ಗದಗ

ಹಾಸ್ಟೆಲ್‌ಗಳಿಗೆ ಮೂಲ ಸೌಕರ್ಯ ಒದಗಿಸಲು ಆಗ್ರಹ: ಪ್ರತಿಭಟನೆ

Published On :


ಗಜೇಂದ್ರಗಡ: ಹಾಸ್ಟೆಲ್ ವಿದ್ಯಾರ್ಥಿಗಳ ಆಹಾರ ಭತ್ಯೆ ಹೆಚ್ಚಳ ಹಾಗೂ ಮೂಲ ಸೌಕರ್ಯಗಳಿಗಾಗಿ ಒತ್ತಾಯಿಸಿ ಭಾರತ್ ವಿದ್ಯಾರ್ಥಿ ಫೆಡರೇಷನ್ ವತಿಯಿಂದ ಮಂಗಳವಾರ ಸ್ಥಳೀಯ ವಿಶೇಷ ತಹಸೀಲ್ದಾರ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ನೇತೃತ್ವ ವಹಿಸಿದ್ದ ನಗರ ಸಮಿತಿ ಕಾರ್ಯದರ್ಶಿ ಶಿವಾನಂದ ಭೋಸಲೆ ಮಾತನಾಡಿ, ಆರ್ಥಿಕವಾಗಿ, ಸಾಮಾಜಿಕವಾಗಿ ಹಿಂದುಳಿದ ದಲಿತ ಅಲ್ಪಸಂಖ್ಯಾತ ವರ್ಗವನ್ನು ಸರ್ಕಾರ ಕಳೆದ ನಾಲ್ಕುವರೆ ವರ್ಷಗಳಿಂದ ಈ ಸಮುದಾಯದ ವಿದ್ಯಾರ್ಥಿಗಳಿಗೆ ಸಮರ್ಪಕವಾಗಿ ಹಾಗೂ ಸಮಯಕ್ಕೆ ಸರಿಯಾಗಿ ವಿದ್ಯಾರ್ಥಿ ವೇತನ ಸೇರಿದಂತೆ ಸರ್ಕಾರದ ಸೌಲತ್ತುಗಳನ್ನು ನೀಡದೆ ಸಂಪೂರ್ಣವಾಗಿ ಕಡೆಗಣಿಸಿದೆ. ಜತೆಗೆ ಹಾಸ್ಟೆಲ್‌ಗಳಲ್ಲಿ ಕುಡಿಯುವ ನೀರು, ಗ್ರಂಥಾಲಯ, ಶೌಚಾಲಯಗಳಿಲ್ಲದೆ ವಿದ್ಯಾರ್ಥಿಗಳು ಪರದಾಡುವಂತಾಗಿದೆ. ಎಸ್ಸಿ, ಎಸ್ಟಿ ಮತ್ತು ಬಿಸಿಎಂ ಹಾಸ್ಟೆಲ್‌ಗಳು ಸಮಸ್ಯೆಗಳ ಆಗರವಾಗಿವೆ ಎಂದ ಅವರು ಜೈಲಿನಲ್ಲಿರುವ ಖೈದಿಗಳ ಉಟೋಪಚಾರಕ್ಕೆ ಒಬ್ಬ ಖೈದಿಗೆ ಪ್ರತಿದಿನ # 125 ರಿಂದ 150ರ ವರೆಗೆ ಖರ್ಚು ಮಾಡುತ್ತಿದ್ದು ವಿದ್ಯೆ ಕಲಿಯುವ ಪ್ರತಿಭಾವಂತ ಬಡ ವಿದ್ಯಾರ್ಥಿಗಳ ಊಟಕ್ಕೆ # 25-28 ಖರ್ಚು ಮಾಡುತ್ತಿದೆ ಎಂದು ಇಲಾಖೆಯ ಅವ್ಯವಸ್ಥೆ ವಿರುದ್ಧ ಕಿಡಿ ಕಾರಿದರು.
ಕೂಡಲೆ ಎಸ್ಸಿ, ಎಸ್ಟಿ ಮತ್ತು ಬಿಸಿಎಂ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ನೀಡಲಾಗುವ ಆಹಾರ ಭತ್ಯೆಯನ್ನು ಕೇರಳ ರಾಜ್ಯ ಮಾದರಿಯಲ್ಲಿ ತಿಂಗಳಿಗೆ ಕನಿಷ್ಟ # 1300-1500 ರವರೆಗೆ ನೀಡಬೇಕು. ರಾಜ್ಯದಲ್ಲಿ ಬಾಕಿ ಇರುವ ಪ್ರಸಕ್ತ ಸಾಲಿನ ವಿದ್ಯಾರ್ಥಿ ವೇತನ ಬಿಡುಗಡೆಗೊಳಿಸುವುದರ ಜತೆಗೆ ವಿದ್ಯಾರ್ಥಿ ವೇತನ ಹೆಚ್ಚಿಸಬೇಕು. ಹಾಸ್ಟೆಲ್ ಪ್ರವೇಶ ಬಯಸಿದ ಎಲ್ಲ ವಿದ್ಯಾರ್ಥಿಗಳಿಗೂ ಪ್ರವೇಶಾತಿ ನೀಡಬೇಕು ಹಾಗೂ ಹಾಸ್ಟೇಲ್‌ಗಳಿಗೆ ಸ್ವಂತ ಕಟ್ಟಡ ಮತ್ತು ಮೂಲ ಸೌಲಭ್ಯ ಒದಗಿಸದಿದ್ದಲ್ಲಿ ಸಂಘಟನೆಯಿಂದ ಉಗ್ರ ಪ್ರತಿಭಟನೆಗೆ ಮುಂದಾಗುತ್ತೇವೆ ಎಂದು ಎಚ್ಚರಿಸಿದರು.
ಬಳಿಕ ಸ್ಥಳಕ್ಕಾಗಮಿಸಿದ ವಿಶೇಷ ತಹಸೀಲ್ದಾರ ಅನುಪಸ್ಥಿತಿಯಲ್ಲಿ ಕಾರ್ಯಾಲಯದ ಸಿಬ್ಬಂದಿ ಪ್ರತಿಭಟನಾಕಾರರಿಂದ ಮನವಿ ಸ್ವೀಕರಿಸಿದರು. ಎಸ್.ಪಿ. ಮುರಾರಿ, ಸಕ್ರಪ್ಪ ಮಾಳೋತ್ತರ, ಗಣೇಶ ರಾಠೋಡ, ಪ್ರಕಾಶ ಹೆಳವರ, ಮೈಬು ಹವಾಲ್ದಾರ್, ರಾಮು ರಾಠೋಡ, ಕಳಕೇಶ ರಾಠೋಡ, ಆನಂದ, ತಿಮ್ಮಣ್ಣ, ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.