ಗದಗ

ಸರ್ಕಾರ ಬಡ ಮಕ್ಕಳಿಗೆ ಸೌಲಭ್ಯ ಕಲ್ಪಿಸಲಿ

Published On :

ಕನ್ನಡಪ್ರಭ ವಾರ್ತೆ, ಮುಂಡರಗಿ, ಡಿ. 18
ಸರ್ಕಾರಗಳು ಜಾತಿಯ ಆಧಾರದ ಮೇಲೆ ಮಕ್ಕಳಿಗೆ ಸೌಲಭ್ಯಗಳನ್ನು ನೀಡುವ ಪದ್ಧತಿ ಕೈಬಿಟ್ಟು, ಆರ್ಥಿಕವಾಗಿ ಹಿಂದುಳಿದ ಮಕ್ಕಳಿಗೆ ಸೌಲಭ್ಯಗಳನ್ನು ನೀಡುವ ಯೋಜನೆಗಳನ್ನು ಜಾರಿಗೆ ತರಬೇಕು. ಶಿಕ್ಷಣ ನಿಜವಾದ ಪರಿಪೂರ್ಣವಾದ ಮನುಷ್ಯನನ್ನು ರೂಪಿಸುತ್ತದೆ. ಆದ್ದರಿಂದ ಯಾರೂ ಶಿಕ್ಷಣದಿಂದ ವಂಚಿತರಾಗಬಾರದು ಎಂದು ಮಂಡರಗಿ ಸಂಸ್ಥಾನಮಠದ ಜ. ನಾಡೋಜ ಡಾ. ಅನ್ನದಾನೀಶ್ವರ ಶ್ರೀಗಳು ಹೇಳಿದರು.
ಅವರು ಮಂಗಳವಾರ ಸ್ಥಳೀಯ ಜ. ಅನ್ನದಾನ ವಿದ್ಯಾ ಸಮಿತಿಯ ಎಂ.ಎಸ್. ಡಂಬಳ ಹೆಣ್ಣುಮಕ್ಕಳ ಪ್ರೌಢಶಾಲೆ ಮತ್ತು ಜ. ಅನ್ನದಾನ ಪ್ರೌಢಶಾಲೆಯ 8ನೇ ತರಗತಿ ಮಕ್ಕಳಿಗೆ ಸರ್ಕಾರ ಉಚಿತವಾಗಿ ಕೊಡಮಾಡುವ ಸೈಕಲ್ ವಿತರಣಾ ಕಾರ್ಯಕ್ರಮದ ಸಾನ್ನಿಧ್ಯವಹಿಸಿ ಮಾತನಾಡಿದರು.
ಇದೀಗ ಸರ್ಕಾರ ಶಾಲಾ ಮಕ್ಕಳಿಗಾಗಿ ಅನ್ನಭಾಗ್ಯ, ಕ್ಷೀರ ಭಾಗ್ಯ, ಉಚಿತ ಪಠ್ಯಪುಸ್ತಕ, ಉಚಿತ ಬಟ್ಟೆ ಸೇರಿದಂತೆ ಮುಂತಾದ ಭಾಗ್ಯಗಳನ್ನು ಕೊಟ್ಟು ಅವರ ಸರ್ವಾಂಗೀಣ ಅಭಿವೃದ್ಧಿಗಾಗಿ ಶ್ರಮಿಸುತ್ತಿದೆ. ಮಕ್ಕಳು ಇದರ ಸದುಪಯೋಗ ಪಡೆದುಕೊಳ್ಳಬೇಕು. ಶಾಲೆಗಳಲ್ಲಿ ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ನೀಡುವ ನಿಟ್ಟಿನಲ್ಲಿ ಶಿಕ್ಷಕರು ಉತ್ತಮವಾಗಿ ಕಾರ್ಯನಿರ್ವಹಿಸಬೇಕು ಎಂದರು. ಶಾಸಕ ರಾಮಕೃಷ್ಣ ದೊಡ್ಡಮನಿ ಸೈಕಲ್ ವಿತರಿಸಿ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಗ್ರಾಮೀಣ ಭಾಗದ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎನ್ನುವ ಉದ್ದೇಶದಿಂದ ಇಂದು ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು, ಅಂತಹ ಯೋಜನೆಗಳಲ್ಲಿ ಸೈಕಲ್ ವಿತರಣೆಯೂ ಒಂದು. ತಾಲೂಕಿನಲ್ಲಿ 8ನೇ ತರಗತಿಯಲ್ಲಿ ಓದುತ್ತಿರುವ 890 ವಿದ್ಯಾರ್ಥಿಗಳಿಗೆ, 944 ವಿದ್ಯಾರ್ಥಿನಿಯರಿಗೆ ಸೇರಿ 1834 ಸೈಕಲ್‌ಗಳನ್ನು ವಿತರಿಸಲಾಗುತ್ತಿದೆ. ವಿದ್ಯಾರ್ಥಿಗಳು ಸರ್ಕಾರದಿಂದ ದೊರೆಯುವ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದರು.  ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎ. ರಡ್ಡೇರ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾಲೇಜಿನ ಮೇಲ್ವಿಚಾರಣಾ ಸಮಿತಿಯ ಕಾರ್ಯಾಧ್ಯಕ್ಷ ಬಿ.ಎಸ್. ಹಿರೇಗೌಡರ ಅಧ್ಯಕ್ಷತೆ ವಹಿಸಿದ್ದರು. ಇದೇ ಸಂದರ್ಭದಲ್ಲಿ ಶಾಸಕ ರಾಮಕೃಷ್ಣ ದೊಡ್ಡಮನಿ, ಪುರಸಭೆ ಸದಸ್ಯೆ ಪ್ರೇಮಾ ಗಣದಿನ್ನಿ, ತಾಲೂಕು ಮಾಧ್ಯಮಿಕ ಶಾಲಾ ನೌಕರರ ಸಂಘದ ಅಧ್ಯಕ್ಷ ಬಿ.ಕೆ. ಪಾಟೀಲ ಅವರನ್ನು ಸನ್ಮಾನಿಸಲಾಯಿತು. ಸಮಿತಿಯ ಗೌರವ ಕಾರ್ಯದರ್ಶಿ ಎ.ಕೆ. ಬೆಲ್ಲದ, ಎಂ.ಎಸ್. ಡಂಬಳ, ಶಂಕ್ರಪ್ಪ ಬಾರಿಕಾಯಿ, ಎಸ್.ಬಿ. ಹಿರೇಮಠ, ಪ್ರಾ. ವಿ.ಎಫ್. ಅಂಗಡಿ, ವಿ.ಎಸ್. ಚವಡಿ ಮುಂತಾದವರು ಉಪಸ್ಥಿತರಿದ್ದರು. ಎಸ್.ಎಂ. ಹೊಸಮಠ ಸ್ವಾಗತಿಸಿದರು. ಎಸ್.ಎಸ್. ಇನಾಮತಿ ನಿರೂಪಿಸಿದರು. ಎಸ್.ಆರ್. ರಿತ್ತಿ ವಂದಿಸಿದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.