ಗದಗ

ಪರಿಸರ ಕಾಳಜಿ ಪ್ರತಿಯೊಬ್ಬರ ಕರ್ತವ್ಯ

Published On :

 ಶಿರಹಟ್ಟಿ: ಗ್ರಾಮಗಳಲ್ಲಿ ಪ್ರತಿಯೊಬ್ಬರೂ ನೈರ್ಮಲ್ಯದ ಕಡೆ ಹೆಚ್ಚು ಗಮನಕೊಡಬೇಕಲ್ಲದೆ, ನಮ್ಮ ಸುತ್ತಮುತ್ತಲಿನ ಪರಿಸರವನ್ನು ಕಾಯ್ದುಕೊಳ್ಳಬೇಕು. ಆರೋಗ್ಯದ ಹಿತದೃಷ್ಟಿಯಿಂದ ವೈಯಕ್ತಿಕ ಶೌಚಾಲಯ ಕಟ್ಟಿಕೊಳ್ಳಲು ಸರ್ಕಾರ ಸಹಾಯಧನ ನೀಡುತ್ತಿದ್ದು, ಅದರ ಲಾಭ ಪಡೆದುಕೊಳ್ಳಬೇಕು ಎಂದು ನಿರ್ಮಲ ಭಾರತ ಅಭಿಯಾನದ ಜಿಲ್ಲಾ ಸಹಾಯಕ ಯೋಜನಾಧಿಕಾರಿ ಡಿ.ವಿ. ಬಂಡಿವಾಡ ಹೇಳಿದರು.
ಈಚೆಗೆ ತಾಲೂಕು ಪಂಚಾಯಿತಿ ಸಾಮರ್ಥ್ಯ ಸೌಧದಲ್ಲಿ ನಿರ್ಮಲ ಭಾರತ ಅಭಿಯಾನ ಯೋಜನೆ ಅಡಿಯಲ್ಲಿ ಗೌಂಡಿ, ಮೇಸ್ತ್ರಿಗಳಿಗೆ ಏರ್ಪಡಿಸಿದ್ದ ಒಂದು ದಿನದ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಸಾಕಷ್ಟು ಬೆಳವಣಿಗೆಯಾಗಿದ್ದರೂ ಗ್ರಾಮಗಳು ಸುಧಾರಣೆಯಾಗದಿರುವ ಬಗ್ಗೆ ಬೇಸರ ವ್ಯಕ್ತಪಡಿಸಿದ ಅವರು, ಗಾಂಧೀಜಿಯವರ ಗ್ರಾಮ ಸ್ವರಾಜ್ಯದ ಪರಿಕಲ್ಪನೆ  ಸಾಕಾರಗೊಳ್ಳಬೇಕಾದರೆ ಗ್ರಾಮಗಳ ಅಭಿವೃದ್ಧಿ ಅಷ್ಟೆ ಮಹತ್ವ ಎಂದರು. ರಾಜ್ಯದಲ್ಲಿ ಒಟ್ಟು 6 ಲಕ್ಷ ಶೌಚಾಲಯ ಕಟ್ಟುವ ಗುರಿ ಹೊಂದಲಾಗಿದ್ದು, ಈಗಾಗಲೇ ರಾಜ್ಯಮಟ್ಟದಲ್ಲಿ ಶೇ. 50ರಷ್ಟು ಗುರಿ ಸಾಧನೆ ಮಾಡಲಾಗಿದೆ. ಬಡವ, ಶ್ರೀಮಂತ ಎನ್ನದೇ ಎಲ್ಲ ವರ್ಗದ ಜನರು ಆರೋಗ್ಯವಂತರಾಗಿರಲು ಹಾಗೂ ತಾವು ವಾಸಿಸುವ ಪ್ರದೇಶದಲ್ಲಿ ಉತ್ತಮ ಪರಿಸರ ಕಾಯ್ದುಕೊಂಡು ಕಡ್ಡಾಯವಾಗಿ ಶೌಚಾಲಯ ಮತ್ತು ಸ್ನಾನಗೃಹ ನಿರ್ಮಿಸಿಕೊಳ್ಳಬೇಕು ಎಂದು ಹೇಳಿದರು.
ತಾಪಂ ಅಧಿಕಾರಿ ವೈ. ಎಲ್. ಹಂಪಣ್ಣ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಗ್ಗೂಡಿ ತಾಲೂಕಿನ 24 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 7,920 ಶೌಚಾಲಯಗಳನ್ನು ನಿರ್ಮಿಸುವ ಗುರಿ ಹೊಂದಿದ್ದು, ಸದ್ಯ ತಾಲೂಕಿನಲ್ಲಿ 2 ಸಾವಿರ ಶೌಚಾಲಯಗಳನ್ನು ಮಾತ್ರ ನಿರ್ಮಿಸಿಕೊಳ್ಳಲಾಗಿದೆ. ಶೇ. 30ರಷ್ಟು ಮಾತ್ರ ಸಾಧನೆ ಹೊಂದಿದ್ದು, ಇನ್ನೂ ಹೆಚ್ಚು ಕುಟುಂಬಗಳು ವೈಯಕ್ತಿಕ ಶೌಚಾಲಯ ನಿರ್ಮಿಸಿಕೊಳ್ಳಬೇಕಿದೆ ಎಂದರು.
ಕೇಂದ್ರ ಮತ್ತು ರಾಜ್ಯ ಸರ್ಕಾರ ಈ ಯೋಜನೆ ಜಾರಿಗೆ ತಂದಿದ್ದು, ಶೌಚಾಲಯ ನಿರ್ಮಿಸಿಕೊಳ್ಳಲು ಒಬ್ಬ ಫಲಾನುಭವಿಗೆ ರು. 9,200 ಪ್ರೋತ್ಸಾಹಧನ ನೀಡುತ್ತಿದೆ. ಯೋಜನೆಯ ಸದುಪಯೋಗ ಪಡೆಯಬೇಕು. ತಾಲೂಕಿನ ನಾಗರಮಡುವು ಗ್ರಾಮದಲ್ಲಿ ಮಹಿಳಾ ಸಂಘಟನೆಯವರೇ ಒಂದುಗೂಡಿ 225 ವೈಯಕ್ತಿಕ ಶೌಚಾಲಯ ನಿರ್ಮಿಸಿಕೊಂಡು ಮಾದರಿಯಾಗಿದ್ದು, ಈ ಸಾಧನೆಗೆ ಎಲ್ಲ ಗ್ರಾಮಗಳ ಜನತೆ ಆಸಕ್ತಿ ತೋರಬೇಕು ಎಂದರು. ತಾಪಂ ವ್ಯವಸ್ಥಾಪಕ ಟಿ.ವಿ. ಹಕ್ಕಾಪಕ್ಕಿ, ಯೋಜನೆಯ ಜಿಲ್ಲಾ ಸಮಾಲೋಚನಾ ಅಧಿಕಾರಿ ಎಚ್.ಎಫ್. ಕೂಸಣ್ಣವರ, ಸುರೇಶ ಕಪ್ಪತ್ತನವರ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.