ಗದಗ

ಗ್ರಾಮೀಣರಿಗೆ ಶುದ್ಧ ನೀರು ಪೂರೈಸಲು ಕ್ರಮ: ಎಚ್ಕೆ

Published On :

ಕನ್ನಡಪ್ರಭ ವಾರ್ತೆ, ಗದಗ, ಮೇ 22
ರಾಜ್ಯದ ಎಲ್ಲ ಗ್ರಾಮೀಣ ಪ್ರದೇಶಗಳ ಜನತೆಗೆ ಶುದ್ಧ ಕುಡಿವ ನೀರು ಪೂರೈಕೆ ಮಾಡುವ ನಿಟ್ಟಿನಲ್ಲಿ ಸರ್ಕಾರ ಅಗತ್ಯ ಕ್ರಮ ತೆಗೆದುಕೊಳ್ಳಲಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ಸಚಿವ ಎಚ್.ಕೆ. ಪಾಟೀಲ ಹೇಳಿದರು.
ಸಚಿವರಾಗಿ ಗದಗ ನಗರಕ್ಕೆ ಪ್ರಥಮವಾಗಿ ಆಗಮಿಸಿದ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಬುಧವಾರ ನಗರದ ಕಾಟನ್ ಸೇಲ್ ಸೊಸೈಟಿ ಆವರಣದಲ್ಲಿ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿದ್ದ ಅವರು, 30 ಸಾವಿರ ಅಂಗನವಾಡಿ ಕೇಂದ್ರಗಳಲ್ಲಿ ಕುಡಿವ ನೀರಿಗೆ ತೊಂದರೆ ಇದೆ. ಮುಂದೆ ಎಲ್ಲ ಅಂಗನವಾಡಿ ಕೇಂದ್ರಗಳಿಗೆ ಶುದ್ಧ ಕುಡಿವ ನೀರು ಪೂರೈಸಲಾಗುವುದು ಎಂದರು.
ನೀರು ಸಂಗ್ರಹಕ್ಕೆ ಕೆರೆ ನಿರ್ಮಾಣ:  ಗದಗ ನಗರದ ಕುಡಿವ ನೀರಿನ ಸಮಸ್ಯೆ ಬಗ್ಗೆ ಅಧಿಕಾರಿಗಳ ಸಭೆಯಲ್ಲಿ ಚರ್ಚಿಸಿ ಪರಿಹಾರ ಒದಗಿಸಲಾಗುವುದು. ನಗರಕ್ಕೆ 100 ದಿನಗಳಿಗೆ ಸಾಕಾಗುವಷ್ಟು ನೀರು ಸಂಗ್ರಹಿಸಲು ಕೆರೆ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಚಿಂತನೆ ನಡೆಸಲಾಗಿದೆ. ಡಿ.ಆರ್. ಪಾಟೀಲರು ಶಾಸಕರಾಗಿದ್ದಾಗ ನಿರ್ಮಾಣ ಮಾಡಿರುವ ನಗರದ 8 ಕುಡಿವ ನೀರಿನ ಟ್ಯಾಂಕ್ಗಳು ಈವರೆಗೂ ಉಪಯೋಗವಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಜನಜಾಗೃತಿ ಅಗತ್ಯ: ಹಿಂದಿನ ಬಿಜೆಪಿ ಸರ್ಕಾರ ಮಾಡಿದ ಸಾಧನೆ ಶೂನ್ಯ. ಜನರಿಗೆ ಗ್ರಾಮೀಣಾಭಿವೃದ್ಧಿ ಯೋಜನೆಗಳನ್ನು ತಲುಪಿಸಲು ಜನಜಾಗೃತಿ ಮಾಡಬೇಕಿದೆ. ಗ್ರಾಮೀಣಾಭಿವೃದ್ಧಿ ಖಾತೆ ಬಹು ದೊಡ್ಡದಾಗಿದ್ದು, ಗ್ರಾಮೀಣ ಭಾರತವನ್ನು ಅಭಿವೃದ್ಧಿಪಡಿಸಬೇಕಿದೆ ಎಂದು ಎಚ್ಕೆ ಹೇಳಿದರು. ಬಿಜೆಪಿ ಸರ್ಕಾರ ಗದಗ ಕ್ಷೇತ್ರದಲ್ಲಿ ವಸತಿ ಯೋಜನೆಯನ್ನು ಸಮರ್ಪಕವಾಗಿ ಜಾರಿಗೆ ತಂದಿಲ್ಲ. ಇದಕ್ಕಾಗಿ 36 ಎಕರೆ ಭೂಮಿ ವಶಪಡಿಸಿಕೊಂಡು ಮನೆ ನಿರ್ಮಾಣಕ್ಕೆ ಅವಕಾಶ ಕಲ್ಪಿಸಿಕೊಡಲಾಗಿತ್ತು. ರಾಜ್ಯದ ಜನತೆಯ ಆಶೆಯಂತೆ ಅಧಿಕಾರಕ್ಕೆ ಬಂದಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಗದಗ ನಗರದ ಎಲ್ಲ ಅರ್ಹ ಫಲಾನುಭವಿಗಳಿಗೆ ಮನೆಗಳನ್ನು ನೀಡಲಿದೆ ಎಂದರು.
ರೋಣ ಶಾಸಕ ಜಿ.ಎಸ್. ಪಾಟೀಲ ಮಾತನಾಡಿ, ಜಿಲ್ಲೆಯ ನಾಲ್ಕು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಬೇರಿ ಬಾರಿಸಲು ಕಾರಣರಾದ ಮತದಾರ ಪ್ರಭುಗಳಿಗೆ ಕೃತಜ್ಞತೆ ಹೇಳಿ, ಜನರ ಸಮಸ್ಯೆ ಪರಿಹರಿಸಿ, ಭರವಸೆ ಈಡೇರಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತ ನಡೆಸಲಿದೆ ಎಂದರು. ಮಾಜಿ ಶಾಸಕರಾದ ಡಿ.ಆರ್. ಪಾಟೀಲ, ಜಿ.ಎಸ್. ಗಡ್ಡದೇವರಮಠ, ಪರಿಶಿಷ್ಟ ವಿಭಾಗದ ರಾಜ್ಯಾಧ್ಯಕ್ಷ ಟಿ. ಈಶ್ವರ, ಡಾ೤ ಬಿ.ಎಫ್. ದಂಡಿನ, ಗುರಣ್ಣ ಬಳಗಾನೂರ, ಶಿವಣ್ಣ ಮುಳಗುಂದ, ಅಕ್ಬರಸಾಬ ಬಬರ್ಚಿ, ಯಂಕಣ್ಣ ಜಿರಬಂಡಿ, ಎಚ್.ವೈ. ದೇಸಾಯಿಗೌಡ್ರ, ಕೆ.ಬಿ. ತಳಗೇರಿ, ನಿಂಗಪ್ಪ ಪಡಗದ, ಸಾಧಿಕ ನರಗುಂದ, ಬಸವರಾಜ ಕಡೆಮನಿ, ಅನಿಲ ಗರದ, ಪ್ರಕಾಶ ಬಾಕಳೆ, ಬರಕತಅಲಿ ಮುಲ್ಲಾ, ಅಶೋಕ ಮಂದಾಲಿ, ಉಮರ್ ಫಾರೂಕ್ ಹುಬ್ಬಳ್ಳಿ ಇದ್ದರು. ವಿದ್ಯಾಧರ ದೊಡ್ಡಮನಿ ನಿರೂಪಿಸಿದರು.
ಇದಕ್ಕೂ ಮೊದಲು ಮುಳಗುಂದ ನಾಕಾದಲ್ಲಿ ಜಮಾವಣೆಗೊಂಡ ಸಾವಿರಾರು ಕಾರ್ಯಕರ್ತರು ಎಚ್.ಕೆ. ಪಾಟೀಲರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಪಟಾಕಿ ಸಿಡಿಸಿ ಸಂಭ್ರಮಿಸಿದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.