ಮಕ್ಕಳ ಹಬ್ಬದಿಂದ ಪ್ರತಿಭೆ ಅನಾವರಣ

Updated on: 


ಕನ್ನಡಪ್ರಭ ವಾರ್ತೆ, ಗದಗ, ಜ. 29
ಮಕ್ಕಳಲ್ಲಿ ಹುದುಗಿರುವ ಸುಪ್ತ ಪ್ರತಿಭೆ ಹೊರಹಾಕಲು ಬಾಲವಿಕಾಸ ಅಕಾಡೆಮಿ ವತಿಯಿಂದ ಹಮ್ಮಿಕೊಂಡಿರುವ ಮಕ್ಕಳ ಹಬ್ಬ ಕಾರ್ಯಕ್ರಮವು ಸಹಕಾರಿಯಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕಳಕಪ್ಪ ಬಂಡಿ ಹೇಳಿದರು.
ಅವರು ಮಂಗಳವಾರ ನಗರದ ಕನಕ ಭವನದಲ್ಲಿ ರಾಜ್ಯ ಬಾಲವಿಕಾಸ ಅಕಾಡೆಮಿ ಧಾರವಾಡ, ಜಿಪಂ ಗದಗ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಗದಗ ಇವುಗಳ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಮಕ್ಕಳ ಹಬ್ಬ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಮಕ್ಕಳಲ್ಲಿನ ಪ್ರತಿಭೆಯನ್ನು ಹಾಗೂ ಅವರಿಗಾಗುವ ಅನ್ಯಾಯದ ವಿರುದ್ಧ ಹೋರಾಡುವುದರ ಜತೆಗೆ ನ್ಯಾಯ ನೀಡುವ ಉದ್ದೇಶದಿಂದ ರೂಪಿತವಾಗಿರುವ ರಾಜ್ಯ ಬಾಲ ವಿಕಾಸ ಅಕಾಡೆಮಿಯ ಕಾರ್ಯ ಶ್ಲಾಘನೀಯ.
ಮಗುವಿನ ಬೆಳವಣಿಗೆ ಹಾಗೂ ಶ್ರೇಯಸ್ಸಿನ ಹಿಂದೆ ಪಾಲಕರು ಹಾಗೂ ಶಿಕ್ಷಕರ ಪಾತ್ರವು ಪ್ರಮುಖವಾಗಿದ್ದು, ಪಾಲಕರು ತಮ್ಮ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವುದರ ಜತೆಗೆ ಪಠ್ಯೇತರ ಚಟುವಟಿಕೆಗಳಿಗೆ ಪ್ರೋತ್ಸಾಹಿಸಬೇಕಾಗಿದೆ. ಇದರಿಂದ ಮಗುವಿನಲ್ಲಿರುವ ಪ್ರತಿಭೆ ಹೊರಬರುವ ಮೂಲಕ ಉಜ್ವಲ ಭವಿಷ್ಯಕ್ಕೆ ಸಹಕಾರಿಯಾಗುವುದು.
ಬಾಲವಿಕಾಸ ಅಕಾಡೆಮಿಯು ಬೆಂಗಳೂರು ಹೊರತುಪಡಿಸಿದರೆ ಧಾರವಾಡದಲ್ಲಿದ್ದು, ಈ ಹಿಂದೆ ಧಾರವಾಡದ ಬಾಲವಿಕಾಸ ಅಕಾಡೆಮಿಗೆ ಸೂಕ್ತ ಕಟ್ಟಡವಿಲ್ಲದಿರುವುದನ್ನು ಗಮನಿಸಿ # 5.33 ಕೋಟಿ ಅಕಾಡೆಮಿಯ ಕಟ್ಟಡಕ್ಕೆ ಬಿಡುಗಡೆಗೊಳಿಸಿದ್ದು, ಕಟ್ಟಡ ಕಾಮಗಾರಿ ಪ್ರಗತಿಯಲ್ಲಿದೆ. ಮಕ್ಕಳ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ ಶ್ರಮಿಸುತ್ತಿದ್ದು, ಇಲಾಖೆಯು ಗ್ರಾಮೀಣ ಕ್ರೀಡೆಗಳಾದ ಮಲ್ಲಕಂಬ, ರೋಪ್‌ಮಲ್ಲಕಂಬ, ಕಬಡ್ಡಿ, ಖೋಖೋ ಸೇರಿದಂತೆ ಗ್ರಾಮೀಣ ಕ್ರೀಡೆಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದ್ದು, ಮಕ್ಕಳು ಗ್ರಾಮೀಣ ಕ್ರೀಡೆಗಳಲ್ಲಿ ಭಾಗವಹಿಸಿ ಕ್ರೀಡೆಗಳನ್ನು ಬೆಳೆಸಬೇಕಾಗಿದೆ ಎಂದರು.
ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಅಧ್ಯಕ್ಷ ಮಹೇಶ ಟೆಂಗಿನಕಾಯಿಯವರು ಅಸಾಧಾರಣ ಪ್ರತಿಭೆ ತೋರಿದ ಜಿಲ್ಲೆಯ ವಿದ್ಯಾರ್ಥಿಗಳಿಗೆ ಚೆಕ್ ವಿತರಿಸಿ ಮಾತನಾಡಿ, ಬಾಲವಿಕಾಸ ಅಕಾಡೆಮಿಯು ಮಕ್ಕಳಲ್ಲಿ ಅಡಕವಾಗಿರುವ ಪ್ರತಿಭೆ ಹೊರಹಾಕುವ ಹಾಗೂ ಸಮಾಜದ ಕಟ್ಟಕಡೆಯ ಮಕ್ಕಳಿಗೂ ಸರ್ಕಾರದ ಯೋಜನೆಗಳನ್ನು ತಲುಪಿಸುವ ಉದ್ದೇಶದಿಂದ ಇಂತಹ ವಿನೂತನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಈ ಹಿಂದೆ ಡಿಸೆಂಬರ್ ತಿಂಗಳಲ್ಲಿ ಹುಬ್ಬಳ್ಳಿಯಲ್ಲಿ ವಿಕಲಚೇತನ ಮಕ್ಕಳಿಗಾಗಿ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಇಲ್ಲಿ ಸುಮಾರು 2 ಸಾವಿರಕ್ಕೂ ಅಧಿಕ ಮಕ್ಕಳು ಭಾಗವಹಿಸಿದ್ದರು.
ಈಚೆಗೆ ಬೆಂಗಳೂರಿನಲ್ಲಿ 3 ದಿನಗಳ ಕಾಲ ಮಕ್ಕಳ ಸಮ್ಮೇಳನ ಹಮ್ಮಿಕೊಳ್ಳಲಾಯಿತು. ಸುಮಾರು 4 ಸಾವಿರಕ್ಕೂ ಅಧಿಕ ಮಕ್ಕಳು ಭಾಗವಹಿಸಿದ್ದರು. ಮುಂದಿನ ದಿನಗಳಲ್ಲಿ ರಾಜ್ಯದ 2 ಕೋಟಿ ಮಕ್ಕಳಿಗೆ ಸರ್ಕಾರದ ಯೋಜನೆ ಮುಟ್ಟಿಸಲು ಪ್ರಾಮಾಣಿಕವಾಗಿ ಶ್ರಮಿಸಲಾಗುವುದು. ಇದಕ್ಕೆ ಎಲ್ಲರೂ ಸಹಕರಿಸುವಂತೆ ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಶ್ರೀಶೈಲಪ್ಪ ಬಿದರೂರ ವಹಿಸಿದ್ದರು. ಅತಿಥಿಗಳಾಗಿ ಜಿಪಂ ಅಧ್ಯಕ್ಷ ಎಂ.ಎಸ್. ಪಾಟೀಲ, ರಾಜ್ಯ ವಾಯವ್ಯ ಸಾರಿಗೆ ಇಲಾಖೆಯ ಅಧ್ಯಕ್ಷ ಎಂ.ಎಸ್. ಕರಿಗೌಡ್ರ, ಜಿಪಂ ಉಪಾಧ್ಯಕ್ಷ ರಮೇಶ ಮುಂದಿನಮನಿ, ಜಿಲ್ಲಾಧಿಕಾರಿ ಪಾಂಡುರಂಗ ನಾಯಕ, ಜಿಪಂ ಸಿಇಓ ವೀರಣ್ಣ ತುರಮರಿ, ಬಾಲವಿಕಾಸ ಅಕಾಡೆಮಿಯ ಯೋಜನಾಧಿಕಾರಿ ಮಾಲತಿ ಪೋಳ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ರಾಜೀವ ನಾಯಕ, ರಾಜೇಂದ್ರ ಗಡಾದ, ರಮೇಶ ಸಜ್ಜುಗಾರ ಮುಂತಾದವರು ಉಪಸ್ಥಿತರಿದ್ದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಎಚ್.ಎಸ್. ಪರಮೇಶ್ವರಪ್ಪ ಸ್ವಾಗತಿಸಿ, ವಂದಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com