ ಜಗಳದಿಂದ ಮಕ್ಕಳ ಭವಿಷ್ಯಕ್ಕೆ ಕುತ್ತು ಬರುತ್ತಿದೆ ಎಂಬ ಅಪಸ್ವರಗಳು ಕೇಳಿಬರುತ್ತಿವೆ. ಯಾವುದೇ ಕಾರಣ ಹೇಳದೆ ಶಿಕ್ಷಕರ ಬದಲಾವಣೆಗೆ ಕ್ರಮ ಕೈಗೊಳ್ಳುವಂತೆ ತಿಳಿಸಿದರು.
ಈ ಕುರಿತು ಅಧಿಕಾರಿ ಪ್ರತಿಕ್ರಿಯಿಸಿ, ಈಗಾಗಲೇ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದೆ. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವಂತೆ ತಾಕೀತು ಮಾಡಲಾಗಿದೆ. ಜತೆಗೆ ವರ್ತನೆ ಬದಲಿಸಿಕೊಳ್ಳದಿದ್ದರೆ ಕ್ರಮ ಕೈಗೊಳ್ಳುವ ಕುರಿತು ಶಿಕ್ಷಕರಿಂದ ಮುಚ್ಚಳಿಕೆ ಪತ್ರ ಬರೆಸಿಕೊಂಡಿದ್ದಾಗಿ ತಿಳಿಸಿದರು.
ತಾಲೂಕಿನ ಶೆಟ್ಟಿಕೇರಿ ಗ್ರಾಮದ ಕೆರೆ ಅಂಗಳದಲ್ಲಿ ಸಸಿಗಳನ್ನು ನೆಡದೆ ರು. 1.26 ಲಕ್ಷ ವೆಚ್ಚದಲ್ಲಿ 728 ವಿವಿಧ ಬಗೆಯ ಸಸಿಗಳನ್ನು ನೆಡಲಾಗಿದೆ ಎಂದು ಸಾಮಾಜಿಕ ಅರಣ್ಯ ಇಲಾಖೆ ಅಧಿಕಾರಿ ಎಸ್.ಎಸ್. ಬಿಚಗತ್ತಿ ಸಭೆಗೆ ತಪ್ಪು ಮಾಹಿತಿ ನೀಡುತ್ತಿದ್ದಾರೆ. ಪರಿಶೀಲಿಸಿದರೆ ಸಸಿಗಳೇ ಕಾಣುತ್ತಿಲ್ಲ. ಅಧಿಕಾರಿಗಳ ಬೇಜವಾಬ್ದಾರಿಯಿಂದ ಸರ್ಕಾರದ ಅನುದಾನ ದುರ್ಬಳಕೆಯಾಗುತ್ತಿದೆ. ಈ ಪ್ರವೃತ್ತಿ ಮುಂದುವರಿದರೆ ಶಿಸ್ತು ಕ್ರಮಕ್ಕೆ ಮುಂದಾಗುವುದಾಗಿ ಜಿಪಂ ಸದಸ್ಯ ಎಂ.ಎಸ್. ದೊಡ್ಡಗೌಡರ ತಾಕೀತು ಮಾಡಿದರು.
ಹಳೆ ಗಿಡಗಳನ್ನು ತೋರಿಸಿ ಹೊಸ ಬಿಲ್ ತೆಗೆಯುವ ಪ್ರವೃತ್ತಿ ನಿಲ್ಲಬೇಕು. ಗ್ರಾಪಂ ವ್ಯಾಪ್ತಿಯಲ್ಲಿ ನೆಟ್ಟ ಸಸಿಗಳು ಎಲ್ಲಿಯೂ ಸಮೃದ್ಧವಾಗಿ ಬೆಳೆದಿಲ್ಲ. ಸಸಿಗಳ ನಿರ್ವಹಣಾ ವೆಚ್ಚಕ್ಕೆಂದು ಹೆಚ್ಚುವರಿ ಅನುದಾನ ತೆಗೆದಿರಿಸುವಂತೆ ಸಭೆಯಲ್ಲಿ ನಿರ್ಣಯಿಸಲಾಯಿತು. ಜತೆಗೆ ಶೀಘ್ರದಲ್ಲಿಯೇ ಅರಣ್ಯ ಇಲಾಖೆ ವತಿಯಿಂದ ಸಸಿಗಳ ಪಾಲನೆ ಪೋಷಣೆ ಮಾಡುವ ಕುರಿತು ಚರ್ಚಿಸಲು ಶಾಸಕರ ನೇತೃತ್ವದಲ್ಲಿ ಸಭೆ ಕರೆಯುವಂತೆ ಸೂಚನೆ ನೀಡಿದರು.
ಬಿಟಿ ಬತ್ತಿ ಬೆಳೆ ಹಾನಿ ಆಗಿರುವುದು ಸತ್ಯ ಸಂಗತಿ. ರೈತರಿಗೆ ತೊಂದರೆ ಮಾಡದೆ ಪ್ರಾಮಾಣಿಕವಾಗಿ ಸಮೀಕ್ಷೆ ಮಾಡಿ ಪರಿಹಾರ ದೊರಕಿಸಲು ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ಪ್ರಭಾರಿ ಸಹಾಯಕ ಕೃಷಿ ನಿರ್ದೆಶಕ ಪ್ರಹ್ಲಾದರಾವ್ಗೆ ಶಾಸಕ ರಾಮಕೃಷ್ಣ ದೊಡ್ಡಮನಿ ಸೂಚಿಸಿದರು.
ಈಗಾಗಲೇ ಸಾವಿರಕ್ಕೂ ಹೆಚ್ಚು ಅರ್ಜಿಗಳ ಪರಿಶೀಲನೆ ಕಾರ್ಯ ಮುಗಿದಿದೆ. ವಾರದಲ್ಲಿ ಉಳಿದ ಅರ್ಜಿಗಳ ಪರಿಶೀಲನೆ ಕಾರ್ಯ ಮುಗಿಸಿ ಸರ್ಕಾರಕ್ಕೆ ಕಳುಹಿಸುವುದಾಗಿ ಅಧಿಕಾರಿ ತಿಳಿಸಿದರು.
ಬೇಸಿಗೆ ಆರಂಭಕ್ಕೂ ಮುನ್ನವೇ ಅಲ್ಲಲ್ಲಿ ಕುಡಿಯುವ ನೀರಿನ ಸಮಸ್ಯೆ ಕೇಳಿಬರುತ್ತಿದೆ. ಜಿಪಂ ಹಾಗೂ ಹೆಸ್ಕಾಂ ಇಲಾಖೆ ಅಧಿಕಾರಿಗಳು ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ಶಾಸಕರು ತಿಳಿಸಿದರು.
ಸಮಾಜ ಕಲ್ಯಾಣ, ಲೋಕೋಪಯೋಗಿ, ವಲಯ ಅರಣ್ಯ, ರೇಷ್ಮೆ, ಆರೋಗ್ಯ, ತೋಟಗಾರಿಕೆ, ಪಶು ವೈದ್ಯಕೀಯ ಇಲಾಖೆಗಳ ಕುರಿತಂತೆ ಚರ್ಚೆ ನಡೆಯಿತು.
ಸಭೆಯಲ್ಲಿ ತಾಪಂ ಅಧ್ಯಕ್ಷೆ ಸುನಂದಾ ಬಿದರಳ್ಳಿ, ಜಿಪಂ ಸದಸ್ಯೆ ಕಮಲವ್ವ ಸಜ್ಜನರ, ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷ ಕೋಟೆಪ್ಪ ವರ್ದಿ, ತಹಸೀಲ್ದಾರ್ ಆರ್.ಬಿ. ನಿಂಗನಗೌಡ್ರ ಮುಂತಾದವರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

