ಗದಗ

ಸಾಮರ್ಥ್ಯ ಬಲವರ್ಧನೆಗೆ ಕಾರ್ಯಾಗಾರ: ಆವೀನ್

Published On :

ಕನ್ನಡಪ್ರಭ ವಾರ್ತೆ, ಗದಗ, ಜು. 18
ಬಾಲ ಪೊಲೀಸ್ ಮಕ್ಕಳ ಕಲ್ಯಾಣಾಧಿಕಾರಿಗಳಿಗೆ ಕಾನೂನಿನ ರೀತಿ-ನೀತಿಗಳ ಬಗ್ಗೆ ಕಾಲಕಾಲಕ್ಕೆ ಕಾರ್ಯಾಗಾರ ಹಮ್ಮಿಕೊಳ್ಳುವ ಮೂಲಕ ಮಾಹಿತಿ ನೀಡಲಾಗುತ್ತಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷ, ಜಿಲ್ಲಾ ನ್ಯಾಯಾಧೀಶ ಟಿ.ಎಚ್. ಆವೀನ್ ಹೇಳಿದರು.
ಅವರು ಬುಧವಾರ ಜಿಲ್ಲಾ ಆಡಳಿತ ಭವನದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಪೊಲೀಸ್ ಇಲಾಖೆಯಲ್ಲಿರುವ ವಿಶೇಷ ಬಾಲ ಪೊಲೀಸ್ ಘಟಕದ ಮಕ್ಕಳ ಕಲ್ಯಾಣಾಧಿಕಾರಿಗಳಿಗೆ ಅರಿವು ಹಾಗೂ ಸಾಮರ್ಥ್ಯ ಬಲವರ್ಧನೆ ಕುರಿತ 2 ದಿನದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಮಕ್ಕಳ ಕಾಯ್ದೆಗಳನ್ನು ಪೊಲೀಸ್ ಅಧಿಕಾರಿಗಳು ಸರಿಯಾದ ರೀತಿಯಲ್ಲಿ ಅರ್ಥೈಸಿಕೊಂಡು, ಕಾರ್ಯನಿರ್ವಹಣೆಯಲ್ಲಿ ಅಳವಡಿಸಿಕೊಂಡು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಿದಲ್ಲಿ ಮಕ್ಕಳ ಪ್ರಕರಣಗಳನ್ನು ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡಲು ಸಾಧ್ಯವಾಗುತ್ತದೆ. ತಮ್ಮ ಠಾಣೆಗೆ ಪ್ರಕರಣ ದಾಖಲಿಸಲು ಬಂದಾಗ ಪೊಲೀಸರು ಮಕ್ಕಳ ಸಂಬಂಧಿ ಪ್ರಕರಣಗಳನ್ನು ಯಾವ ರೀತಿ ನೋಂದಾಯಿಸಿಕೊಳ್ಳಬೇಕು, ಗಂಭೀರ ಹಾಗೂ ಸಣ್ಣ ಪ್ರಕರಣಗಳು ಬಂದಾಗ ಯಾವ ರೀತಿ ಕಾರ್ಯನಿರ್ವಹಿಸಬೇಕು. ಮಕ್ಕಳ ಸಮಸ್ಯೆಗಳ ಬಗ್ಗೆ ಸರಿಯಾದ ರೀತಿಯಲ್ಲಿ ವಿಚಾರಿಸಿದಾಗ ಪ್ರಕರಣ ವಿಲೇವಾರಿ ಸರಳವಾಗುತ್ತದೆ. ಮಕ್ಕಳ ಮೇಲೆ ಆಗುವ ದೌರ್ಜನ್ಯ ತಡೆಯಲು ಇಂತಹ ತರಬೇತಿಗಳು ಉಪಯುಕ್ತವಾಗಿದ್ದು, ಇಂತಹ ತರಬೇತಿಗಳು ಪೊಲೀಸರ ವೃತ್ತಿಪರತೆ ಹೆಚ್ಚಿಸುವಲ್ಲಿ ನೆರವಾಗಬಲ್ಲವು ಎಂದರು.
ಎಸ್ಪಿ ಡಾ. ಎಸ್.ಡಿ. ಶರಣಪ್ಪ ಮಾತನಾಡಿ, ನಗರದಲ್ಲಿರುವ ಮಕ್ಕಳಿಗೆ ಒಳ್ಳೆಯ ಶಿಕ್ಷಣ ಸಿಗುತ್ತದೆ. ಆದರೆ, ಹಳ್ಳಿಯಲ್ಲಿರುವ ಮಕ್ಕಳಿಗೆ ಒಳ್ಳೆಯ ಶಿಕ್ಷಣ ಸಿಗುತ್ತಿಲ್ಲ. ಅಷ್ಟೇ ಅಲ್ಲದೇ ಮಕ್ಕಳು ಅಪೌಷ್ಟಿಕತೆಯಿಂದ ಬಳಲಿ, ಬಾಲ ಕಾರ್ಮಿಕರಾಗಿ, ಭಿಕ್ಷಾಟನೆಗೆ ಇಳಿಯುತ್ತಾರೆ. ಇನ್ನು ಕೆಲವರು ಮಕ್ಕಳ ಮೇಲಿನ ದೌರ್ಜನ್ಯ, ಮಕ್ಕಳ ಮಾರಾಟ ಮತ್ತು ಬಾಲ್ಯ ವಿವಾಹದಂತಹ ಸಮಸ್ಯೆಗಳಿಗೆ ಸಿಲುಕುತ್ತಿದ್ದಾರೆ. ಹಾಗಾಗಿ ಬಾಲ ನ್ಯಾಯ (ರಕ್ಷಣೆ ಮತ್ತು ಪೋಷಣೆ) ಕಾಯ್ದೆ 2000 ತಿದ್ದುಪಡಿ 2006 ಈ ಕಾಯ್ದೆ ಕುರಿತು ಈ ಕಾರ್ಯಕ್ರಮದ ಮೂಲಕ ಸ್ವವಿವರ ಮಾಹಿತಿ ನೀಡುತ್ತಿರುವುದು ಪೊಲೀಸ್ ಅಧಿಕಾರಿಗಳಿಗೆ ನೆರವಾಗುತ್ತದೆ. ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿ ಕಾರ್ಯಾಗಾರದ ಸದುಪಯೋಗ ಪಡೆಯುವುದರ ಮೂಲಕ ತಮ್ಮ ನಿತ್ಯದ ಕರ್ತವ್ಯದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ಅಪರ ಜಿಲ್ಲಾಧಿಕಾರಿ ನಾಗರಾಜ ಮಾತನಾಡಿದರು. ಸಂಪನ್ಮೂಲ ವ್ಯಕ್ತಿ ಜಯರಾಜ ಪೂವಣಿ, ಜೆ.ಸಿ. ರೇಷ್ಮಿ, ರಂಗಪ್ಪ ಎನ್.ಎಸ್. ಮತ್ತು ಸೋಮಶೇಖರ ಅವರಿಂದ ಉಪನ್ಯಾಸ ಜರುಗಿತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಎಚ್.ಎಸ್. ಪರಮೇಶ್ವರಪ್ಪ ಇದ್ದರು. ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಭಾರತಿ ಶೆಟ್ಟರ್ ಸ್ವಾಗತಿಸಿದರು. ಮಲ್ಲಪ್ಪ ನಿರೂಪಿಸಿದರು. ಅನುಪಮಾ ಹಿರೇಗೌಡರ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.