ಬಿಜೆಪಿಯಿಂದ ಜನತೆಗೆ ಭ್ರಮನಿರಸ
ಗದಗ: ರಾಜ್ಯದಲ್ಲಿ ರೈತರ ಹೆಸರಿನಲ್ಲಿ ಅಧಿಕಾರಕ್ಕೆ ಬಂದಿರುವ ಬಿಜೆಪಿ ಸರ್ಕಾರದ ದುರಾಡಳಿತ ಮತ್ತು ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಯಾವಾಗಲಾದರೂ ತೊಲಗುತ್ತದೆಯೋ ಎನ್ನುವಷ್ಟರ ಮಟ್ಟಿಗೆ ಜನತೆ ಬೇಸರಗೊಂಡಿದ್ದು, ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜಿಲ್ಲೆಯ ಎಲ್ಲ ಪುರಸಭೆ, ಪಟ್ಟಣ ಪಂಚಾಯ್ತಿಗಳಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ, ಮಾಜಿ ಶಾಸಕ ಜಿ.ಎಸ್. ಗಡ್ಡದೇವರಮಠ ವಿಶ್ವಾಸ ವ್ಯಕ್ತಪಡಿಸಿದರು.
ಈ ಕುರಿತು 'ಕನ್ನಡಪ್ರಭ'ದೊಂದಿಗೆ ಮಾತನಾಡಿದ ಅವರು, ಜಿಲ್ಲೆಯ 4 ಶಾಸಕರು ಬಿಜೆಪಿ ಸರ್ಕಾರ ಮಾಡಿದ ಸಾಧನೆಗಳ ಬಗ್ಗೆ ಈ ಮೊದಲು 'ಕನ್ನಡಪ್ರಭ'ಕ್ಕೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ. ಅಭಿವೃದ್ಧಿ ಕಾಮಗಾರಿಗಳನ್ನು ನಾವು ಸ್ವಾಗತಿಸುತ್ತೇವೆ. ಆದರೆ, ಇಲ್ಲಿ ಮುಖ್ಯ ಪ್ರಶ್ನೆ ಎಂದರೆ, ಈ ಎಲ್ಲ ಯೋಜನೆಗಳು ಕೇವಲ ಘೋಷಣೆಗಳಾಗಿ ಮಾತ್ರ ಉಳಿದಿವೆ. ಅನುಷ್ಠಾನದಲ್ಲಿ ಶೇ. 50ರಷ್ಟು ಪ್ರಗತಿ ಸಾಧಿಸಿಲ್ಲ. ಇವರು ಹೇಳುವುದೇ ಬೇರೆ, ವಾಸ್ತವವಾಗಿ ನಗರ ಹಾಗೂ ಪಟ್ಟಣ ಪ್ರದೇಶಗಳಲ್ಲಿ ಇರುವ ಸ್ಥಿತಿಯೇ ಬೇರೆಯಾಗಿದೆ ಎಂದು ಬಿಜೆಪಿ ಸರ್ಕಾರದ ಕಾರ್ಯ ವೈಖರಿಯನ್ನು ಲೇವಡಿ ಮಾಡಿದರು.
ಕಾಂಗ್ರೆಸ್ ಪಕ್ಷದಲ್ಲಿನ ಭಿನ್ನಾಭಿಪ್ರಾಯದ ಕುರಿತು ಕೇಳಿದಾಗ, ನಮ್ಮ ಪಕ್ಷದಲ್ಲಿನ ನಾಯಕರಲ್ಲಿ ಮುಖ್ಯವಾಗಿ ಕಾಯಕರ್ತರಲ್ಲಿ ಯಾವುದೇ ಗೊಂದಲವಿಲ್ಲ. ನಾವೆಲ್ಲಾ ಒಗ್ಗಟ್ಟಾಗಿಯೇ ಚುನಾವಣೆ ಎದುರಿಸುತ್ತೇವೆ ಹಾಗೂ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುತ್ತೇವೆ ಎನ್ನುವ ಅಚಲ ನಂಬಿಕೆ ಇದೆ. ಸರ್ಕಾರದ ಮುಖ್ಯಮಂತ್ರಿಗಳ ಸಣ್ಣ ಮತ್ತು ಮಧ್ಯಮ ಪಟ್ಟಣಗಳ ಅನುದಾನದಲ್ಲಿಯೂ ಜಿಲ್ಲೆಯ ಕೆಲ ಪಟ್ಟಣ ಪಂಚಾಯ್ತಿ ಮತ್ತು ಪುರಸಭೆಗಳಲ್ಲಿ ಸಾಕಷ್ಟು ಭ್ರಷ್ಟಾಚಾರ ನಡೆದಿದೆ ಎಂದು ನಮ್ಮ ಸ್ಥಳೀಯ ಕಾರ್ಯಕರ್ತರು ಹೇಳುತ್ತಿದ್ದು, ಈ ಎಲ್ಲ ಅಂಶಗಳನ್ನು ಸಾರ್ವಜನಿಕರು ಗಂಭೀರವಾಗಿ ಪರಿಗಣಿಸಿದ್ದಾರೆ ಎಂದರು.
ಈ ಚುನಾವಣೆಯಲ್ಲಿನ ಅವರ ಎದುರಾಳಿಯ ಕುರಿತು ಮಾತನಾಡಿದ ಅವರು, ಬಿಜೆಪಿಯೇ ನಮ್ಮ ನೇರ ಎದುರಾಳಿಯಾಗಿದೆ. ಕೆಲವಾರು ವಾರ್ಡ್ಗಳಲ್ಲಿ ಪ್ರಾದೇಶಿಕ ಪಕ್ಷಗಳು ಹೆಚ್ಚಿನ ಪೈಪೋಟಿ ನೀಡುವ ಸಾಧ್ಯತೆ ಇದೆ. ಆದರೆ ನಮ್ಮ ಎದುರಾಳಿ ಮಾತ್ರ ಬಿಜೆಪಿ, ಜನತೆಗೆ ಬೇಸರ ಮೂಡಿಸಿರುವ ಬಿಜೆಪಿಯನ್ನು ಅಧಿಕಾರದಿಂದ ದೂರವಿಡುವ ನಿಟ್ಟಿನಲ್ಲಿ ನಮ್ಮ ಯುವ ಕಾರ್ಯಕರ್ತರ ಪಡೆ ಹಗಲಿರುಳು ಶ್ರಮಿಸುತ್ತಿದೆ ಎಂದರು.
ಗದಗ, ಬೆಟಗೇರಿ ಅವಳಿ ನಗರ ಸೇರಿದಂತೆ ಉತ್ತರ ಕರ್ನಾಟಕ ಭಾಗದಲ್ಲಿನ ಜನರು ಎದುರಿಸುತ್ತಿದ್ದ ಶುದ್ಧ ಕುಡಿವ ನೀರಿನ ಕೊರತೆಯನ್ನು ನೀಗಿಸುವ ನಿಟ್ಟಿನಲ್ಲಿ ಮಾಜಿ ಸಚಿವರು ಹಾಗೂ ನಮ್ಮ ನಾಯಕರಾದ ಎಚ್.ಕೆ. ಪಾಟೀಲರು ಜಾರಿಗೆ ತಂದಿರುವ ಶುದ್ಧ ಕುಡಿವ ನೀರಿನ ಘಟಕಗಳು ಸಾರ್ವಜನಿಕರ ಪಾಲಿನ ಆಶಾಕಿರಣವಾಗಿದ್ದು, ಗದಗ, ಬೆಟಗೇರಿ ಅವಳಿ ನಗರದಲ್ಲಿನ ಜನತೆ ನಿತ್ಯ ಶುದ್ಧ ನೀರು ಕುಡಿದಾಗಲೆಲ್ಲಾ ಎಚ್.ಕೆ. ಪಾಟೀಲರನ್ನು ನೆನೆಸುವಂತಾಗಿದೆ. ಈ ಎಲ್ಲ ಅಂಶಗಳು ನಮ್ಮ ಅಭ್ಯರ್ಥಿಗಳಿಗೆ ಶ್ರೀರಕ್ಷೆಯಾಗಿದ್ದು, ಪಕ್ಷವು ಅಧಿಕಾರಕ್ಕೆ ಬರುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದರು.
ನಮ್ಮ ಪಕ್ಷವು ಈ ಬಾರಿ ಯುವಕರಿಗೆ ಹೆಚ್ಚಿನ ಪ್ರಾಧಾನ್ಯ ನೀಡಿದ್ದು, ಮುಂದಿನ ಸ್ಥಳೀಯ ಸಂಸ್ಥೆಗಳಲ್ಲಿ ಯುವಕರೇ ಹೆಚ್ಚಿನ ಸಂಖ್ಯೆಯಲ್ಲಿ ಚುನಾಯಿತರಾಗುವುದರಿಂದ ಸ್ಥಳೀಯ ಸಂಸ್ಥೆಗಳಲ್ಲಿ ಹೊಸ ಚೈತನ್ಯ ಮೂಡಲಿದೆ. ಆ ಮೂಲಕ ಎಲ್ಲರ ಸಮಸ್ಯೆಗೆ ಸ್ಪಂದಿಸಲಾಗುವುದು. ಈ ವಿಷಯದಲ್ಲಿ ನಮ್ಮ ಪಕ್ಷ ತೆಗೆದುಕೊಂಡಿರುವ ನಿರ್ಧಾರ ಎಲ್ಲರಿಂದಲೂ ಮೆಚ್ಚುಗೆಗೆ ಪಾತ್ರವಾಗಲಿದ್ದು, ಉತ್ತಮ ಆಡಳಿತ ಭರವಸೆಯೊಂದಿಗೆ ನಾವು ಅಧಿಕಾರಕ್ಕೆ ಬಂದು ಅದನ್ನು ಸಾಕಾರಗೊಳಿಸುತ್ತೇವೆಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

