ಸಿಇಟಿ: ಸರ್ಕಾರದ ಕ್ರಮಕ್ಕೆ ಖಂಡನೆ
ಕನ್ನಡಪ್ರಭ ವಾರ್ತೆ, ಗದಗ, ಡಿ. 19
ಖಾಸಗಿ ಕಾಲೇಜು ಆಡಳಿತ ಮಂಡಳಿಗೆ ಅನುಕೂಲಕ್ಕಾಗಿ ವೈದ್ಯಕೀಯ ಹಾಗೂ ತಾಂತ್ರಿಕ ಶಿಕ್ಷಣದ ಸಿಇಟಿ ಕೊಲ್ಲಲು ಹೊರಟಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ, ಗುರುವಾರ ಜೈಭೀಮ ಸೇನೆ ಗದಗ ಜಿಲ್ಲಾ ಘಟಕದ ವತಿಯಿಂದ ನಗರದ ಗಾಂಧಿವೃತ್ತದಲ್ಲಿ ಪ್ರತಿಭಟನೆ ಜರುಗಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಜೈಭೀಮ ಸೇನಾದ ಅಧ್ಯಕ್ಷ ಗಣೇಶ ಹುಬ್ಬಳ್ಳಿ ಮಾತನಾಡಿ, ಅನ್ನಭಾಗ್ಯ, ಕ್ಷೀರಭಾಗ್ಯ, ಶಾದಿಭಾಗ್ಯದ ಮೂಲಕ ಬಡವರ ಕಷ್ಟ ನೀಗಿಸುವುದಾಗಿ ಹೇಳಿದ ರಾಜ್ಯ ಸರ್ಕಾರ ಇದೇ ಬಡವ, ದಲಿತ, ರೈತಾಪಿ ಮಕ್ಕಳ, ಅಲ್ಪಸಂಖ್ಯಾತರ ಶಿಕ್ಷಣದ ಮೇಲೆ ಬರೆಹಾಕಲು ಹೊರಟಿದೆ. ಶ್ರೀಮಂತ ಮಕ್ಕಳಿಗೆ ಮಾತ್ರ ವೈದ್ಯಕೀಯ ಹಾಗೂ ತಾಂತ್ರಿಕ ಶಿಕ್ಷಣ, ಕೂಲಿ ಮಾಡುವವರ ಮಕ್ಕಳು, ಬಡವರು ಹಾಗೂ ಗ್ರಾಮೀಣ ವಿದ್ಯಾರ್ಥಿಗಳಿಗೆ ಇಲ್ಲ ಎಂಬುದು ಮುಖ್ಯಮಂತ್ರಿಗಳ ನೀತಿಯಾಗಿದೆ.
ಸಿಇಟಿ ಮುಖಾಂತರ ವೃತ್ತಿಪರ ಕೋರ್ಸ್ಗಳಿಗೆ ಹೋಗಲು ಬಡ ವಿದ್ಯಾರ್ಥಿಗಳಿಗೆ ಇನ್ನುಮುಂದೆ ವೈದ್ಯಕೀಯ ಹಾಗೂ ಎಂಜಿನಿಯರ್ ಕೋರ್ಸ್ಗಳು ಗಗನಕುಸುಮವೇ. ವೃತ್ತಿಪರ ಶಿಕ್ಷಣದ ಅವಕಾಶವನ್ನು ಪಡೆದುಕೊಳ್ಳುತ್ತಿದ್ದ ಲಕ್ಷಾಂತರ ಬಡವಿದ್ಯಾರ್ಥಿಗಳ ಕನಸನ್ನು ಖಾಸಗಿ ಕಾಲೇಜು ಆಡಳಿತ ಮಂಡಳಿಗಳ ಅನುಕೂಲಕ್ಕಾಗಿ ಸಿಇಟಿಯನ್ನು ಸಮಾಧಿ ಮಾಡಲು ರಾಜ್ಯ ಸರ್ಕಾರ ಹೊರಟಿದೆ ಎಂದು ಆರೋಪಿಸಿದರು.
ವೃತ್ತಿ ಶಿಕ್ಷಣ ಕಾಲೇಜುಗಳನ್ನು ನಡೆಸುವವರು ಹೆಚ್ಚಾಗಿ ದೊಡ್ಡ ರಾಜಕಾರಣಿಗಳಾಗಿದ್ದು, ಅವರ ಒತ್ತಡಕ್ಕೆ ಮಣಿದು ರಾಜ್ಯ ಸರ್ಕಾರ ಖಾಸಗಿ ಕಾಲೇಜುಗಳ ಆಡಳಿತ ಮಂಡಳಿಗಳ ಏಜೆಂಟರಂತೆ ವರ್ತಿಸುತ್ತಿದೆ. ಅಲ್ಪಸಂಖ್ಯಾತ, ಹಿಂದುಳಿದ ಮತ್ತು ದಲಿತ ಮಂತ್ರ ಜಪಿಸುತ್ತಿರುವ ಸಿಎಂ ಸಿದ್ದರಾಮಯ್ಯ ಅದೇ ಬಡಜನರ ಭವಿಷ್ಯದ ಮೇಲೆ ಬರೆಹಾಕಲು ಹೊರಟಿದ್ದಾರೆ. ಕಡುಬಡವರ ಹಾಗೂ ಗ್ರಾಮೀಣ ಪ್ರದೇಶದ ಪ್ರತಿಭಾವಂತ ವಿದ್ಯಾರ್ಥಿಗಳ ವೈದ್ಯಕೀಯ ಹಾಗೂ ತಾಂತ್ರಿಕ ಶಿಕ್ಷಣದ ಭವಿಷ್ಯಕ್ಕೆ ಅತ್ಯಂತ ಮಾರಕವಾಗುವ ಕಾಯ್ದೆ ಜಾರಿಗೆ ತರಲು ಹೊರಟಿರುವ ಸರ್ಕಾರದ ಕ್ರಮ ಖಂಡನೀಯ ಎಂದರು.
ಸರ್ಕಾರದ ಈ ಕೆಟ್ಟ ತೀರ್ಮಾನದಿಂದ ಸಿಇಟಿ ವ್ಯವಸ್ಥೆಯು ನಾಶವಾಗುವುದರ ಜತೆಗೆ ಸರ್ಕಾರಿ ಕೋಟಾದ ಸೀಟುಗಳನ್ನು ಖಾಸಗಿ ಕಾಲೇಜು ಆಡಳಿತ ಮಂಡಳಿಗಳಿಗೆ ಮಾರಾಟ ಮಾಡಿದಂತಾಗುತ್ತದೆ.
ಖಾಸಗಿ ಶಿಕ್ಷಣ ಸಂಸ್ಥೆಯವರಿಗೆ ಬಡ ಮಕ್ಕಳ ಶೈಕ್ಷಣಿಕ ಭವಿಷ್ಯಕ್ಕಿಂತ ಹಣ ಮಾಡುವುದೇ ದಂಧೆಯಾಗಿಬಿಟ್ಟಿದೆ. ಆದ್ದರಿಂದ ಬಡಮಕ್ಕಳ ವಿದ್ಯಾರ್ಥಿಗಳನ್ನು ವೈದ್ಯಕೀಯ ಹಾಗೂ ತಾಂತ್ರಿಕ ಶಿಕ್ಷಣದ ಅವಕಾಶದಿಂದ ದೂರವಿಡುವ ಈ ಕಾಯ್ದೆಯನ್ನು ರಾಜ್ಯ ಸರ್ಕಾರ ಹಿಂಪಡೆಯಬೇಕು. ಇಲ್ಲದೇ ಹೋದಲ್ಲಿ ಸಂಘಟನೆಯ ನೇತೃತ್ವದಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದರು. ಪ್ರತಿಭಟನೆಯಲ್ಲಿ ಉಪಾಧ್ಯಕ್ಷ ಅಶೋಕ ಹಾದಿಮನಿ, ರಾಘವೇಂದ್ರ ಪರಾಪುರ ಮುಂತಾದವರು ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

