ಗದಗ

ಜಿಲ್ಲಾ ಬಿಜೆಪಿಯಲ್ಲಿ ಭಿನ್ನಮತ

Published On :

ಕನ್ನಡಪ್ರಭ ವಾರ್ತೆ, ಗದಗ, ಜು. 18
ವಿಧಾನಸಭಾ ಚುನಾವಣೆಯಲ್ಲಿ ಸಂಪೂರ್ಣ ಸೋತು ಕಂಗೆಟ್ಟಿರುವ ಬಿಜೆಪಿಯನ್ನು ಮತ್ತೆ ಲಯಕ್ಕೆ ತರುವ ನಿಟ್ಟಿನಲ್ಲಿ ನಾಯಕರು ಹರಸಾಹಸ ಪಡುತ್ತಿರುವ ವೇಳೆಯಲ್ಲಿ ಭಿನ್ನಮತ ತೀವ್ರವಾಗಿದೆ.
ಈಚೆಗೆ ಗದಗ ನಗರದಲ್ಲಿ ನಡೆದ ಜಿಲ್ಲಾ ಬಿಜೆಪಿ ಸಭೆಗೆ ಮುಂಡರಗಿ ಹಾಗೂ ಶಿರಹಟ್ಟಿ ತಾಲೂಕಿನ ವಿವಿಧ ಘಟಕಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರನ್ನು ಆಹ್ವಾನಿಸದೇ ಕಡೆಗಣಿಸಲಾಗಿದೆ. ಅವರು ಪಕ್ಷದಲ್ಲಿನ ಒಂದು ವರ್ಗದ ಈ ನಿರ್ಧಾರದಿಂದ ಭಿನ್ನಮತ ತೀವ್ರವಾಗಿದ್ದು, ಕೆಲವರು ಸಾಮೂಹಿಕವಾಗಿ ರಾಜಿನಾಮೆಯ ಚಿಂತನೆಯಲ್ಲಿದ್ದಾರೆ.
ಮೊದಲ ಸ್ಫೋಟ: ವಿಧಾನಸಭೆಯ ಚುನಾವಣೆಯ ನಂತರ ಪಕ್ಷದ ಸೋಲಿನ ವಿಷಯವಾಗಿ ನಾಯಕರಲ್ಲಿ ಉಂಟಾಗಿದ್ದ ಭಿನ್ನಾಭಿಪ್ರಾಯ ತೀವ್ರ ಸ್ವರೂಪ ಪಡೆದುಕೊಂಡು, ಶಿರಹಟ್ಟಿಯ ಮಾಜಿ ಶಾಸಕ ರಾಮಣ್ಣ ಲಮಾಣಿ ಹಾಗೂ ರೋಣದ ಮಾಜಿ ಶಾಸಕ ಕಳಕಪ್ಪ ಬಂಡಿ, ಗದುಗಿನ ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು, ಜಿಲ್ಲಾ ಬಿಜೆಪಿ ಅಧ್ಯಕ್ಷ ಎಂ.ಎಸ್. ಕರಿಗೌಡ್ರ ಮೇಲೆ ಕಾರ್ಯಕರ್ತರಿಂದ ಆರೋಪಗಳು ಬಹಿರಂಗವಾಗಿ ಕೇಳಿ ಬಂದಿದ್ದವು. ಪರಸ್ಪರ ಒಬ್ಬರನ್ನೊಬ್ಬರು ದೂಷಿಸುತ್ತಾ, ನಿಮ್ಮ ನಿರ್ಲಕ್ಷ್ಯದಿಂದಲೇ ಪಕ್ಷ ಸೋಲುಂಡು ಇಂದು ಕಾರ್ಯಕರ್ತರು ಅತಂತ್ರವಾಗುವಂತಾಗಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಅಲ್ಲಿಂದಲೇ ಜಿಲ್ಲಾ ಬಿಜೆಪಿಯಲ್ಲಿನ ಸ್ಥಿತಿ ಬೂದಿ ಮುಚ್ಚಿದ ಕೆಂಡದಂತೆ ಇತ್ತು.
ವರಿಷ್ಠರ ಮಧ್ಯಸ್ಥಿಕೆ: ಕಾರ್ಯಕರ್ತರು ಹಾಗೂ ನಾಯಕರಲ್ಲಿ ಉಂಟಾಗಿರುವ ಗೊಂದಲ ನಿವಾರಣೆ ಮಾಡುವುದು ಹಾಗೂ ಬರುವ ಲೋಕಸಭಾ ಚುನಾವಣೆಗೆ ಕಾರ್ಯಕರ್ತರನ್ನು ಹುರಿದುಂಬಿಸುವ ಕೆಲಸಕ್ಕೆ ಸ್ವತಃ ರಾಜ್ಯಾಧ್ಯಕ್ಷ ಪ್ರಹ್ಲಾದ ಜೋಶಿ ಪ್ರಯತ್ನಿಸಿದ್ದರು. ಅದರ ಫಲವಾಗಿಯೇ ಜುಲೈ 15ರಂದು ಗದಗ ನಗರದಲ್ಲಿ ಅವರ ಅಧ್ಯಕ್ಷತೆಯಲ್ಲಿಯೇ ಸಭೆ ನಡೆದು, ಜಿಲ್ಲಾಧ್ಯಕ್ಷರು ಸೇರಿದಂತೆ ವಿವಿಧ ಘಟಕಗಳ ಪುನರ್ ರಚನೆಗೆ ಚಿಂತನೆ ನಡೆಸಲಾಗಿದೆ. ಈ ಸಭೆಯಲ್ಲಿ ಜಿಲ್ಲಾಧ್ಯಕ್ಷರನ್ನಾಗಿ ಮಾಜಿ ಸಚಿವ ಕಳಕಪ್ಪ ಬಂಡಿ ಅವರ ಹೆಸರು ಅಂತಿಮವಾಗಿದೆ ಎನ್ನುವುದನ್ನು ಬಿಜೆಪಿಯ ಆಂತರಿಕ ವಲಯಗಳೇ ಖಚಿತಪಡಿಸುತ್ತಿವೆ.

ಕಳಕಪ್ಪ ಬಂಡಿ ಜಿಲ್ಲಾಧ್ಯಕ್ಷ
ಜು. 15ರಂದು ನಡೆದ ಪಕ್ಷದ ಪದಾಧಿಕಾರಿಗಳ ಸಭೆಯಲ್ಲಿ ಕಳಕಪ್ಪ ಬಂಡಿ ಅವರನ್ನೇ ಜಿಲ್ಲಾಧ್ಯಕ್ಷರನ್ನಾಗಿ ನೇಮಿಸಬೇಕು. ಅವರ ನೇತೃತ್ವದಲ್ಲಿ ಲೋಕಸಭಾ ಚುನಾವಣೆ ಎದುರಿಸಬೇಕು ಎನ್ನುವ ಅಭಿಪ್ರಾಯ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಅವರ ಹೆಸರನ್ನು ರಾಜ್ಯ ಕೋರ್ ಕಮಿಟಿಗೆ ಶಿಫಾರಸು ಮಾಡಲಾಗಿತ್ತು. ಗದಗ ಜಿಲ್ಲೆಯ ಪದಾಧಿಕಾರಿಗಳ ಶಿಫಾರಸನ್ನೇ ಜು. 17ರಂದು ಬೆಂಗಳೂರಿನಲ್ಲಿ ನಡೆದ ಪಕ್ಷದ ಕೋರ್ ಕಮಿಟಿ ಸಭೆಯಲ್ಲಿ ಕಳಕಪ್ಪ ಬಂಡಿ ಹೆಸರು ಅಂತಿಮಗೊಂಡಿದ್ದು, ಬಂಡಿ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಜು. 20ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ.

- ಶಿವಕುಮಾರ ಕುಷ್ಟಗಿ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.