ಸ್ವಾತಂತ್ರ್ಯ ದಿನಾಚರಣೆ ವ್ಯವಸ್ಥಿತವಾಗಿ ಆಗಲಿ: ಡಿಸಿ
ಗದಗ: ನಗರದಲ್ಲಿ ಸ್ವಾತಂತ್ರ್ಯ ದಿನವನ್ನು ವ್ಯವಸ್ಥಿತವಾಗಿ ಆಚರಿಸಲು ಜಿಲ್ಲಾಧಿಕಾರಿ ಎಸ್.ಟಿ. ಅಂಜನಕುಮಾರ್ ಕರೆ ನೀಡಿದರು.
ಅವರು ಈಚೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಭವನದಲ್ಲಿ ನಡೆದ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು. ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಆಗಸ್ಟ್ 15ರ ಬೆಳಗ್ಗೆ 9 ಗಂಟೆಗೆ ಸಾರ್ವಜನಿಕ ಧ್ವಜಾರೋಹಣವನ್ನು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ನೆರವೇರಿಸುವರು.
ಧ್ವಜಾರೋಹಣ ನಂತರ ಪರೇಡ್ ತಪಾಸಣೆ, ಪಥಸಂಚಲನ ಹಾಗೂ ವಂದನೆ ಸ್ವೀಕಾರ ಕಾರ್ಯಕ್ರಮ, ಶಾಲಾ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಮುಂತಾದವುಗಳನ್ನು ಹಮ್ಮಿಕೊಳ್ಳಲು ನಿರ್ಧರಿಸಲಾಯಿತು. ಜಿಲ್ಲೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಲು ತೀರ್ಮಾನಿಸಿ, ಇದಕ್ಕಾಗಿ ವಿವಿಧ ಸಮಿತಿಗಳನ್ನು ರಚಿಸಿ ಹಂಚಿಕೆ ಮಾಡಲಾಯಿತು. ಅಂದು ಸಂಜೆ 5.30 ಗಂಟೆಗೆ ಕೆ.ಎಚ್. ಪಾಟೀಲ ಸಭಾಭವನದಲ್ಲಿ ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಸಭೆಯಲ್ಲಿ ನಿರ್ಧರಿಸಲಾಯಿತು. ನಗರದ ಪ್ರಮುಖ ಸ್ಥಳಗಳಲ್ಲಿ ಧ್ವನಿವರ್ಧಕದ ಮೂಲಕ ದೇಶಭಕ್ತಿ ಗೀತೆಗಳನ್ನು ಪ್ರಚಾರ ಮಾಡಲು ನಗರಸಭೆಯ ಆಯುಕ್ತರು ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ಸೂಚಿಸಿದರು. ಆಗಸ್ಟ್ 15 ರಂದು ಬೆಳಗ್ಗೆ 7.30 ಗಂಟೆಯೊಳಗೆ ಜಿಲ್ಲೆಯ ಎಲ್ಲ ಸರ್ಕಾರಿ ಕಚೇರಿಗಳು, ಸಂಘ ಸಂಸ್ಥೆಗಳು, ಬ್ಯಾಂಕ್ ವಿಮಾ ಕಂಪನಿಗಳು, ಶಾಲಾ ಕಾಲೇಜುಗಳು, ಪಂಚಾಯಿತಿ ಕಟ್ಟಡಗಳ ಮೇಲೆ ರಾಷ್ಟ್ರ ಧ್ವಜವನ್ನು ಶಿಸ್ತು ಬದ್ಧವಾಗಿ ಹಾಗೂ ಧ್ವಜ ಸಂಹಿತೆಗೆ ಅನುಗುಣವಾಗಿ ಧ್ವಜಾರೋಹಣ ಮಾಡಲು ಜಿಲ್ಲಾಧಿಕಾರಿಗಳು ಸೂಚಿಸಿದರು. ಎಲ್ಲ ಕಚೇರಿಗಳ ಅಧಿಕಾರಿಗಳು ಮತ್ತು ಸಿಬ್ಬಂದಿ, ಶಾಲಾ ಕಾಲೇಜುಗಳ ಶಿಕ್ಷಕರು ಮತ್ತು ಅಧಿಕಾರಿಗಳು ಅಂದು ಬೆಳಗ್ಗೆ 8.30 ರೊಳಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಹಾಜರಿರಲು ಸೂಚಿಸಿದರು. ಶಾಲಾ ಮಕ್ಕಳ ಸಂಚಾರಕ್ಕಾಗಿ ಸೂಕ್ತ ಸಾರಿಗೆ ವ್ಯವಸ್ಥೆ ಮಾಡಲು ವಾಕರಾರ ಸಂಸ್ಥೆ ಗದಗ ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ, ಕುಡಿಯುವ ನೀರಿನ ವ್ಯವಸ್ಥೆ , ಸಿಹಿ ಹಂಚಿಕೆ, ವೇದಿಕೆ ನಿರ್ಮಾಣ, ತಳಿರು ತೋರಣ, ಪೊಲೀಸ್ ಬಂದೋಬಸ್ತ್, ತುರ್ತು ಚಿಕಿತ್ಸೆ ಸೇರಿದಂತೆ ವಿವಿಧ ವ್ಯವಸ್ಥೆಗಾಗಿ ಸಭೆಯಲ್ಲಿ ಚರ್ಚಿಸಿ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ನಾಗರಾಜ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಎಸ್.ಡಿ. ಶರಣಪ್ಪ, ಉಪವಿಭಾಗಾಧಿಕಾರಿ ಇಸ್ಲಾವುದ್ದೀನ ಗದ್ಯಾಳ, ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

