ಶೀಘ್ರ ನೂತನ ಜಿಲ್ಲಾಸ್ಪತ್ರೆ ಪ್ರಾರಂಭ
ಕನ್ನಡಪ್ರಭ ವಾರ್ತೆ, ಗದಗ, ಜ. 30
ಈಗಾಗಲೇ ಉದ್ಘಾಟನೆಗೊಂಡಿರುವ ಗದಗ ಜಿಲ್ಲಾ ಆಸ್ಪತ್ರೆಯ ಕೆಲ ಕಾಮಗಾರಿಗಳು ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ಕಾರ್ಯಾರಂಭದಲ್ಲಿ ವಿಳಂಬವಾಗಿದ್ದು, ಮುಂಬರುವ ಮಾರ್ಚ್ ತಿಂಗಳ ಅಂತ್ಯದೊಳಗೆ ನೂತನ ಜಿಲ್ಲಾ ಆಸ್ಪತ್ರೆ ಕಾರ್ಯಾರಂಭವಾಗಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಅರವಿಂದ ಲಿಂಬಾವಳಿ ಹೇಳಿದರು.
ಅವರು ಬುಧವಾರ ನೂತನ ಜಿಲ್ಲಾ ಆಸ್ಪತ್ರೆ ಕಾಮಗಾರಿ ವೀಕ್ಷಿಸಿ ಮಾತನಾಡಿದರು. ಆಸ್ಪತ್ರೆಯ ಕಾರ್ಯಾರಂಭ ವಿಳಂಬವಾಗುತ್ತಿದೆ ಎಂಬ ಸಾರ್ವಜನಿಕರ ದೂರು ಆಲಿಸಿ, ಇಂದು ಕಾಮಗಾರಿ ವೀಕ್ಷಣೆಗೆ ಆಗಮಿಸಿದ್ದು, ಈಗಾಗಲೇ ಬಹುತೇಕ ಕಾಮಗಾರಿಗಳು ಪೂರ್ಣಗೊಳ್ಳುವ ಹಂತದಲ್ಲಿವೆ. ಇನ್ನು ಕೆಲವೇ ದಿನಗಳಲ್ಲಿ ನಗರದ ಗಾಂಧಿ ವೃತ್ತದಲ್ಲಿರುವ ಹಳೆ ಜಿಲ್ಲಾ ಆಸ್ಪತ್ರೆಯನ್ನು ಈ ನೂತನ ಜಿಲ್ಲಾ ಆಸ್ಪತ್ರೆಗೆ ಸ್ಥಳಾಂತರಿಸುವ ಮೂಲಕ ಸಾರ್ವಜನಿಕರ ಉಪಯೋಗಕ್ಕೆ ನೀಡಲಾಗುವುದು ಎಂದರು.
# 9 ಕೋಟಿ ಪ್ರಸ್ತಾವನೆ: ಈಗಾಗಲೇ ಈ ಕಾಮಗಾರಿಗೆ ಹಾಗೂ ಆಸ್ಪತ್ರೆಯಲ್ಲಿ ಶವಾಗಾರ, ರಸ್ತೆ ಸುಧಾರಣೆ ಸೇರಿದಂತೆ ಇನ್ನು ಹಲವು ಕಾಮಗಾರಿ ಕೈಗೊಳ್ಳಲು # 9 ಕೋಟಿಗಳ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಕೆಲವೇ ದಿನಗಳಲ್ಲಿ ಹಣ ಬಿಡುಗಡೆಗೊಳಿಸಿ ಕಾಮಗಾರಿ ಪೂರ್ಣಗೊಳಿಸಲಾಗುವುದು. ಹಾಗೂ ಗುಣಮಟ್ಟದ ರಸ್ತೆ ನಿರ್ಮಾಣಕ್ಕೆ ಆದ್ಯತೆ ನೀಡಲಾಗುವುದು. ಉತ್ತರ ಕರ್ನಾಟಕದಲ್ಲಿ ಗ್ರಾಮೀಣ ಭಾಗದ ಜೀವನಾಡಿಯಾಗಿರುವ ಹಲವು ಪ್ರಾಥಮಿಕ ಆರೋಗ್ಯ ಕೇಂದ್ರಗಳ ಕಟ್ಟಡಗಳು ಸಂಪೂರ್ಣವಾಗಿ ಪೂರ್ಣಗೊಂಡಿದ್ದು, ಕೆಲವೇ ದಿನಗಳಲ್ಲಿ ಉದ್ಘಾಟನೆಗೊಳಿಸಲಾಗುವುದೆಂದರು.
ವೈದ್ಯರ ಕೊರತೆಗೆ ಕ್ರಮ: ಈಗಾಗಲೇ ಬಹುತೇಕ ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆಯಿದೆ. ಸರ್ಕಾರ ಕೈಗೊಂಡ ಕಾನೂನಿನ ಅನ್ವಯ ಎಲ್ಲ ಎಂಬಿಬಿಎಸ್ ಹಾಗೂ ಪಿಜಿ ಪೂರ್ಣಗೊಳಿಸಿರುವ ವೈದ್ಯರು 1 ವರ್ಷದ ವರೆಗೆ ಗ್ರಾಮೀಣ ಭಾಗದಲ್ಲಿ ಕಡ್ಡಾಯವಾಗಿ ಸೇವೆ ಸಲ್ಲಿಸಬೇಕಾಗಿದ್ದು, ಅದರಂತೆಯೇ ಮುಂಬರುವ ಏಪ್ರಿಲ್ನಲ್ಲಿ ಎಂಬಿಬಿಎಸ್ ಹಾಗೂ ಜುಲೈನಲ್ಲಿ ಪಿಜಿ ಪೂರ್ಣಗೊಳಿಸಿದವರನ್ನು ವೈದ್ಯರನ್ನಾಗಿ ಸರ್ಕಾರ ನೇಮಿಸಿಕೊಳ್ಳುತ್ತಿದೆ. ಅಲ್ಲದೇ ರಾಜ್ಯದಲ್ಲಿ ಹಲವು ಆಸ್ಪತ್ರೆಗಳಲ್ಲಿ ನರ್ಸ್ಗಳ ಕೊರತೆಯಿದ್ದು, ಈಗ ಬಗ್ಗೆ ಸರ್ಕಾರ ಆದ್ಯತೆ ಮೇಲೆ ಕ್ರಮ ತೆಗೆದುಕೊಳ್ಳಲಿದೆ ಎಂದು ತಿಳಿಸಿದರು.
ಸಿಬ್ಬಂದಿ ವರ್ಗಾವಣೆಗೆ ಸೂಚನೆ: ನೂತನ ಜಿಲ್ಲಾ ಆಸ್ಪತ್ರೆಯ ಪಕ್ಕದಲ್ಲಿರುವ ಗಾಂಧಿ ಟಿಬಿ ಆಸ್ಪತ್ರೆಗೆ ಭೇಡಿ ನೀಡಿದ ಸಚಿವರು ಆಸ್ಪತ್ರೆಯನ್ನು ವೀಕ್ಷಿಸಿ ಮಾಹಿತಿ ಪಡೆದರು.
ಇಲ್ಲಿ ರೋಗಿಗಳ ಪ್ರಮಾಣ ಕಡಿಮೆಯಾಗಿದ್ದು, ಇಲ್ಲಿ ಸೇವೆ ಸಲ್ಲಿಸುತ್ತಿರುವ 4 ಗುತ್ತಿಗೆ ಸಿಬ್ಬಂದಿಯಲ್ಲಿ ಇಬ್ಬರು ಜಿಲ್ಲಾ ಆಸ್ಪತ್ರೆಯಲ್ಲಿ ಹೋಗಿ ಸೇವೆ ಸಲ್ಲಿಸಬಹುದಲ್ಲ ಎಂದು ಸಿಬ್ಬಂದಿಯನ್ನು ಸಚಿವರು ಪ್ರಶ್ನಿಸಿದರು.
ಇದಕ್ಕೆ ಸಿಬ್ಬಂದಿ ನಮಗೆ ಇಲ್ಲಿಯೇ ಸೇವೆ ಸಲ್ಲಿಸುವಂತೆ ಆದೇಶಿಸಲಾಗಿದೆ ಎಂದು ಸಚಿವರಿಗೆ ತಿಳಿಸಿದರು. ಇಲ್ಲಿ ರೋಗಿಗಳ ದಾಖಲಾತಿ ಪ್ರಮಾಣ ಕಡಿಮೆಯಿದ್ದು, ಇಲ್ಲಿ ಇಬ್ಬರು ಸಿಬ್ಬಂದಿ ಮಾತ್ರ ಕಾರ್ಯನಿರ್ವಹಿಸಲಿ. ಇನ್ನುಳಿದ ಇಬ್ಬರನ್ನು ಕಾಯಂಗೊಳಿಸಿಕೊಂಡು ಜಿಲ್ಲಾ ಆಸ್ಪತ್ರೆಗೆ ವರ್ಗಾಯಿಸುವಂತೆ ಜಿಲ್ಲಾ ವೈದ್ಯಾಧಿಕಾರಿಗಳಿಗೆ ಸೂಚಿಸಿದರು.
ನಂತರ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ವೈದ್ಯಾಧಿಕಾರಿ ಡಿ.ಬಿ. ಚೆನ್ನಶೆಟ್ಟಿ, ಜಿಲ್ಲಾ ಆಸ್ಪತ್ರೆಯ ಶಸ್ತ್ರಚಿಕಿತ್ಸಕ ಆರ್.ಎನ್. ಪಾಟೀಲ, ಅಭಿಯಂತರರು ಹಾಗೂ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

