ಅನುದಾನ ಬಿಡುಗಡೆ ಲೆಕ್ಕ ಕೊಡಲಿ
ಕನ್ನಡಪ್ರಭ ವಾರ್ತೆ, ಗದಗ, ಮೇ 1
5 ವರ್ಷಗಳಿಂದ ರಾಜ್ಯದ ಬಗ್ಗೆ ಮಾತನಾಡದ ಪ್ರಧಾನ ಮಂತ್ರಿ ಮನಮೋಹನ್ಸಿಂಗ್ ಈಗ ರಾಜ್ಯಕ್ಕೆ ನೀಡಿದ ಅನುದಾನ ಸರಿಯಾಗಿ ಬಳಕೆಯಾಗಿಲ್ಲ ಎನ್ನುವ ಆರೋಪ ಮಾಡುತ್ತಿದ್ದು, ಮೊದಲು ಬಿಡುಗೆಯಾದ ಹಣದ ಬಗ್ಗೆ ಲೆಕ್ಕ ಕೊಡಲಿ ಎಂದು ಸಿಎಂ ಜಗದೀಶ ಶೆಟ್ಟರ್ ಹೇಳಿದರು.
ಅವರು ಬುಧವಾರ ಜಿಲ್ಲೆಯ ರೋಣ ತಾಲೂಕಿನ ಹೊಳೆಆಲೂರು ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಸಿ.ಸಿ. ಪಾಟೀಲ ಪರ ಪ್ರಚಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಪ್ರಧಾನ ಮಂತ್ರಿ ಈಚೆಗೆ ರಾಜ್ಯಕ್ಕೆ ಬಂದ ವೇಳೆಯಲ್ಲಿ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬಿಡುಗಡೆಯಾದ ಅನುದಾನವನ್ನು ಸರ್ಕಾರ ಸರಿಯಾಗಿ ಬಳಕೆ ಮಾಡಿಕೊಂಡಿಲ್ಲ ಎನ್ನುವ ಆರೋಪ ಮಾಡಿದ್ದು, ಯಾವ ಯೋಜನೆಯಲ್ಲಿ ಎಷ್ಟು ಹಣ ಬಿಡುಗಡೆಯಾಗಿದೆ ಎನ್ನುವ ಬಗ್ಗೆ ಲೆಕ್ಕ ಕೊಡಲಿ, ದೊಡ್ಡ ಸ್ಥಾನದಲ್ಲಿರುವವರು ಈ ರೀತಿ ಮಾತನಾಡುವುದು ಬೇಡ. ಕೇಂದ್ರ ಸರ್ಕಾರ ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಗೆ ರಾಜ್ಯದ ಪಾಲಿನ ಹಣವನ್ನು ಸರಿಯಾದ ಸಮಯದಲ್ಲಿ ನೀಡದೇ ಇರುವುದರಿಂದ ಸಾಕಷ್ಟು ತೊಂದರೆಯಾಗಿದೆ.
ರಾಜ್ಯಕ್ಕೆ ಕೇಂದ್ರದ ಗ್ರೀಡ್ನಿಂದ ನೀಡಬೇಕಾದ ವಿದ್ಯುತ್ ಸರಿಯಾಗಿ ನೀಡುತ್ತಿಲ್ಲ. ಆಹಾರ ಧಾನ್ಯಗಳ ವಿಷಯದಲ್ಲಿ ಕಲ್ಲಿದ್ದಲು ನೀಡಿಕೆ ಹೀಗೆ ಹಲವಾರು ರೀತಿಯಲ್ಲಿ ವಂಚನೆ ಮಾಡಿದ್ದಾರೆ ಎಂದು ದೂರಿದ್ದಾರೆ. ರಾಜ್ಯದಲ್ಲಿನ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ಬಿಜೆಪಿಯನ್ನು ಟೀಕಿಸುವ ಕೇಂದ್ರ ಸರ್ಕಾರದ ನಾಯಕರು ತಮ್ಮ ಸರ್ಕಾರದ ಅವಧಿಯಲ್ಲಿ ಎಷ್ಟೊಂದು ಹಗರಣಗಳು ನಡೆದಿವೆ ಎನ್ನುವ ಬಗ್ಗೆ ಒಮ್ಮೆ ಆತ್ಮಾವಲೋಕನ ಮಾಡಿಕೊಳ್ಳಲಿ. ಈ ವಿಷಯವಾಗಿಯೇ ನಿಮ್ಮ ಸರ್ಕಾರದಲ್ಲಿನ ಅಂಗ ಪಕ್ಷಗಳ ಮಂತ್ರಿಗಳು ಜೈಲು ಪಾಲಾಗಿದ್ದಾರೆ ಎನ್ನುವುದನ್ನು ನೀವೆಲ್ಲಾ ಮರೆತಂತೆ ಕಾಣುತ್ತಿದೆ. ರಾಜ್ಯದಲ್ಲಿ ಮತ್ತೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವುದು ಶತಸಿದ್ಧ. ಕಾಂಗ್ರೆಸ್ ನಾಯಕರು ನಾವೇ ಅಧಿಕಾರಕ್ಕೆ ಬರುತ್ತೇವೆ ಎನ್ನುವ ಭ್ರಮಾ ಲೋಕದಲ್ಲಿದ್ದಾರೆ. ಅದಕ್ಕಾಗಿ ಅವರ ಪಕ್ಷದಲ್ಲಿ ಈಗಗಾಲೇ ಸಿಎಂ ಸ್ಥಾನಕ್ಕಾಗಿ ಪೈಪೋಟಿ ನಡೆದಿದೆ. ಆದರೆ ಅವರಿಗೆ ಇಂದಿಗೂ ಸ್ಪಷ್ಟತೆ ಇಲ್ಲ ಎಂದು ಕಾಂಗ್ರೆಸ್ ಪಕ್ಷವನ್ನು ಟೀಕಿಸಿದರು.
ಜಿಲ್ಲಾ ಬಿಜೆಪಿ ಅಧ್ಯಕ್ಷ ಎಂ.ಎಸ್. ಕರಿಗೌಡ್ರ, ಸಿ.ಸಿ. ಪಾಟೀಲ್ ಪುತ್ರ ಉಮೇಶಗೌಡ, ಗ್ರಾಪಂ ಅಧ್ಯಕ್ಷ ಜಗದೀಶ ಬ್ಯಾಡಗಿ, ಸ್ಥಳೀಯ ಮುಖಂಡರು ವೇದಿಕೆಯಲ್ಲಿದ್ದರು. ಹೊಳೆಆಲೂರ ಹಾಗೂ ಸುತ್ತ ಮುತ್ತಲಿನ ಗ್ರಾಮಗಳ ಕಾರ್ಯಕರ್ತರು, ಅಭಿಮಾನಿಗಳು ಸಾವಿರಾರು ಸಂಖ್ಯೆಯಲ್ಲಿ ನೆರೆದಿದ್ದರು. ಅಲ್ಲದೆ ಸಿಎಂ ಭಾಷಣ ಪ್ರಾರಂಭಿಸುತ್ತಿದ್ದಂತೆ ಜಯಘೋಷ ಹಾಕಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

