ಗದಗ

ನಾಳೆ 'ಮಠಾಧೀಶರ ನಡೆ ಕಳಸಾ ಬಂಡೂರಿ ಕಡೆ'

Published On :





ಗದಗ: ಜಿಲ್ಲೆಯ ನರಗುಂದದಲ್ಲಿ ಜ. 30ರಂದು ಬೆಳಗ್ಗೆ 11ಕ್ಕೆ ಪಟ್ಟಣದ ಡಾ. ಸಿ.ಕೆ. ಪಾಟೀಲ ಜಾಗೆಯಲ್ಲಿ ರಾಜ್ಯದ ಸುಮಾರು 50ಕ್ಕೂ ಹೆಚ್ಚು ಮಠಾಧೀಶರು, 4 ಜಿಲ್ಲೆಯ 9 ತಾಲೂಕುಗಳ ರೈತರೊಂದಿಗೆ ಕಳಸಾ ಬಂಡೂರಿ ಕಾಮಗಾರಿಗಳನ್ನು ತೀವ್ರಗತಿಯಲ್ಲಿ ಪ್ರಾರಂಭಿಸುವಂತೆ ಆಗ್ರಹಿಸಿ 'ಮಠಾಧೀಶರ ನಡೆ ಕಳಸಾ ಬಂಡೂರಿ ಕಡೆ' ಎಂಬ ನೂತನ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕಳಸಾ ಬಂಡೂರಿ ಮಲಪ್ರಭಾ ಜೋಡಣಾ ಯುವ ಹೋರಾಟ ಕೇಂದ್ರ ಸಮಿತಿ ಅಧ್ಯಕ್ಷ ವಿಜಯ ಕುಲಕರ್ಣಿ ಹೇಳಿದರು.
ಸೋಮವಾರ ನಗರದಲ್ಲಿ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಕಳೆದ 40 ವರ್ಷಗಳಿಂದ ಕಳಸಾ ಬಂಡೂರಿ ಕಾಮಗಾರಿ ಪೂರ್ಣಗೊಳಿಸುವಂತೆ ಆಗ್ರಹಿಸಿ ಹೋರಾಟ ನಡೆಸುತ್ತಿದ್ದರೂ, ರಾಜಕಾರಣಿಗಳು ಕಾಮಗಾರಿಗೆ ಪೂರ್ಣಗೊಳಿಸದಿರುವುದು ಈ ಭಾಗದ ರೈತರ ಆಕ್ರೋಶಕ್ಕೆ ಕಾರಣವಾಗಿದೆ. ಗದಗ ಜಿಲ್ಲೆಯ ರೈತರ ಜೀವನಾಡಿಯಾಗಿರುವ ಈ ಯೋಜನೆ ಪೂರ್ಣಗೊಂಡಲ್ಲಿ ಜಿಲ್ಲೆಯ ರೈತರಿಗೆ ಸಹಕಾರಿಯಾಗಲಿದೆ. ಆದರೆ, ಕೆಲ ರಾಜಕಾರಣಿಗಳು ತಮ್ಮ ರಾಜಕೀಯ ಬೆಳೆ ಬೇಯಿಸಿಕೊಳ್ಳುವ ಉದ್ದೇಶದಿಂದ ಈ ಕಾಮಗಾರಿಗೆ ಹಿನ್ನಡೆ ಮಾಡುತ್ತಿರುವುದರಿಂದ ರೈತನು ಸಂಕಷ್ಟಕ್ಕೆ ಸಿಲುಕಿದ್ದಾನೆ. ಇದನ್ನರಿತು ಜ. 30ರಂದು ನರಗುಂದದಲ್ಲಿ 4 ಜಿಲ್ಲೆಯ ಎಲ್ಲ ಮಠಾಧೀಶರನ್ನೊಳಗೊಂಡಂತೆ ಸಾವಿರಾರು ಸಂಖ್ಯೆಯ ರೈತರೊಂದಿಗೆ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ. 15-20 ಸಾವಿರ ಜನ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದು, ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಎಚ್ಚರಿಸಲಾಗುವುದು ಎಂದರು.
ಶ್ರೀರಾಮಸೇನೆ ಬೆಂಬಲ
ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದ ಶ್ರೀರಾಮ ಸೇನೆ ರಾಜ್ಯಾಧ್ಯಕ್ಷ ಪ್ರಮೋದ ಮುತಾಲಿಕ ಮಾತನಾಡಿ, ಜ. 30ರಂದು ನರಗುಂದದಲ್ಲಿ ರೈತರು ಹಮ್ಮಿಕೊಂಡಿರುವ ಬೃಹತ್ ಸಮಾವೇಶಕ್ಕೆ ಶ್ರೀರಾಮಸೇನೆ ಸಂಪೂರ್ಣ ಬೆಂಬಲ ಸೂಚಿಸಲಿದೆ.
40 ವರ್ಷಗಳಿಂದ ಜಿಲ್ಲೆಯ ರೈತರು ಕಳಸಾ-ಬಂಡೂರಿ ಯೋಜನೆ ಪೂರ್ಣಗೊಳಿಸುವಂತೆ ಆಗ್ರಹಿಸಿ ಹಲವು ರೀತಿಯ ಪ್ರತಿಭಟನೆ ಮಾಡಿದ್ದಾರೆ. ಆದರೂ ಕೇಂದ್ರ ಮತ್ತು ರಾಜ್ಯ ಸರ್ಕಾರವು ಈ ಯೋಜನೆಗೆ ಹಿನ್ನಡೆ ಮಾಡುತ್ತಿವೆ. ಇದಕ್ಕೆ ಮೂಲ ಕಾರಣ ಜಿಲ್ಲೆಯ ರಾಜಕಾರಣಿಗಳಾಗಿದ್ದು, ಮುಂಬರುವ ದಿನಗಳಲ್ಲಿ ಜಿಲ್ಲೆಯ ಜನತೆ ರಾಜಕಾರಣಿಗಳಿಗೆ ತಕ್ಕಪಾಠ ಕಲಿಸಲಿದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ದಲಿತ ಸಂಘಟನೆ ಮುಖಂಡ ಟಿ.ನಾರಾಯಣಗೌಡ ಸೇರಿದಂತೆ ಕಳಸಾ-ಬಂಡೂರಿ ಹೋರಾಟ ವೇದಿಕೆ ಪದಾಧಿಕಾರಿಗಳು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.