ಗದಗ

ಇಂದಿನಿಂದ ಕೈಮಗ್ಗ ಮೇಳ ವಸ್ತ್ರಸಿರಿ

Published On :

ಕನ್ನಡಪ್ರಭ ವಾರ್ತೆ, ಗದಗ, ಮಾ. 20
ಅಭಿವೃದ್ಧಿ ಆಯುಕ್ತರು (ಕೈಮಗ್ಗ) ಜವಳಿ ಮಂತ್ರಾಲಯ ಭಾರತ ಸರ್ಕಾರ ಹಾಗೂ ಕೈಮಗ್ಗ ಮತ್ತು ಜವಳಿ ಇಲಾಖೆ ಇವುಗಳ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಕೈಮಗ್ಗ ಮೇಳ ವಸ್ತ್ರಸಿರಿ-2013 ಮಾ. 21 ರಿಂದ 25 ರವರೆಗೆ ನಗರದ ಜ. ತೋಂಟದಾರ್ಯ ಮಠದ ಆವರಣದಲ್ಲಿ ಏರ್ಪಡಿಸಲಾಗಿದೆ ಎಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪನಿರ್ದೇಶಕ ಎನ್.ಟಿ. ನೆಗಳೂರ ಹೇಳಿದರು.
ಅವರು ಬುಧವಾರ ಜ. ತೋಂಟದಾರ್ಯ ಮಠದ ಆವರಣದಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 2011-12ನೇ ಸಾಲಿಗೆ ಏರ್ಪಡಿಸಿದ್ದ ಮೇಳದಲ್ಲಿ 20 ಸಹಕಾರಿ ಸಂಘಗಳು ಭಾಗವಹಿಸಿದ್ದು, ಸುಮಾರು ರು. 13.30 ಲಕ್ಷದಷ್ಟು ವ್ಯಾಪಾರ ವಹಿವಾಟು ನಡೆಸಲಾಗಿದೆ. ಗದಗ ಜಿಲ್ಲೆ ಹಾಗೂ ರಾಜ್ಯದಲ್ಲಿರುವ ಕೈಮಗ್ಗ ನೇಕಾರ ಸಹಕಾರಿ ಸಂಘಗಳು ಹಾಗೂ ಎನ್‌ಜಿಓಗಳು ಉತ್ಪಾದಿಸುವ ಕೈಮಗ್ಗದ ಉತ್ಪನ್ನಗಳನ್ನು ಒಂದೇ ಸೂರಿನಡಿ ಮಾರಾಟ ಮಾಡಲು ಅನುಕೂಲವಾಗುವಂತೆ ಹಾಗೂ ಕೈಮಗ್ಗ ಉತ್ಪನ್ನಗಳನ್ನು ಪ್ರೋತ್ಸಾಹಿಸಲು ಜಿಲ್ಲಾ ಮಟ್ಟದ ಕೈಮಗ್ಗ ಮೇಳವನ್ನು ಏರ್ಪಡಿಸಲಾಗುತ್ತದೆ ಎಂದರು.
ಈ ಮೇಳದಲ್ಲಿ ಭಾಗವಹಿಸುವ ವಿವಿಧ ನೇಕಾರ ಸಹಕಾರಿ ಸಂಘ, ಸಂಸ್ಥೆಗಳು ತಮ್ಮ ಕೈಮಗ್ಗಗಳಲ್ಲಿ ತಯಾರಾದ ಉತ್ಪನ್ನಗಳನ್ನು ಪ್ರದರ್ಶನ ಹಾಗೂ ಮಾರಾಟ ಮಾಡಲು ಅನುಕೂಲವಾಗುವಂತೆ ಎಲ್ಲ ಮೂಲಭೂತ ಸೌಕರ್ಯಗಳನ್ನು ಉಚಿತವಾಗಿ ಒದಗಿಸಲಾಗುವುದು. ಪ್ರಸಕ್ತ ಸಾಲಿನಲ್ಲಿ ಕೈಮಗ್ಗ ಮೇಳವನ್ನು ಗದಗದಲ್ಲಿ ಆಯೋಜಿಸಲಾಗಿದೆ. ಜಿಲ್ಲೆಯ ಹಾಗೂ ರಾಜ್ಯದ ವಿವಿಧ ಜಿಲ್ಲೆಗಳಿಂದ ಸುಮಾರು 20 ಸಂಘ, ಸಂಸ್ಥೆಗಳು ಭಾಗವಹಿಸುವ ನಿರೀಕ್ಷೆಯಿದೆ.
ಈ ಮೇಳದಲ್ಲಿ ಕೈಮಗ್ಗ ಉತ್ಪನ್ನಗಳಾದ ಟಾವೆಲ್, ಲುಂಗಿ, ಬೆಡ್‌ಶೀಟ್, ಕಂಬಳಿ, ಜಮಖಾನೆ, ಕಸೂತಿ ಸೀರೆ, ಇಳಕಲ್ಲ ಸೀರೆ ಹಾಗೂ ಅಪ್ಪಟ ರೇಷ್ಮೆ ಸೀರೆ ಇತ್ಯಾದಿ ಹಾಸಿಗೆ, ಹೊದಿಕೆ, ಕೈಮಗ್ಗ ಉತ್ಪನ್ನಗಳ ಪ್ರದರ್ಶನ ಹಾಗೂ ಮಾರಾಟಕ್ಕೆ ಲಭ್ಯವಿರುತ್ತದೆ. ಮೇಳದಲ್ಲಿ ಸುಮಾರು 15-20 ಲಕ್ಷದ ಮೌಲ್ಯದ ಕೈಮಗ್ಗ ಉತ್ಪನ್ನಗಳು ಮಾರಾಟವಾಗುವ ನಿರೀಕ್ಷೆ ಹೊಂದಲಾಗಿದೆ. ಸಾರ್ವಜನಿಕರು ಮೇಳಕ್ಕೆ ಭೇಟಿ ನೀಡಿ, ಕೈಮಗ್ಗ ಉತ್ಪನ್ನಗಳನ್ನು ಖರೀದಿಸಿ ಕೈಮಗ್ಗ ನೇಕಾರರಿಗೆ ಹೆಚ್ಚಿನ ಪ್ರೋತ್ಸಾಹ ನೀಡುವಂತೆ ಕೋರಿದರು.  ಮಾ. 21 ರಂದು ಸಂಜೆ 5 ಗಂಟೆಗೆ ನಡೆಯುವ ಕಾರ್ಯಕ್ರಮದ ಉದ್ಘಾಟನೆಯನ್ನು ಜಿಪಂ ಅಧ್ಯಕ್ಷ ಎಂ.ಎಸ್. ಪಾಟೀಲ ನೆರವೇರಿಸುವರು. ಅಧ್ಯಕ್ಷತೆಯನ್ನು ಶಾಸಕ ಶ್ರೀಶೈಲಪ್ಪ ಬಿದರೂರ ವಹಿಸುವರು. ಅತಿಥಿಗಳಾಗಿ ಜಿಪಂ ಉಪಾಧ್ಯಕ್ಷ ರಮೇಶ ಮುಂದಿನಮನಿ, ಸದಸ್ಯೆ ಕಮಲವ್ವ ಸಜ್ಜನರ, ಜಿಲ್ಲಾಧಿಕಾರಿ ಪಾಂಡುರಂಗ ನಾಯಕ, ಜಿಪಂ ಸಿಇಓ ವೀರಣ್ಣ ತುರಮರಿ, ಕೈಮಗ್ಗ ಮತ್ತು ಜವಳಿ ಇಲಾಖೆಯ ಜಂಟಿ ನಿರ್ದೇಶಕ ಝರೆಪ್ಪ ಮೊಳಕೇರಿ, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಆರ್.ಐ. ಕುಂಬಾರ ಮುಂತಾದವರು ಆಗಮಿಸುವರು ಎಂದರು. ಸುದ್ದಿಗೋಷ್ಠಿಯಲ್ಲಿ ಎಸ್.ಎನ್. ಕುಂಬಾರ, ಎ.ಎಸ್. ಹಿರೇಮಠ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.