ಪಕ್ಷೇತರರದ್ದೇ ಚಿಂತೆ
-ಎಸ್.ಜಿ. ತೆಗ್ಗಿನಮನಿ
ಕನ್ನಡಪ್ರಭ ವಾರ್ತೆ, ನರಗುಂದ, ಮಾ. 1
ಗದಗ ಜಿಲ್ಲೆಯಲ್ಲಿಯೇ ರಾಜಕೀಯವಾಗಿ ತೀವ್ರ ಕುತೂಹಲ ಕೆರಳಿಸಿರುವ ತಾಲೂಕು ಬಂಡಾಯದ ನಾಡೆಂದು ಕರೆಯುವ ನರಗುಂದ. ಪುರಸಭೆ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಗಳಿಂದ ಪ್ರಮುಖ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್, ಬಿಎಸ್ಆರ್ ಕಾಂಗ್ರೆಸ್, ಜೆಡಿಎಸ್ ಅಭ್ಯರ್ಥಿಗಳಿಗೆ ಸೋಲಿನ ಭಯ ಕಾಡತೊಡಗಿದೆ.
ಪುರಸಭೆಯ 23 ವಾರ್ಡ್ಗಳಿಗೆ ಹಿಂದಿನ ಚುನಾವಣೆಯಲ್ಲಿ ಬಿಜೆಪಿ 14, ಕಾಂಗ್ರೆಸ್ 8, ಜೆಡಿಎಸ್ ಓರ್ವ ಅಭ್ಯರ್ಥಿ ಆಯ್ಕೆಯಾಗಿದ್ದರು. ಪ್ರಸಕ್ತ ಚುನಾವಣೆಯಲ್ಲಿ 23 ವಾರ್ಡ್ಗಳಿಗೆ ಒಟ್ಟು 93 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, ಅದೃಷ್ಟ ಲಕ್ಷ್ಮಿ ಯಾರಿಗೆ ಒಲಿಯಲಿದ್ದಾಳೆ ಎನ್ನುವುದು ಪಟ್ಟಣದ ಜನತೆಯಲ್ಲಿ ತೀವ್ರ ಕುತೂಹಲ ಕೆರಳಿಸಿದೆ. ಈ ಬಾರಿ ಪಕ್ಷದ ಬಿ ಫಾರ್ಮ್ ಸಿಗದ ಕೆಲವು ಅಭ್ಯರ್ಥಿಗಳು ಪಕ್ಷೇತರರಾಗಿ ಸ್ಪರ್ಧಿಸಿ, ಗೆಲುವ ಸಾಧಿಸಬೇಕೆಂಬ ಛಲದಿಂದ ಕಣಕ್ಕಿಳಿದಿದ್ದು, ಬಿಜೆಪಿ, ಕಾಂಗ್ರೆಸ್, ಬಿಎಸ್ಆರ್ ಕಾಂಗ್ರೆಸ್, ಜೆಡಿಎಸ್ ಅಭ್ಯರ್ಥಿಗಳಿಗೆ ಅವರ ಚಿಂತೆ ಕಾಡ ತೊಡಗಿದೆ.
ಇನ್ನು ಕೆಲವು ಪಕ್ಷೇತರ ಅಭ್ಯರ್ಥಿಗಳು ತಮ್ಮ ದೂರದ ಊರಿನಲ್ಲಿರುವ ಬಂಧು-ಬಳಗವನ್ನು ಮರಳಿ ನಗರಕ್ಕೆ ಕರೆಸಿಕೊಳ್ಳುವುದರಲ್ಲಿ ಮಗ್ನರಾಗಿರುವುದು ಎಲ್ಲೆಡೆ ಕಂಡು ಬರುತ್ತಿದೆ. ಇನ್ನು ಕೆಲವು ಪಕ್ಷೇತರ ಅಭ್ಯರ್ಥಿಗಳು ಸೇರಿ ಚುನಾವಣೆಯನ್ನು ಹೇಗೆ ಎದುರಿಸಬೇಕು. ಹಾಗೂ ರಾಷ್ಟ್ರೀಯ ಪಕ್ಷದ ಅಭ್ಯರ್ಥಿಗಳನ್ನು ಹೇಗೆ ಸೋಲಿಸಬೇಕು ಎಂಬ ಕಾರ್ಯತಂತ್ರ ಹೆಣೆಯುತ್ತಿರುವುದು ಪಟ್ಟಣದಲ್ಲಿ ಕಂಡು ಬರುತ್ತಿದೆ.
ಪ್ರಚಾರ ಬಲು ಜೋರು: ಪ್ರಮುಖ ಪಕ್ಷದ ಅಭ್ಯರ್ಥಿಗಳು ಹಾಗೂ ಪಕ್ಷೇತರ ಅಭ್ಯರ್ಥಿಗಳು ಸಾರ್ವಜನಿಕ ಪ್ರಚಾರ ಕಾರ್ಯಕ್ರಮದಲ್ಲಿ ತೊಡಗಿರುವುದು ಪಟ್ಟಣದಾದ್ಯಂತ ಕಂಡು ಬರುತ್ತಿದೆ. ಇನ್ನು ಕೆಲವರು ಬೆಳಗಿನ ವೇಳೆಯಲ್ಲಿಯೇ ಪ್ರಚಾರ ಆರಂಭಿಸಿದ್ದಾರೆ. ಪಟ್ಟಣದ ಎಲ್ಲ ವಾರ್ಡ್ಗಳಲ್ಲಿ ಕಾರ್ಯಕರ್ತರು ವಿವಿಧ ಪಕ್ಷದ ಬಾವುಟಗಳನ್ನು ಹಿಡಿದು ತಮ್ಮ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸುವಂತೆ ಜನರ ಮನವೊಲಿಸುತ್ತಿದ್ದಾರೆ. ಇನ್ನು ಪಕ್ಷೇತರ ಅಭ್ಯರ್ಥಿಗಳು ತಾವು ವಾರ್ಡ್ಗಳಲ್ಲಿ ಕೈಗೊಂಡ ಅಭಿವೃದ್ಧಿ ಕುರಿತು ಮನೆ ಮನೆಗೂ ಮಾಹಿತಿ ನೀಡುವ ಮೂಲಕ ಪಕ್ಷೇತರ ಅಭ್ಯರ್ಥಿಗಳನ್ನೇ ಗೆಲ್ಲಿಸುವಂತೆ ಕೋರುತ್ತಿರುವುದು ಒಂದೆಡೆಯಾದರೆ, ಇನ್ನು ಪ್ರಮುಖ ಪಕ್ಷದ ಅಭ್ಯರ್ಥಿಗಳು ತಮ್ಮ ಪಕ್ಷವು ಕೈಗೊಂಡ ಅಭಿವೃದ್ಧಿ ಕಾರ್ಯಗಳ ಕುರಿತು ಜನರಿಗೆ ಮಾಹಿತಿ ನೀಡುವ ಮೂಲಕ ಪ್ರಚಾರ ನಡೆಸುತ್ತಿದ್ದಾರೆ.
ಒಟ್ಟಾರೆ ಚುನಾವಣೆಯ ಅಖಾಡಕ್ಕೆ ಇಳಿದ ಪ್ರಮುಖ ಪಕ್ಷದ ಅಭ್ಯರ್ಥಿಗಳು ಜನರಿಗೆ ಭರವಸೆಗಳ ಸುರಿಮಳೆಯನ್ನೇ ಸುರಿಸುತ್ತಾ ಮತ ಕೇಳುತ್ತಿದ್ದಾರೆ. ರಾಷ್ಟ್ರೀಯ ಪಕ್ಷಗಳ ಹಗರಣಗಳ ಕುರಿತು ಮತದಾರರಿಗೆ ತಿಳಿಸಿ, ತಮ್ಮನ್ನೇ ಚುನಾಯಿಸುವಂತೆ ಪಕ್ಷೇತರ ಅಭ್ಯರ್ಥಿಗಳು ಪ್ರಚಾರ ಮಾಡುತ್ತಿದ್ದಾರೆ. ಆದರೆ, ಪ್ರಜ್ಞಾವಂತ ಜನರು ಯಾರಿಗೆ ಮತ ನೀಡಿ ಆಶೀರ್ವದಿಸುತ್ತಾರೋ ಕಾದು ನೋಡಬೇಕಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

