ಗದಗ

ಜಿಲ್ಲೆ ಸಮಗ್ರ ಅಭಿವೃದ್ಧಿ: ಬಂಡಿ

Published On :

ಕನ್ನಡಪ್ರಭ ವಾರ್ತೆ, ಗದಗ, ಜ. 26
ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸರ್ಕಾರವು ಪ್ರಥಮ ಪ್ರಾಶಸ್ತ್ಯ ನೀಡುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕಳಕಪ್ಪ ಬಂಡಿ ಹೇಳಿದರು.
ಅವರು ಶನಿವಾರ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ ಜರುಗಿದ 64ನೇ  ಗಣರಾಜ್ಯೋತ್ಸವ ದಿನಾಚರಣೆ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
65 ವರ್ಷಗಳಲ್ಲಿ ನಮ್ಮದೇಶ ಎಲ್ಲ ರಂಗಗಳಲ್ಲಿ ಸಾಕಷ್ಟು ಅಭಿವೃದ್ಧಿ ಸಾಧಿಸಿದೆ. ಇಂದು ಜಗತ್ತಿನಲ್ಲಿಯೇ ಅತ್ಯಂತ ದೊಡ್ಡದಾದ ಪ್ರಜಾಪ್ರಭುತ್ವವನ್ನು ಹೊಂದಿದ ರಾಷ್ಟ್ರವಾಗಿದೆ. ಕರ್ನಾಟಕ ರಾಜ್ಯವನ್ನು ರಾಷ್ಟ್ರದಲ್ಲಿಯೇ ಮಾದರಿ ರಾಜ್ಯವನ್ನಾಗಿ ಮಾಡಬೇಕೆಂದು ಸರ್ಕಾರ ಅನೇಕ ಅಭಿವೃದ್ಧಿ ಯೋಜನೆಗಳನ್ನು ಹಮ್ಮಿಕೊಂಡಿದೆ. ಅವು ಯಶಸ್ವಿಯಾಗಬೇಕಾದರೆ ಅಧಿಕಾರಿಗಳು ಹಾಗೂ ಸಾರ್ವಜನಿಕರು ಸಹಕಾರ ನೀಡಬೇಕಾಗಿದೆ.
ಮುಂಡರಗಿ ತಾಲೂಕಿನ 55 ಸಾವಿರ ಎಕರೆ ಜಮೀನುಗಳಿಗೆ ನೀರಾವರಿ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಈಗಾಗಲೇ ಮುಂಡವಾಡ ಮತ್ತು ಹಮ್ಮಿಗಿ ಘಟಕದಿಂದ 2500 ಎಕರೆ ಜಮೀನಿಗೆ ಸೌಲಭ್ಯ ಒದಗಿಸಲು ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಉಳಿದಂತೆ 2 ಮತ್ತು 3 ನೇ ಘಟಕಗಳ ಕಾಮಗಾರಿಗಳು ಪ್ರಗತಿಯಲ್ಲಿವೆ. 3 ಘಟಕಗಳಿಗೆ ಸರ್ಕಾರದಿಂದ ರು. 612.13 ಕೋಟಿ ಖರ್ಚು ಮಾಡಲಾಗಿದೆ. 2013ರ ಅಂತ್ಯದೊಳಗಾಗಿ ಈ ಯೋಜನೆಯನ್ನು ಪೂರ್ಣಗೊಳಿಸುವುದಪ ಸರ್ಕಾರದ ಉದ್ದೇಶವಾಗಿದೆ.
ನಗರೋತ್ಥಾನ ಯೋಜನೆ: ನಗರೋತ್ಥಾನ ಯೋಜನೆಯಡಿಯಲ್ಲಿ ಜಿಲ್ಲೆಗೆ 70 ಕೋಟಿ ಅನುದಾನ ನೀಡಿದ್ದು, ಟೆಂಡರ್ ಕರೆಯಲಾಗಿದೆ. 2012-13ನೇ ಸಾಲಿನಲ್ಲಿ ಸರ್ಕಾರವು ಮುಖ್ಯಮಂತ್ರಿ ಗ್ರಾಮೀಣ ರಸ್ತೆ ಅಭಿವೃದ್ಧಿ ಯೋಜನೆಯಡಿ ರು. 223.58 ಲಕ್ಷ ಬಿಡುಗಡೆ ಮಾಡಿದೆ. ಅಭಿವೃದ್ಧಿ ಅನುದಾನದಲ್ಲಿ ಜಿಪಂಗೆ ರು. 200 ಲಕ್ಷ ಮತ್ತು ಪ್ರತಿ ತಾಪಂಗೆ ತಲಾ 100 ಲಕ್ಷ ವಿವಿಧ ಅಭಿವೃದ್ಧಿಗೆ ಕಾಮಗಾರಿಗಳಿಗೆ ಬಿಡುಗಡೆ ಮಾಡಿದೆ.
ಎನ್‌ಆರ್‌ಇಜಿ ಯೋಜನೆಯಡಿಯಲ್ಲಿ 2012-13ನೇ ಸಾಲಿಗೆ ಜಿಲ್ಲೆಗೆ 47.22 ಕೋಟಿಗಳ ಕ್ರಿಯಾ ಯೋಜನೆಗೆ ಮಂಜೂರಾತಿ ನೀಡಿದೆ. ರಾಷ್ಚ್ರೀಯ ಕುಡಿವ ನೀರಿನ ಯೋಜನೆಯಡಿಯಲ್ಲಿ ಜಿಲ್ಲೆಗೆ ರು. 41.10 ಕೋಟಿ ಅನುದಾನ ಹಂಚಿಕೆಯಾಗಿದೆ. 45 ಗ್ರಾಮಗಳಲ್ಲಿ ಶುದ್ಧ ಕುಡಿವ ನೀರಿನ ವ್ಯವಸ್ಥೆ ಮಾಡಲು ಸರ್ಕಾರ ಮಂಜೂರಾತಿ ನೀಡಿದೆ. ಸುವರ್ಣ ಗ್ರಾಮೋದಯ ಯೋಜನೆಯಡಿಯ 5 ಹಂತದಲ್ಲಿ 27 ಗ್ರಾಮಗಳನ್ನು ಆಯ್ಕೆ ಮಾಡಲಾಗಿದ್ದು, ರು. 1805 ಲಕ್ಷ ಅನುದಾನ ಹಂಚಿಕೆಯಾಗಿದೆ. ಇಂದಿರಾ ಆವಾಸ ಯೋಜನೆಯಡಿ 2012-13 ಸಾಲಿಗಾಗಿ 2543 ಮನೆಗಳು ಹಂಚಿಕೆಯಾಗಿವೆ. ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡಿದೆ. ಗ್ರಾಮೀಣ ನಿವೇಶನ ಯೋಜನೆಯಡಿಯಲ್ಲಿ ಗುಡಿಸಲು ಮನೆಮುಕ್ತ ಜಿಲ್ಲೆಯ ನಿರ್ಮಾಣಕ್ಕಾಗಿ 5300 ಫಲಾನುಭವಿಗಳಿಗೆ ನಿವೇಶನ ಒದಗಿಸಲು 266 ಎಕರೆ ಭೂಮಿಯನ್ನು ಖರೀದಿಸಿ 5300 ನಿವೇಶನಗಳನ್ನು ವಿತರಿಸಲು ಕ್ರಮ.
ಜಿಲ್ಲೆಯ ವಿವಿಧ ಅಭಿವೃದ್ಧಿ ಯೋಜನೆಗಳ ಕುರಿತು ಮಾಹಿತಿ ನೀಡಿದರು. ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ನಂತರ ವಿವಿಧ ಇಲಾಖೆಗಳಲ್ಲಿ ಸಾಧನೆ ಮಾಡಿದ ಮಹನೀಯರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಶಾಸಕ ಶ್ರೀಶೈಲಪ್ಪ ಬಿದರೂರ, ಎಸ್ಪಿ ಎಸ್.ಜಿ. ಶರಣಪ್ಪ, ಡಿ.ಸಿ. ಪಾಂಡುರಂಗ ನಾಯಕ, ಜಿಪಂ ಅಧ್ಯಕ್ಷ ಎಂ.ಎಸ್.ಪಾಟೀಲ, ರಮೇಶ ಮುಂದಿನಮನಿ, ಸಿಇಓ ವೀರಣ್ಣ ತುರಮರಿ, ನಗರಸಭೆ ಅಧ್ಯಕ್ಷ ಶಿವಣ್ಣ ಮುಳಗುಂದ, ಮಾಜಿ ಶಾಸಕ ಡಿ.ಆರ್.ಪಾಟೀಲ, ಎಸ್.ಎಸ್.ಪಾಟೀಲ ಉಪಸ್ಥಿತರಿದ್ದರು. ದತ್ತಪ್ರಸನ್ನ ಪಾಟೀಲ ನಿರೂಪಿಸಿ, ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.