ಗದಗ

ಮಕ್ಕಳಿಗೆ ಸತ್ವಯುತ ಶಿಕ್ಷಣ ಅವಶ್ಯ: ಬಸವರಾಜ ಹೊರಟ್ಟಿ

Published On :

ಗದಗ: ಸತ್ವಯುತ ಶೈಕ್ಷಣಿಕ ಪರಿಸರದಿಂದ ಉತ್ತಮ ಪ್ರತಿಭೆ ಹೊರಹೊಮ್ಮಲು ಸಾಧ್ಯವಾಗಲಿದೆ ಎಂದು ವಿಪ ಸದಸ್ಯ ಬಸವರಾಜ ಹೊರಟ್ಟಿ ಹೇಳಿದರು.
ಅವರು ಶನಿವಾರ ನಗರದ ಜಿ.ಡಿ. ಶಹಾ ಲಯನ್ಸ್ ಪ್ರೌಢಶಾಲೆಯ ಸಭಾಭವನದಲ್ಲಿ ಜಿಪಂ, ಸಾರ್ವಜನಿಕ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಮಕ್ಕಳ ಪ್ರತಿಭಾ ಕಾರಂಜಿ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಬಾಲ್ಯಾವಸ್ಥೆಯಲ್ಲಿಯೇ ಮಕ್ಕಳಲ್ಲಿ ಅಡಗಿರುವ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸುವ ಕಾರ್ಯ ಪಾಲಕರು ಮತ್ತು ಶಿಕ್ಷಕರಿಂದ ಜರುಗಬೇಕಿದೆ. ಮಕ್ಕಳನ್ನು ಶಾಲೆಯತ್ತ ಆಕರ್ಷಿಸುವ ಕಾರ್ಯ ಶಿಕ್ಷಕರಿಂದ ಮತ್ತು ಇಲಾಖೆಯ ವತಿಯಿಂದ ನಿರಂತರವಾಗಿ ಜರುಗಬೇಕಿದ್ದು, ಪ್ರತಿಭಾ ಕಾರಂಜಿ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಸಹಕಾರಿಯಾಗಿದೆ. ಪರಿಸರ ಮತ್ತು ಅನುವಂಶಿಕತೆ ಎಲ್ಲ ಮಕ್ಕಳಲ್ಲೂ ಅಡಕವಾಗಿದ್ದು, ಸಂಶೋಧಿಸುವ ಕಾರ್ಯಕ್ಕೆ ಶಿಕ್ಷಕರು ಪ್ರಾಮುಖ್ಯ ನೀಡಬೇಕು.  ಸರ್ಕಾರ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ನಿರಂತರ ಮೌಲ್ಯಮಾಪನಕ್ಕೆ ಆದೇಶಿಸಿದ್ದು, ಇದು ವಿದ್ಯಾರ್ಥಿಗಳ ಭವಿಷ್ಯಕ್ಕೆ ಮಾರಕವಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಉತ್ತಮ ವಿದ್ಯಾರ್ಥಿ ಮತ್ತು ಶೈಕ್ಷಣಿಕ ಪ್ರಗತಿಗೆ ಅನುಕೂಲಕರವಾಗುವ ಯೋಜನೆಗಳತ್ತ ಗಮನಹರಿಸಬೇಕು ಎಂದರು. ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಿ.ವಿ. ರಾಜೇಂದ್ರಪ್ರಸಾದ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿ, ಪ್ರತಿಭಾ ಕಾರಂಜಿಯಲ್ಲಿ ಉತ್ತಮ ಪ್ರತಿಭೆ ಹೊರಹೊಮ್ಮಿಸಿದ ವಿದ್ಯಾರ್ಥಿಗಳು ಜನವರಿ 22 ರಂದು ಬಿಜಾಪುರದಲ್ಲಿ ಜರುಗುವ ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.  ಜಿಪಂ ಅಧ್ಯಕ್ಷೆ ಕಮಲವ್ವ ಸಜ್ಜನರ, ಉಪಾಧ್ಯಕ್ಷ ರಮೇಶ ಮುಂದಿನಮನಿ, ತಾಪಂ ಅಧ್ಯಕ್ಷ ಹನುಮಂತಪ್ಪ ಇಂಗಳಹಳ್ಳಿ, ಲಯನ್ಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಜಿ.ಡಿ. ಉತ್ತರಕರ, ಸಾರ್ವಜನಿಕ ಶಿಕ್ಷಣ ಇಲಾಖೆಯ ಅಭಿವೃದ್ಧಿ ವಿಭಾಗದ ಉಪನಿರ್ದೇಶಕ ಬಿ.ಎಸ್. ರಘುವೀರ, ಆರ್.ಎಸ್. ಬುರಡಿ, ಎಸ್.ಆರ್. ಹೂಗಾರ ಮುಂತಾದವರು ಪಾಲ್ಗೊಂಡಿದ್ದರು. ಎಸ್.ಎಸ್. ಗೌಡರ ಪ್ರಾರ್ಥಿಸಿದರು. ಎ.ವಿ. ಪ್ರಭು ನಿರೂಪಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಐ.ಬಿ. ಬೆನಕೊಪ್ಪ ವಂದಿಸಿದರು. ನಂತರ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಹಾಗೂ ಶೈಕ್ಷಣಿಕ ಚಟುವಟಿಕೆ ಜರುಗಿದವು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.